10 ಸಾವಿರ ಉದ್ಯೋಗ ಸೃಷ್ಟಿ

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ (ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ) ಅನುಷ್ಠಾನದಿಂದ ಕನಿಷ್ಠ 10 ಸಾವಿರ ಹೊಸ ಉದ್ಯೋಗಗಳ ಸೃಷ್ಟಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ ₹ 5 ಲಕ್ಷ ವರೆಗೆ ಆರೋಗ್ಯ ವಿಮಾ ಸೌಲಭ್ಯ ಸಿಗಲಿದ್ದು, ದೇಶದ 10 ಕೋಟಿ ಬಡ ಕುಟುಂಬಗಳಿಗೆ ಈ ಯೋಜನೆಯ ಲಾಭ ಸಿಗಲಿದೆ ಆರೋಗ್ಯ ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
‘ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆಯಡಿ ಒಂದು ಲಕ್ಷ ‘ಆಯುಷ್ಮಾನ್ ಮಿತ್ರ’ರನ್ನು ನಿಯೋಜನೆ ಮಾಡಲಾಗುತ್ತದೆ. ರೋಗಿಗಳಿಗೆ ಚಿಕಿತ್ಸೆ ಕೊಡಿಸುವಲ್ಲಿ ಇವರು ನೆರವಾಗುವರು. ಒಂದು ಲಕ್ಷ ಆಯುಷ್ಮಾನ್ ಮಿತ್ರರ ನೇಮಕಾತಿಗಾಗಿ ಆರೋಗ್ಯ ಸಚಿವಾಲಯವು ಕೌಶಲ ಅಭಿವೃದ್ಧಿ ಸಚಿವಾಲಯದೊಂದಿಗೆ ಒಪ್ಪಂದ ಮಾಡಿಕೊಂಡಿದೆ’ ಎಂದು ಯೋಜನೆಯ ಅಧಿಕಾರಿಗಳು ತಿಳಿಸಿದ್ದಾರೆ.
‘ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸುವ ಕಾರ್ಯಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಚಾಲನೆ ನೀಡಿದೆ. ಈಗಾಗಲೇ 20 ಸಾವಿರ ಆಸ್ಪತ್ರೆಗಳನ್ನು ಯೋಜನೆಯಡಿ ಆಯ್ಕೆ ಮಾಡಲಾಗಿದೆ’ ಎಂದೂ ಅಧಿಕಾರಿಗಳು ಹೇಳಿದ್ದಾರೆ.
‘ಸಾಮಾಜಿಕ–ಆರ್ಥಿಕ ಗಣತಿ ಆಧಾರದ ಮೇಲೆ ಫಲಾನುಭವಿಗಳನ್ನು ಗುರುತಿಸುವ ಕಾರ್ಯಕ್ಕೆ ಸರ್ಕಾರ ಈಗಾಗಲೇ ಚಾಲನೆ ನೀಡಿದೆ. ಗ್ರಾಮೀಣ ಭಾಗದಲ್ಲಿ ಶೇ 80ರಷ್ಟು ಹಾಗೂ ನಗರ ಪ್ರದೇಶಗಳಲ್ಲಿ ಶೇ 60ರಷ್ಟು ಫಲಾನುಭವಿಗಳನ್ನು ಗುರುತಿಸಲಾಗಿದೆ. ಅಂತಿಮವಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಅವರ ಸಮಗ್ರ ವಿವರಗಳನ್ನು ಒಳಗೊಂಡ, ಕ್ಯುಆರ್ ಕೋಡ್ ಹೊಂದಿರುವ ಗುರುತಿನ ಪತ್ರಗಳನ್ನು ನೀಡಲಾಗುವುದು’ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.