ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೆನಾಡಿನಲ್ಲಿ ಉತ್ತಮ ಮಳೆ: ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆ

ಕರಾವಳಿ ಜಿಲ್ಲೆಗಳಲ್ಲೂ ಭಾರಿ ಮಳೆ
Last Updated 18 ಜುಲೈ 2020, 22:05 IST
ಅಕ್ಷರ ಗಾತ್ರ

ಬೆಂಗಳೂರು:ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಶನಿವಾರವೂ ಭಾರಿ ಮಳೆ ಮುಂದುವರಿದಿದ್ದು, ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಬಳಿ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳಲ್ಲಿ ನೀರಿನ ಪ್ರಮಾಣ ಏರಿಕೆ ಆಗಿದೆ. ಇದೇ ರೀತಿ ಮಳೆ ಸತತವಾಗಿ ಸುರಿದರೆ ನೆರೆ ಭೀತಿ ಉಂಟಾಗಲಿದೆ.

ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಕಾರ್ಕಳ, ಹೆಬ್ರಿ, ಕಾಪು, ಬ್ರಹ್ಮಾವರ ತಾಲ್ಲೂಕುಗಳಲ್ಲಿ ಬಿರುಸಿನ ಮಳೆಯಾಗಿದೆ. ಕುಂದಾಪುರದ ಗಂಗೊಳ್ಳಿ, ಕಾರ್ಕಳದ ಕುಕ್ಕುಂದೂರು, ಬ್ರಹ್ಮಾವರದ ಹೊಸೂರು, ಹಲುವಳ್ಳಿ, ಹಾವಂಜೆ, ಕಾಡೂರು, ಹೆರೂರು ಗ್ರಾಮಗಳಲ್ಲಿ ಮನೆಗಳು ಕುಸಿದಿವೆ. ಕೃಷಿ ಭೂಮಿ ಜಲಾವೃತಗೊಂಡು ಬೆಳೆ ನಾಶವಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಮೂಡಿಗೆರೆಯಲ್ಲಿ ಸಾಧಾರಣ ಮಳೆಯಾಗಿದೆ.

ಲಕ್ಷ್ಮಣತೀರ್ಥ ನದಿ ನೀರಿನಮಟ್ಟ ಏರಿಕೆ: ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ, ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಶ್ರೀಮಂಗಲ ಭಾಗದಲ್ಲಿ ಶುಕ್ರವಾರ ರಾತ್ರಿಯಿಡೀ ಧಾರಾಕಾರ ಮಳೆಯಾಗಿದೆ. ಲಕ್ಷ್ಮಣತೀರ್ಥ ನದಿಯಲ್ಲಿ ನೀರಿನಮಟ್ಟ ಏರಿಕೆಯಾಗಿದೆ.

ಕಕ್ಕಟ್ಟ್ ಹೊಳೆಯ ಬಿರುನಾಣಿ – ನೀಟ್‌ಕುಂದ್‌ ನಡುವಿನ ಸೇತುವೆ ಮೇಲೆಯೂ ನೀರು ಬಂದಿದ್ದರಿಂದ ಶನಿವಾರ ಮಧ್ಯಾಹ್ನದವರೆಗೂ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಮೈಸೂರಿನಲ್ಲಿ ಮಧ್ಯಾಹ್ನ ಉತ್ತಮ ಮಳೆಯಾಗಿದೆ. ಮುಂಗಾರು ಹಂಗಾಮಿನ ಬೆಳೆಗೆ, ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ಇದೇ 28ರಿಂದ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಶನಿವಾರ ತೀರ್ಮಾನಿಸಲಾಗಿದೆ.

ಭೂ ಕುಸಿತ: ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ತಾಳಬೆಟ್ಟ ಹಾಗೂ ಬೆಟ್ಟದ ನಡುವೆ ಕೆಲವು ಕಡೆ ಸಣ್ಣ ಪ್ರಮಾಣದ ಭೂ ಕುಸಿತ ಉಂಟಾಗಿದೆ.

‘ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಸುರೇಂದ್ರ ತಿಳಿಸಿದ್ದಾರೆ.

ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಜಿಲ್ಲೆಯಲ್ಲಿ ಮಳೆಯಾಗಿದೆ. ಕಾರವಾರದಲ್ಲಿ ಮಧ್ಯಾಹ್ನ 2.30ಕ್ಕೆ ಶುರುವಾದ ಮಳೆಯು ಎರಡೂವರೆ ತಾಸಿಗೂ ಅಧಿಕ ಕಾಲ ಜೋರಾಗಿ ಸುರಿಯಿತು. ಕುಮಟಾ, ಹೊನ್ನಾವರ, ಭಟ್ಕಳದಲ್ಲೂ ದಿನವಿಡೀ ಮಳೆಯಾಗಿದ್ದರೆ, ಸಿದ್ದಾಪುರ, ಯಲ್ಲಾಪುರದಲ್ಲಿ ಸಾಧಾರಣ ಮಳೆ ಬಂದಿದೆ. ಶಿರಸಿಯಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿದ್ದು, ಆಗಾಗ ರಭಸದ ಮಳೆಯಾಯಿತು.

ಕಾರವಾರ ತಾಲ್ಲೂಕಿನ ದೇವಳಮಕ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರ್ವೆ ಗ್ರಾಮದಲ್ಲಿ ನೂತನ ಸೇತುವೆಯ ಎರಡೂ ಬದಿಗಳಲ್ಲಿ ಹಾಕಲಾಗಿದ್ದ ಮಣ್ಣು ಕೊಚ್ಚಿ ಹೋಗಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ, ಭದ್ರಾವತಿಯಲ್ಲಿ ಜೋರು ಮಳೆಯಾಗಿದೆ. ತೀರ್ಥಹಳ್ಳಿ, ಸಾಗರದಲ್ಲಿ ಮಳೆ ಪ್ರಮಾಣ ತಗ್ಗಿದೆ. ದಾವಣಗೆರೆ, ಚನ್ನಗಿರಿ, ಮಲೇಬೆನ್ನೂರು, ತ್ಯಾವಣಗಿ, ಸಾಸ್ವೆಹಳ್ಳಿಯಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT