ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಮಧ್ಯಾಹ್ನ 2ರ ನಂತರ ಶಿವಮೊಗ್ಗ ಜಿಲ್ಲೆ ಸಂಪೂರ್ಣ ಬಂದ್

Last Updated 15 ಜುಲೈ 2020, 10:33 IST
ಅಕ್ಷರ ಗಾತ್ರ

ಶಿವಮೊಗ್ಗ: ಕೊರೊನಾ ವೈರಸ್‌ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯಲು ಜುಲೈ 16ರಿಂದ ಜಿಲ್ಲೆಯ ಎಲ್ಲೆಡೆ ಮಧ್ಯಾಹ್ನ 2ರ ನಂತರ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗುತ್ತಿದೆ.

ಮಧ್ಯಾಹ್ನ 2ರ ನಂತರ ಜೀವನಾವಶ್ಯಕ ಸಾಮಗ್ರಿಗಳನ್ನು ಹೊರತುಪಡಿಸಿ ಎಲ್ಲ ಅಂಗಡಿ, ಮುಂಗಟ್ಟುಗಳನ್ನೂ ಬಂದ್‌ ಮಾಡಿಸಲಾಗುವುದು. ಪ್ರತಿ ದಿನ ಬೆಳಿಗ್ಗೆ 5ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಜನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಪರಿಣಾಮಕಾರಿಯಾಗಿ ಭಾಗಶಃ ಲಾಕ್‌ಡೌನ್ ಜಾರಿಗೊಳಿಸಲು ಪೊಲೀಸರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದರು.

ಯಾವುದೇ ಹಬ್ಬಗಳನ್ನು ಸಾಮೂಹಿಕವಾಗಿ ಆಚರಿಸಲು ಅವಕಾಶ ಇಲ್ಲ. ಎಲ್ಲಾ ಹಬ್ಬಗಳನ್ನೂ ಮನೆಗಳಲ್ಲಿ ಆಚರಿಸಬಹುದು. ಮದುವೆ, ಅಂತ್ಯಸಂಸ್ಕಾರ ಚಟುವಟಿಕೆಗಳಿಗೆ ಈ ಹಿಂದೆ ನಿಗದಿಪಡಿಸಲಾಗಿದ್ದ ಮಾನದಂಡ ಕಟ್ಟುನಿಟ್ಟಿನಿಂದ ಪಾಲಿಸಬೇಕು. ಅಂತರವನ್ನು ಕಾಯ್ದುಕೊಳ್ಳದೇ ಗುಂಪು ಗೂಡುವುದು, ಮಾಸ್ಕ್ ಧರಿಸದೇ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ ಎಂದರು.

ಮದ್ಯ, ಪೆಟ್ರೋಲ್‌ ಸಹ ಬಂದ್‌

ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ವಿವಿಧ ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನೂ ಮಧ್ಯಾಹ್ನ 2ರ ನಂತರ ಸ್ಥಗಿತಗೊಳಿಸಲಾಗುವುದು. ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಇಲ್ಲ. ಕೈಗಾರಿಕಾ ಚಟುವಟಿಕೆಗಳಿಗೆ ಸಮಯ ನಿರ್ಬಂಧ ವಿಧಿಸಿರುವುದಿಲ್ಲ. ಆದರೆ, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ಗುರುತಿನ ಚೀಟಿ ಹೊಂದಿರಬೇಕು. ಕಾರ್ಮಿಕರಿಗೆ ಗುರುತಿನ ಚೀಟಿ ಒದಗಿಸುವುದು ಆಯಾ ಮಾಲೀಕರ ಜವಾಬ್ದಾರಿ ಎಂದು ಸಚಿವರು ಸ್ಪಷ್ಟಪಡಿಸಿದರು.

ಸಮಾಲೋಚನಾ ಸಭೆ

ಜಿಲ್ಲಾಡಳಿತದ ನೂತನ ಸಭಾಂಗಣದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಲಾರಿ ಮಾಲಿಕರ ಸಂಘ, ಅಟೊ ಕಾಂಪ್ಲೆಕ್ಸ್ ಮಾಲೀಕರ, ಕಾರ್ಮಿಕರ ಸಂಘ, ಸಗಟು ತರಕಾರಿ ವ್ಯಾಪಾರಿಗಳ ಸಂಘ, ಮಾಚೇನಹಳ್ಳಿ ಕೈಗಾರಿಕಾ ವಸಾಹತು ಸಂಘ, ವಿಶ್ವೇಶ್ವರಯ್ಯ ಸಣ್ಣ ಕೈಗಾರಿಕೆಗಳ ಸಂಘ, ಬಸ್ ಮಾಲೀಕರ ಸಂಘ, ಜವಳಿ ವರ್ತಕರ ಸಂಘ, ರಿಕ್ಷಾ ಚಾಲಕರ ಒಕ್ಕೂಟ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.

ಕೈಗಾರಿಕೆಗಳಿಗೆ ವಿನಾಯಿತಿ ನೀಡಬೇಕು. ಅಟೊ ಕಾಂಪ್ಲೆಕ್ಸ್‌ಗಳಲ್ಲಿ ಸಂಜೆ 6ರವರೆಗೆ ಚಟುವಟಿಕೆಗಳಿಗೆ ಅವಕಾಶ ನೀಡಬೇಕು. ಸೀಲ್‍ಡೌನ್ ಪ್ರದೇಶದಲ್ಲಿರುವ ಬಡವರಿಗೆ ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ತರಕಾರಿ, ದಿನಸಿ ವಿತರಿಸಬೇಕು. ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮುಖಂಡರು ಸಲಹೆಗಳು ನೀಡಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ವಿಧಾನ ಪರಿಷತ್‌ ಸದಸ್ಯರಾದ ಆಯನೂರು ಮಂಜುನಾಥ್‌, ಆರ್‌.ಪ್ರಸನ್ನ ಕುಮಾರ್, ಮೇಯರ್ ಸುವರ್ಣಾ ಶಂಕರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಕುಮಾರ್, ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಗುರುಮೂರ್ತಿ, ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT