ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗಿನಲ್ಲಿ ಧಾರಾಕಾರ ಮಳೆ

ಮಲೆನಾಡು, ಕರಾವಳಿ, ಉತ್ತರ ಒಳನಾಡಿನಲ್ಲಿ ಉತ್ತಮ ಮಳೆ
Last Updated 2 ಆಗಸ್ಟ್ 2020, 22:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಮುಂಗಾರು ಚುರುಕುಗೊಂಡಿದ್ದು, ಕೊಡಗಿನಲ್ಲಿ ಧಾರಾಕಾರ ಮಳೆ ಸುರಿ ದಿದೆ. ಕರಾವಳಿ, ಮಲೆನಾಡು ಹಾಗೂ ಇತರ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆ ಬಿದ್ದಿದೆ. ಹಲವೆಡೆ ಮನೆಗಳಿಗೆ ಹಾನಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಅಲಬಿಮೂಲೆಯಲ್ಲಿ ಭಾನು ವಾರ ಮನೆಯ ಅಡುಗೆ ಕೋಣೆಯ ಮೇಲೆ ಆವರಣ ಗೋಡೆ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಮಹಿಳೆ ಹೊರಗೆ ಬಂದು ಅಪಾಯದಿಂದ ಪಾರಾಗಿದ್ದಾರೆ. ಬಂಟ್ವಾಳ ತಾಲ್ಲೂಕಿನ ಪುದು ಗ್ರಾಮದ ಅಮ್ಮೆಮಾರ್‌ನಲ್ಲಿ ಮನೆಯ ಆವರಣ ಗೋಡೆ ಕುಸಿದು ಕಾರು ಜಖಂಗೊಂಡಿದೆ. ಜಿಲ್ಲೆಯಲ್ಲಿ ಸರಾಸರಿ 6 ಸೆಂ.ಮೀ. ಮಳೆ ದಾಖಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಭಾನುವಾರ ಮಳೆ ಬಿರುಸಾಗಿದ್ದು, ಕುಂದಾಪುರ, ಬೈಂದೂರು, ಹೆಬ್ರಿ, ಕಾಪು ಹಾಗೂ ಬ್ರಹ್ಮಾವರದಲ್ಲಿ ಉತ್ತಮ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 4.3 ಸೆಂ.ಮೀ. ಮಳೆಯಾಗಿದೆ. ಕೊಡಗಿನಲ್ಲಿ ಭಾನುವಾರ ದಿನವಿಡೀ ಧಾರಾಕಾರ ಮಳೆಯಾಗಿದೆ.ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.

ಮಡಿಕೇರಿ, ಸಿದ್ದಾಪುರ, ಚೆಟ್ಟಳ್ಳಿ, ಪೊನ್ನಂಪೇಟೆ, ಶ್ರೀಮಂಗಲ, ಹುದಿ ಕೇರಿ, ಸಂಪಾಜೆ, ಶಾಂತಳ್ಳಿ ಭಾಗದಲ್ಲೂ ಜೋರು ಮಳೆಯಾಗಿದೆ. ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಮಳೆ ಅಬ್ಬರಿಸುತ್ತಿದ್ದು, ಜಲಾಶಯದ ಒಳಹರಿವು ಮತ್ತೆ ಏರಿಕೆಯಾಗಿದೆ. ಜುಲೈ ತಿಂಗಳಲ್ಲಿ ವಾಡಿಕೆಯಷ್ಟು ಮಳೆ ಸುರಿದಿರಲಿಲ್ಲ. ಆಗಸ್ಟ್‌ ಮೊದಲ ವಾರವೇ ಮಳೆ ಬಿರುಸು ಪಡೆದಿದ್ದು ಕೃಷಿಕರಲ್ಲಿ ಹರ್ಷ ಮೂಡಿಸಿದೆ.

ಬೆಳಗಾವಿ, ಹೊಸಪೇಟೆ, ಹುಬ್ಬಳ್ಳಿ–ಧಾರವಾಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾನುವಾರ ಹಲವೆಡೆ ಮಳೆಯಾಗಿದೆ. ಹೊಸಪೇಟೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಸಂಜೆ ಬಿರುಸಿನ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕರಾ ವಳಿಯ ಭಟ್ಕಳ, ಹೊನ್ನಾವರ, ಕುಮಟಾ ತಾಲ್ಲೂಕುಗಳಲ್ಲಿ ದಿನವಿಡೀ ಮಳೆಯಾಗಿದೆ. ಹುಬ್ಬಳ್ಳಿಯ ನವನಗರ, ಭೈರಿದೇವರಕೊಪ್ಪದಲ್ಲಿ ಸಾಯಂಕಾಲ ಕೆಲಸ ಸಮಯ ರಭಸದ ಮಳೆಯಾಗಿದೆ.

ಸಾಧಾರಣ ಮಳೆ: ದಾವಣಗೆರೆ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗಿದೆ. ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು, ಚಿತ್ರದುರ್ಗದ ಹೊಳಲ್ಕೆರೆ, ಶಿವಮೊಗ್ಗ ಜಿಲ್ಲೆಯ ಕೆಲವಡೆ ಸಾಧಾರಣ ಮಳೆಯಾಗಿದೆ.

ಮಳೆ-ಎಲ್ಲಿ, ಎಷ್ಟು?: ಉಡುಪಿ ಜಿಲ್ಲೆಯ ಪಣಂಬೂರು ಹಾಗೂ ಕೊಲ್ಲೂರಿನಲ್ಲಿ ಗರಿಷ್ಠ 8 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಮೂಡುಬಿದಿರೆ, ಕುಂದಾಪುರ, ಆಗುಂಬೆ 7, ಕಾರ್ಕಳ 6, ಉಡುಪಿ, ಉಪ್ಪಿನಂಗಡಿ 5, ಧರ್ಮಸ್ಥಳ, ಪುತ್ತೂರು, ಕಾರವಾರ, ಅಂಕೋಲಾ, ಶಿರಾ, ಮೂಡಿಗೆರೆ, ಭಾಗಮಂಡಲ, ಚಿಂತಾಮಣಿ, ತೀರ್ಥಹಳ್ಳಿ 3 ಹಾಗೂ ಹೊಸನಗರದಲ್ಲಿ 2ಸೆಂ.ಮೀ. ಮಳೆಯಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 3ರಿಂದ 7ರವರೆಗೆ ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಐದೂ ದಿನ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸೋಮವಾರ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ‘ಯೆಲ್ಲೊ ಅಲರ್ಟ್’ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳವರೆಗೆ ಭಾರಿ ಮಳೆಯಾಗಬಹುದು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT