ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ತೀರ್ಮಾನ ಜಿಲ್ಲಾಡಳಿತಕ್ಕೆ: ಮುಖ್ಯಮಂತ್ರಿ ಯಡಿಯೂರಪ್ಪ

Last Updated 13 ಜುಲೈ 2020, 11:06 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಪ್ರಕರಣಗಳು ಹೆಚ್ಚು ಇರುವ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಬಗ್ಗೆ ಆಯಾ ಜಿಲ್ಲಾಡಳಿತಗಳು ಉಸ್ತವಾರಿ ಸಚಿವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ಇದರ ಬೆನ್ನಲ್ಲೇ ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮಾಡುವುದಾಗಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಜಗದೀಶ ಶೆಟ್ಟರ್‌ ಪ್ರಕಟಿಸಿದರು. ಶಿವಮೊಗದಲ್ಲಿ ಪ್ರತಿ ದಿನ ಅರ್ಧ ದಿನಗಳ ಕಾಲ ಲಾಕ್‌ಡೌನ್‌ ಮಾಡಲು ತೀರ್ಮಾನಿಸಲಾಗಿದೆ.

ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಜತೆ ಮುಖ್ಯಮಂತ್ರಿ ವಿಡಿಯೋ ಸಂವಾದ ನಡೆಸಿದರು. ‘ಕೋವಿಡ್‌ ನಿಯಂತ್ರಣಕ್ಕೆ ಲಾಕ್‌ಡೌನ್‌ ಒಂದೇ ಪರಿಹಾರವಾಗುವುದಿಲ್ಲ. ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡಬೇಕು. ನೀವು ಏನು ಮಾಡುತ್ತೀರೋ ಗೊತ್ತಿಲ್ಲ ಇನ್ನು ಈ ತಿಂಗಳ ಕೊನೆಯೊಳಗೆ ಕೋವಿಡ್‌ ನಿಯಂತ್ರಣಕ್ಕೆಬರಬೇಕು’ ಎಂದು ಯಡಿಯೂರಪ್ಪ ಕಟ್ಟುನಿಟ್ಟಾದ ಸೂಚನೆ ನೀಡಿದರು.

ಎಲ್ಲಾ ಜಿಲ್ಲೆಗಳಲ್ಲೂ ರ‍್ಯಾಪಿಡ್‌ ಆಂಟಿಜನ್ ಟೆಸ್ಟ್‌ ನಡೆಸಲು ಆದ್ಯತೆ ನೀಡಬೇಕು. ಇದಕ್ಕಾಗಿ 1 ಲಕ್ಷ ಟಸ್ಟ್‌ ಕಿಟ್‌ಗಳನ್ನು ಖರೀದಿಸಲಾಗಿದ್ದು, ಅವುಗಳನ್ನು ಜಿಲ್ಲೆಗಳಿಗೆ ವಿತರಿಸಲಾಗಿದೆ. ತುರ್ತುಪ್ರಕರಣಗಳಲ್ಲಿ ವಿವೇಚನೆಯಿಂದ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.

ಬೆಂಗಳೂರು ನಗರ, ದಕ್ಷಿಣ ಕನ್ನಡ, ಧಾರವಾಡ, ಬಳ್ಳಾರಿ, ಉಡುಪಿ , ಕಲಬುರ್ಗಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬೀದರ್, ಧಾರವಾಡ, ಗದಗ, ಮೈಸೂರು ಜಿಲ್ಲೆಗಳಲ್ಲಿ ಸಾವಿನ ಪ್ರಮಾಣ ಹೆಚ್ಚುತ್ತಿದೆ. ಬೀದರ್ ಜಿಲ್ಲೆ ಸಾವಿನ ಪ್ರಮಾಣ ದೇಶದ 5 ಜಿಲ್ಲೆಗಳಲ್ಲಿ ಒಂದಾಗಿದ್ದು, ಮರಣ ಪ್ರಮಾಣ ನಿಯಂತ್ರಿಸುವಂತೆ ಸೂಚಿಸಿದರು. ಈವರೆಗೆ ಸಂಭವಿಸಿದ ಮರಣಗಳ ಕುರಿತು ತಜ್ಞರ ವಿಶ್ಲೇಷಣಾ ವರದಿಯನ್ನು ಕೂಡಲೇ ಕಳುಹಿಸಬೇಕು ಎಂದು ಯಡಿಯೂರಪ್ಪ ಸೂಚಿಸಿದರು.

ಕಂಟೈನ್ಮೆಂಟ್ ವಲಯಗಳಲ್ಲಿ ಕಟ್ಟುನಿಟ್ಟಾಗಿ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಕ್ಷೇತ್ರ ಮಟ್ಟದ ಆರೋಗ್ಯ ಸಿಬ್ಬಂದಿ ಕೊರತೆ ಇರುವಲ್ಲಿ ಗುತ್ತಿಗೆ ಆಧಾರದಲ್ಲಿ 6 ತಿಂಗಳ ಅವಧಿಗೆ ನೇಮಕ ಮಾಡುವಂತೆ ಅವರು ತಿಳಸಿದರು.

ಹೊರಗಿನಿಂದ ವಲಸೆ ಬಂದವರನ್ನು ಕ್ವಾರಂಟೈನ್ ಒಳಪಡಿಸುವುದರ ಜತಗೆ ಹೆಚ್ಚಿನ ನಿಗಾ ಇಡಬೇಕು. ಅಲ್ಲದೆ, ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗೆ ಯಾವುದೇ ಅಡ್ಡಿಯಾಗದಂತೆ ಎಚ್ಚರ ವಹಿಸಬೇಕು ಎಂದರು.

ಯಾವುದೇ ಕಾರಣಕ್ಕೂ ಸಾರ್ವಜನಿಕ ಉತ್ಸವಗಳ ಆಚರಣೆ ಮಾಡುವಂತಿಲ್ಲ. ಬೆಂಗಳೂರಿನಲ್ಲಿ ಕೋವಿಡ್ ಮತ್ತು ನಾನ್ ಕೋವಿಡ್ ಚಿಕಿತ್ಸೆ ನೀಡಲು ಸಹಕರಿಸದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುಬೇಕು ಎಂದು ಹೇಳಿದರು.

ಬೂತ್ ಮಟ್ಟದಲ್ಲಿ ಕ್ವಾರಂಟೈನ್, ಸಂಪರ್ಕಿತರ ಪತ್ತೆ ಹಚ್ಚುವುದು, ಮನೆ ಮನೆ ಸಮೀಕ್ಷೆ ನಡೆಸುವ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಲು ಬೂತ್ ಮಟ್ಟದ ಸಮಿತಿಗಳನ್ನು ರಚಿಸಿ, ಜನಪ್ರತಿನಿಧಿಗಳು ಹಾಗೂ ಸ್ವಯಂ ಸೇವಕರ ಸಹಕಾರವನ್ನು ಪಡೆಯಬೇಕು ಎಂದು ಯಡಿಯೂರಪ್ಪ ಸಲಹೆ ನೀಡಿದರು.

ಧಾರ್ಮಿಕ ಸ್ಥಳಗಳಲ್ಲಿ, ಮಾರುಕಟ್ಟೆ ಮೊದಲಾದ ಸ್ಥಳಗಳಲ್ಲಿ ಜನ ಗುಂಪುಗೂಡದಂತೆ ಎಚ್ಚರ ವಹಿಸಬೇಕು. ಕೋವಿಡ್ ಆಸ್ಪತ್ರೆಯಲ್ಲಿ ಸ್ವಚ್ಛತೆ ನಿರ್ವಹಣೆಯಲ್ಲಿ ತೊಡಗಿರುವ ಡಿ ಗ್ರೂಪ್ ನೌಕರರ ಪ್ರೋತ್ಸಾಹಧನ ಹೆಚ್ಚಳಕ್ಕೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಡಿಜಿಟಲ್ ಎಕ್ಸ್ ರೇ ಯಂತ್ರಗಳ ಮೂಲಕ ಶ್ವಾಸಕೋಶದ ಸೋಂಕನ್ನು ತ್ವರಿತವಾಗಿ ಪತ್ತೆ ಹಚ್ಚಲು ಸಾಧ್ಯವಿದೆ. ಈ ಉಪಕರಣಗಳ ಬಳಕೆಗೆ ಆದ್ಯತೆ ನೀಡಬೇಕು ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT