ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಬಂಗಾಳ: ಶೇಕಡ 50ಕ್ಕೂ ಹೆಚ್ಚು ಮೀಸಲಾತಿ

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇಕಡ 10 ಮೀಸಲಾತಿ: ಸಚಿವ ಸಂಪುಟ ಒಪ್ಪಿಗೆ
Last Updated 3 ಜುಲೈ 2019, 19:45 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಪಶ್ಚಿಮ ಬಂಗಾಳ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಶೇಕಡ 10ರಷ್ಟು ಮೀಸಲಾತಿ ಕಲ್ಪಿಸಿದೆ.

ಇದರಿಂದ, ರಾಜ್ಯದಲ್ಲಿ ಮೀಸಲಾತಿ ಪ್ರಮಾಣ ಶೇಕಡ 50ರಷ್ಟು ದಾಟಿದೆ. ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣದ ಬಳಿಕ ಶೇಕಡ 50ಕ್ಕೂ ಹೆಚ್ಚು ಮೀಸಲಾತಿ ಕಲ್ಪಿಸಿದ ನಾಲ್ಕನೇ ರಾಜ್ಯ ಇದಾಗಿದೆ. ಸುಪ್ರೀಂ ಕೋರ್ಟ್‌ ಮೀಸಲಾತಿ ಮಿತಿಯನ್ನು ಶೇಕಡ 50ಕ್ಕೆ ನಿಗದಿಪಡಿಸಿದೆ.

ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಇದುವರೆಗೆ ಶೇಕಡ 45ರಷ್ಟು ಮೀಸಲಾತಿ ಇತ್ತು. ಪರಿಶಿಷ್ಟ ಜಾತಿಗೆ ಶೇಕಡ 22, ಪರಿಶಿಷ್ಟ ಪಂಗಡಕ್ಕೆ ಶೇಕಡ 6 ಮತ್ತು ಹಿಂದುಳಿದ ವರ್ಗಕ್ಕೆ ಶೇಕಡ 17ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು.

ಮಹಾರಾಷ್ಟ್ರದಲ್ಲಿ ಶೇಕಡ 68ರಷ್ಟು ಮೀಸಲಾತಿ ಇತ್ತು. ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡ 10ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದ ಬಳಿಕ ಶೇಕಡ 78ಕ್ಕೆ ಏರಿದೆ. ಈ ಮೂಲಕ ಶೇಕಡವಾರು ಅತಿ ಹೆಚ್ಚು ಮೀಸಲಾತಿ ಕಲ್ಪಿಸಿದ ರಾಜ್ಯವಾಗಿದೆ.

ತಮಿಳುನಾಡಿನಲ್ಲಿ ಈಗಿರುವ ಶೇಕಡ 69ರಷ್ಟು ಮೀಸಲಾತಿ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮಂಗಳವಾರ ತಿಳಿಸಿದ್ದಾರೆ. ರಾಜಕೀಯ ಪಕ್ಷಗಳ ನಡುವೆ ಒಮ್ಮತ ಮೂಡಿದ ಬಳಿಕ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡ 10ರಷ್ಟು ಮೀಸಲಾತಿ ಕಲ್ಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ತೆಲಂಗಾಣದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಮುಸ್ಲಿಮರಿಗೆ ಶೇಕಡ 12ರ ಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಸಹ ಶೇಕಡ 4ರಿಂದ ಶೇಕಡ 10ಕ್ಕೆ ಹೆಚ್ಚಿಸಲಾಗಿದೆ. ಇದರಿಂದ, ಮೀಸಲಾತಿ ಪ್ರಮಾಣ ಶೇಕಡ 62ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT