ಸೋಮವಾರ, ಆಗಸ್ಟ್ 2, 2021
28 °C

ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರಿಂದ 17ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ’ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ತಿಳಿಸಿದರು.

‘ತುಮಕೂರು, ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಜು.14ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ’ ಎಂದು ಅವರು ತಿಳಿಸಿದರು. 

‘ಕರಾವಳಿ ಭಾಗದ ಜಿಲ್ಲೆಗಳಲ್ಲಿ ಬುಧವಾರದಿಂದ ಮಳೆ ತೀವ್ರತೆ ಹೆಚ್ಚಲಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಉತ್ತರ ಕನ್ನಡ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಸೋಮವಾರ ತುಂತುರು ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ತುಂಗಭದ್ರಾ ಜಲಾಶಯದ ಒಳಹರಿವು ಸೋಮವಾರ ಮತ್ತಷ್ಟು ತಗ್ಗಿದೆ.

ಕೊಡಗು ಜಿಲ್ಲೆಯ ವಿವಿಧೆಡೆ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಮಳೆ-ಎಲ್ಲಿ, ಎಷ್ಟು?: ಉತ್ತರ ಕನ್ನಡ ಜಿಲ್ಲೆ ಕುಮಟಾದಲ್ಲಿ ಗರಿಷ್ಠ 8 ಸೆಂ.ಮೀ ಮಳೆಯಾಗಿದೆ. ಮಂಗಳೂರು, ಕುಂದಾಪುರದಲ್ಲಿ ತಲಾ 5, ಅಂಕೋಲಾ 4, ಕಾರವಾರ, ಭಟ್ಕಳದಲ್ಲಿ ತಲಾ 3, ಬೆಳ್ತಂಗಡಿ, ಕಾರ್ಕಳದಲ್ಲಿ ತಲಾ 2, ಸುಳ್ಯ, ಉಡುಪಿ, ಆಳಂದ, ಗದಗ, ಶಿರಾ, ಮಡಿಕೇರಿ ಹಾಗೂ ಭಾಗಮಂಡಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ರಾಜ್ಯದ ಹಲವೆಡೆ ಸಾಧಾರಣ ಮಳೆ
ರಾಜ್ಯದಲ್ಲಿ ಹಲವೆಡೆ ಸಾಧಾರಣ ಮಳೆ ಆಗಿದೆ. ಮಹಾರಾಷ್ಟ್ರದಲ್ಲಿಯೂ ಮಳೆ ತಗ್ಗಿದ್ದರಿಂದ ಕೃಷ್ಣಾ ನದಿಯ ಹರಿವು ಇಳಿಕೆಯಾಗಿದೆ. ಆಲಮಟ್ಟಿ ಜಲಾಶಯದ ಒಳಹರಿವು ಇಳಿಕೆಯಾಗಿದೆ.

ದೂಧ್‌ಗಂಗಾ ನದಿಯಿಂದ 6,512 ಕ್ಯುಸೆಕ್‌ ಹಾಗೂ ರಾಜಾಪುರ ಬ್ಯಾರೇಜ್‌ನಿಂದ 36,250 ಕ್ಯುಸೆಕ್‌ ಸೇರಿದಂತೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ 42,762 ಕ್ಯುಸೆಕ್‌ ಕೃಷ್ಣಾ ನದಿಗೆ ಸೇರಿಕೊಳ್ಳುತ್ತಿದೆ.

ಸಿಡಿಲು ಬಡಿದು ಯುವಕ ಸಾವು
ನಾಗಮಂಗಲ, (ಮಂಡ್ಯ):
ತಾಲ್ಲೂಕಿನ ತಿಗಳರಹಳ್ಳಿಯ ಪ್ರತಾಪ್‌ (24), ಸಿಡಿಲು ಬಡಿದು ಸೋಮವಾರ ಮೃತಪಟ್ಟಿದ್ದಾರೆ.

ಅವರ ತಂದೆ ಹಾಗೂ ಸೋದರ ಗಂಭೀರವಾಗಿ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರೂ ಸಮೀಪದ ಗುಡ್ಡದಲ್ಲಿ ಆಡು ಮೇಯಿಸಲು ತೆರಳಿದ್ದರು. ಮಳೆಯಿಂದ ರಕ್ಷಣೆ ಪಡೆಯಲು ಆಲದ ಮರವೊಂದರ ಕೆಳಗೆ ನಿಂತಾಗ ಸಿಡಿಲು ಬಡಿದಿದೆ. ಎರಡು ಮೇಕೆಗಳೂ ಅಸುನೀಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು