ಮಂಗಳವಾರ, ಡಿಸೆಂಬರ್ 10, 2019
26 °C

ಬಂಗಾಳದಲ್ಲಿ ರಥ ಯಾತ್ರೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಉಗ್ರಗಾಮಿ ಆಡಳಿತವಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಮಮತಾ ವಿರುದ್ಧ ಶುಕ್ರವಾರ ಹರಿಹಾಯ್ದಿದ್ದಾರೆ.  

ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟು ರಾಜ್ಯದೆಲ್ಲಡೆ ರಥ ಯಾತ್ರೆ ನಡೆಸಲು ಬಿಜೆಪಿ ಉದ್ದೇಶಿಸಿದೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿದೆ.  ಬಂಗಾಳದಲ್ಲಿ ಬಿಜೆಪಿ ಬೆಳೆಯುತ್ತಿರುವುದನ್ನು ಕಂಡು ಮಮತಾ ಬ್ಯಾನರ್ಜಿ ಭಯಗೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.  

ನಾವು ಪಶ್ಚಿಮ ಬಂಗಾಳದಲ್ಲಿ ರಥ ಯಾತ್ರೆಯನ್ನು ನಡೆಸುತ್ತೇವೆ, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಮಿತ್ ಶಾ ಗುಡುಗಿದ್ದಾರೆ. 

ಇದನ್ನೂ ಓದಿ: ಶಾ ರಥ ಯಾತ್ರೆಗೆ ಪಶ್ಚಿಮ ಬಂಗಾಳ ತಡೆ: ಜನವರಿ 9ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್‌

ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಅನುಮತಿ ನಿರಾಕರಿಸಲಾಗಿದೆ ಎಂದು ಅಡ್ವೊಕೇಟ್‌ ಜನರಲ್‌ ಕಿಶೋರ್‌ ದತ್ತಾ ಕಲ್ಕತ್ತಾ ಹೈಕೋರ್ಟ್‌ಗೆ ಗುರುವಾರ ತಿಳಿಸಿದ್ದರು. ಇದಕ್ಕೆ ಕಲ್ಕತ್ತಾ ಹೈಕೋರ್ಟ್‌ ಸಮ್ಮತಿಸಿ  ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿತ್ತು. 

ಕಲ್ಕತ್ತಾ ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿರುವ ಆದೇಶವನ್ನು ಪುನರ್‌ ಪರಿಶೀಲಿಸುವಂತೆ ಇಲ್ಲಿನ ವಿಭಾಗಿಯ ಪೀಠಕ್ಕೆ ಶುಕ್ರವಾರ ಬಿಜೆಪಿ ಮನವಿ ಮಾಡಿದೆ. ಈ ಮನವಿಯನ್ನು ವಿಭಾಗಿಯ ನ್ಯಾಯಪೀಠ ಪುರಸ್ಕರಿಸಿದೆ. 

ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲೂ ರಥಯಾತ್ರೆ ನಡೆಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 22 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದೆ. ಬಂಗಾಳದಲ್ಲಿ ಪ್ರಸ್ತುತ 2 ಲೋಕಸಭಾ ಸ್ಥಾನಗಳನ್ನು ಮಾತ್ರ ಬಿಜೆಪಿ ಹೊಂದಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು