ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿಇಟಿ ನಡೆಸಲು ಯಾವುದೇ ಸಮಸ್ಯೆ ಇಲ್ಲ’: ಡಾ. ಸಿ.ಎನ್. ಅಶ್ವತ್ಥನಾರಾಯಣ

ಸಾಮಾನ್ಯ ಪ್ರವೇಶ ಪರೀಕ್ಷಾ ಕೇಂದ್ರ ಪರಿಶೀಲಿಸಿದ ಉಪ ಮುಖ್ಯಮಂತ್ರಿ​
Last Updated 29 ಜುಲೈ 2020, 9:53 IST
ಅಕ್ಷರ ಗಾತ್ರ

ಬೆಂಗಳೂರು: ‘ಕೋವಿಡ್ ಹಿನ್ನೆಲೆಯಲ್ಲಿಯೂ ನಿರಾತಂಕವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ’ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಗುರುವಾರ (ಜುಲೈ 30) ಮತ್ತು ಶುಕ್ರವಾರ (ಜುಲೈ 31) ನಡೆಯಲಿರುವ ಸಿಇಟಿ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಲಕ್ಷ್ಮೀ ಅಮ್ಮಣ್ಣಿ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

‘ಕೋವಿಡ್ ಸವಾಲಿನ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಾವು ಯಶಸ್ವಿಯಾಗಿ ನಡೆಸಿದ್ದೇವೆ. ದ್ವಿತೀಯ ಪಿಯುಸಿಯ ಒಂದು ವಿಷಯದ ಪರೀಕ್ಷೆಯನ್ನು ಕೂಡ ನಿರಾತಂಕವಾಗಿ ನಡೆಸಿದ್ದೇವೆ. ಸಿಇಟಿಯನ್ನೂ ಯಾವುದೇ ತೊಂದರೆ ಇಲ್ಲದೆ ನಡೆಸಲು ಸರ್ಕಾರಕ್ಕೆ ಸಾಧ್ಯವಿದೆ’ ಎಂದು ವಿವರಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಗಮನಿಸಿದ ಉಪ ಮುಖ್ಯಮಂತ್ರಿ, ವಿದ್ಯಾರ್ಥಿಗಳು ಕುಳಿತುಕೊಳ್ಳುವ ಅಂತರ, ಕೊಠಡಿಗಳ ಸ್ಯಾನಿಟೈಸೇಷನ್, ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ರೀನಿಂಗ್, ಭದ್ರತೆ, ಸಾರಿಗೆ, ಮೂಲಸೌಕರ್ಯ ಮತ್ತಿತರ ಅಂಶಗಳ ಬಗ್ಗೆ ಪರಿಶೀಲಿಸಿದರು.

‘ಏಪ್ರಿಲ್ 23-24ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಲಾಕ್‌ಡೌನ್ ಘೋಷಿಸಿದ್ದ ಕಾರಣಕ್ಕೆ ಮುಂದೂಡಲಾಗಿತ್ತು. ಜುಲೈ 30-31ರಂದು ಪರೀಕ್ಷೆ ನಡೆಸಲು ಮೇ 12ರಂದೇ ನಿರ್ಧರಿಸಲಾಗಿತ್ತು. ಆ ಕ್ಷಣದಿಂದಲೇ ಸರ್ಕಾರವೂ ಕೋವಿಡ್ ಮುನ್ನೆಚ್ಚರಿಕೆ ವಹಿಸುವುದರ ಜತೆಗೆ, ವಿದ್ಯಾರ್ಥಿಗಳಿಗೆ ಸಾರಿಗೆ, ವೈದ್ಯಕೀಯ, ರಕ್ಷಣೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಯಿತು’ ಎಂದರು.

‘ಕೋವಿಡ್ ದೃಢಪಟ್ಟ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಕಂಟೈನ್‌ಮೆಂಟ್‌ ವಲಯಗಳಲ್ಲಿರುವ ವಿದ್ಯಾರ್ಥಿಗಳು ತಮ್ಮ ಪೋಷಕರೊಬ್ಬರ ಜತೆ ಬಂದು ಪರೀಕ್ಷೆ ಬರೆಯಬಹುದಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸೇಷನ್, ದೈಹಿಕ ಅಂತರ, ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ’ ಎಂದೂ ಅವರು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT