ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಹೆಚ್ಚಳ: ಸಿಎಂ ಜತೆಗೆ ಚರ್ಚಿಸಿ ನಿರ್ಧಾರ

ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು *ಮುಷ್ಕರ ಮುಂದುವರೆಸಲು ನಿರ್ಧಾರ
Last Updated 29 ಜುಲೈ 2020, 20:27 IST
ಅಕ್ಷರ ಗಾತ್ರ

ಬೆಂಗಳೂರು: ‘ಆಶಾ ಕಾರ್ಯಕರ್ತೆಯರ ಮಾಸಿಕ ₹ 6 ಸಾವಿರ ವೇತನವನ್ನು ₹ 12 ಸಾವಿರಕ್ಕೆ ಏರಿಕೆ ಮಾಡುವ ಸಂಬಂಧ ಮುಖ್ಯಮಂತ್ರಿಯ ಜತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದರು.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆಒತ್ತಾಯಿಸಿ ರಾಜ್ಯದಾದ್ಯಂತ 42 ಸಾವಿರ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಮುಷ್ಕರ ಬುಧವಾರ 20ನೇ ದಿನಕ್ಕೆ ತಲುಪಿದೆ. ನಗರದ ಮೌರ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದ ಅವರು, ‘ಮುಖಗವಸು ಸೇರಿದಂತೆ ವೈಯಕ್ತಿಕ ಸುರಕ್ಷಾ ಸಾಧನಗಳನ್ನು ಒದಗಿಸಬೇಕು. ಕೋವಿಡ್‌ಗೆ ತುತ್ತಾದ ಆಶಾ ಕಾರ್ಯಕರ್ತೆಯರಿಗೆ ಪರಿಹಾರ ಹಾಗೂ ಸಂಪೂರ್ಣ ಚಿಕಿತ್ಸೆ ಒದಗಿಸಬೇಕು. ಇಷ್ಟು ದಿನ ನೀಡಿದ ಚಪ್ಪಾಳೆ, ಹೂಮಳೆಯ ಗೌರವ ಸಾಕು. ಸಮಾಜದಲ್ಲಿ ಗೌರವಯುತವಾಗಿ ಬದುಕು ನಡೆಸಲು ಸೂಕ್ತ ಗೌರವಧನ ನೀಡಿ’ ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಸಂಜೆ ಭೇಟಿ ನೀಡಿದ ಶ್ರೀರಾಮುಲು, ಮುಷ್ಕರ ಕೈಬಿಡುವಂತೆ ಮನವಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೂಡ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಅವರ ಜತೆಗೆ ಈ ಬಗ್ಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಇದಕ್ಕೂ ಮೊದಲು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯ ಇಲಾಖೆಯ ಆಯುಕ್ತ ಪಂಕಜ್‌ ಕುಮಾರ್ ಪಾಂಡೆ, ‘ವೈಯಕ್ತಿಕ ಸುರಕ್ಷತಾ ಸಾಧನಗಳು (ಪಿಪಿಇ ಕಿಟ್), ಸ್ಯಾನಿಟೈಸರ್, ಮುಖಗವಸು ವಿತರಿಸುವ ಜತೆಗೆ ಅಗತ್ಯ ಸುರಕ್ಷತೆ ಒದಗಿಸಲಾಗುವುದು’ ಎಂದು ಭರವಸೆ ನೀಡಿದರು.

ಮುಷ್ಕರ ಮುಂದುವರಿಕೆ: ‘ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರದಿಂದ ಹಿಂದೆ ಸರಿಯಲಾಯಿತು. ಸಚಿವರು ಕೂಡ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿ, ನಮ್ಮ ಮನವಿ ಸ್ವೀಕರಿಸಿದರು.ಆದರೆ, ಎಷ್ಟು ದಿನದಲ್ಲಿ ಬೇಡಿಕೆ ಈಡೇರಿಸುತ್ತೇವೆ ಎಂದು ನಿಖರವಾಗಿ ತಿಳಿಸಿಲ್ಲ. ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡುವವರೆಗೂ ನಾವು ಮುಷ್ಕರ ಮುಂದುವರಿಸುತ್ತೇವೆ’ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT