ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೋವಿಡ್‌: ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಿಸುವ ವೈದ್ಯರ ಬಂಧಿಸಿ’

ಸರ್ಕಾರಕ್ಕೆ ಮಾನವ ಹಕ್ಕುಗಳ ಆಯೋಗ ತಾಕೀತು
Last Updated 3 ಆಗಸ್ಟ್ 2020, 22:55 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್‌ ಚಿಕಿತ್ಸೆಗಾಗಿ ಎಲ್ಲ ರೀತಿಯ ಸೌಲಭ್ಯಗಳನ್ನು ತಕ್ಷಣವೇ ಒದಗಿಸಬೇಕು. ಈ ಸಂಬಂಧ ಒಂದೇ ಒಂದು ದೂರು ಬರಬಾರದು’ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ಕಟ್ಟಪ್ಪಣೆ ಮಾಡಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್‌ ರೋಗಿಯನ್ನು ದಾಖಲಿಸಿಕೊಳ್ಳಲು ಮತ್ತು ಚಿಕಿತ್ಸೆ ನೀಡಲು ನಿರಾಕರಿಸಿದರೆ, ಅಂತಹ ವೈದ್ಯರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸಿ ಎಂದೂ ಆಯೋಗ ತಾಕೀತು ಮಾಡಿದೆ.

ಕಾಂಗ್ರೆಸ್‌ನ ಹಿರಿಯ ಶಾಸಕ ಎಚ್.ಕೆ.ಪಾಟೀಲ ಸಲ್ಲಿಸಿದ್ದ ದೂರಿನ ವಿಚಾರಣೆಯನ್ನು ನಡೆಸಿದ ಆಯೋಗದ ಅಧ್ಯಕ್ಷ ಡಿ.ಎಚ್‌.ವಘೇಲಾ ಅವರು ಈ ಸಂಬಂಧ ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಜಾವೇದ್‌ ಅಖ್ತರ್‌‌ ಅವರಿಗೆ ನಿರ್ದೇಶನ ನೀಡಿದ್ದಾರೆ.

ಕೋವಿಡ್‌ನಿಂದ ಮೃತಪಟ್ಟವರ ಶವಸಂಸ್ಕಾರ ಹೇಗೆ ಮಾಡಬೇಕು ಎಂಬುದರ ಶಿಷ್ಟಾಚಾರದ ಮಾಹಿತಿಯನ್ನು ಮಾಧ್ಯಮಗಳಲ್ಲಿ ಪ್ರಕಟಿಸಬೇಕು ಎಂದು ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಾವೇದ್‌ ಅಖ್ತರ್‌, ‘ನಾಳೆಯೇ ಶವ ಸಂಸ್ಕಾರದ ಮಾಹಿತಿಯನ್ನು ಮಾಧ್ಯಮಗಳಲ್ಲಿ ಪ್ರಕಟಿಸಲಾಗುವುದು’ ಎಂದು ಭರವಸೆ ನೀಡಿದರು. ಪಿಪಿಇ ಕಿಟ್‌ಗಳ ಸಮಸ್ಯೆಯನ್ನು ಆಗಸ್ಟ್‌10 ರೊಳಗೆ ಇತ್ಯರ್ಥಗೊಳಿಸಲಾಗುವುದು ಎಂದೂ ತಿಳಿಸಿದರು.

ಎಚ್‌.ಕೆ.ಪಾಟೀಲ ಅವರು ಆಯೋಗಕ್ಕೆ ಎರಡು ಪತ್ರಗಳು ಮತ್ತು ದೂರವಾಣಿ ಮೂಲಕ ದೂರು ನೀಡಿದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಮತ್ತು ಪಾಟೀಲ ಅವರನ್ನು ವಿಚಾರಣೆಗೆ ಆಯೋಗದ ಅಧ್ಯಕ್ಷರು ಕರೆಸಿದ್ದರು.

ಕೊರೊನಾದಿಂದ ಸಾವಿರಾರು ಜನ ಸೋಂಕಿತರಾಗಿದ್ದು, ಆಸ್ಪತ್ರೆಗಳಲ್ಲಿ ಹಾಸಿಗೆಗಳು ಸಿಗುತ್ತಿಲ್ಲ. ಗುಣಮಟ್ಟದ ಚಿಕಿತ್ಸೆ ಸಿಗುತ್ತಿಲ್ಲ. ವೈದ್ಯರು, ನರ್ಸ್‌ಗಳು, ಆರೋಗ್ಯ ಕಾರ್ಯಕರ್ತರಿಗೆ ಪಿಪಿಇ ಕಿಟ್‌ಗಳು ಸಿಗುತ್ತಿಲ್ಲ. ರೋಗಿಗಳನ್ನು ಸಾಗಿಸಲು ಆಂಬುಲೆನ್ಸ್‌ಗಳು ಲಭ್ಯವಿಲ್ಲ. ಮೃತಪಟ್ಟ ರೋಗಿಗಳನ್ನು ಗೌರವದಿಂದ ಸಂಸ್ಕಾರ ಮಾಡುವ ವ್ಯವಸ್ಥೆಯೂ ಇಲ್ಲ. ಒಟ್ಟಾರೆ ರಾಜ್ಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ಪಾಟೀಲ ದೂರಿನಲ್ಲಿ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT