ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಪರೀಕ್ಷೆ: ಹಣಕಾಸು ಇಲಾಖೆ ಟ್ವೀಟ್‌ನಿಂದ ಗೊಂದಲ

Last Updated 14 ಸೆಪ್ಟೆಂಬರ್ 2019, 6:23 IST
ಅಕ್ಷರ ಗಾತ್ರ

ನವದೆಹಲಿ:ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಗ್ರಾಮೀಣ ಬ್ಯಾಂಕ್‌ ಪರೀಕ್ಷೆ ಬರೆಯಲು ಅನುಮತಿ ನೀಡಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವುದಾಗಿ ಹಣಕಾಸು ಸಚಿವಾಲಯ ಶುಕ್ರವಾರ ರಾತ್ರಿ ಟ್ವೀಟ್ ಮಾಡಿದೆ. ಆದರೆ, ರಾಷ್ಟ್ರೀಕೃತ ಬ್ಯಾಂಕ್‌ಗಳ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಬಗ್ಗೆ ಟ್ವೀಟ್‌ನಲ್ಲಿ ಉಲ್ಲೇಖವಿಲ್ಲ.

‘ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ‘ಕಚೇರಿ ದರ್ಜೆ 1’ ಮತ್ತು ‘ಕಚೇರಿ ಸಹಾಯಕ’ ಹುದ್ದೆಗಳ ಆನ್‌ಲೈನ್ ಮುಖ್ಯ ಪರೀಕ್ಷೆಯನ್ನು ಇಂಗ್ಲಿಷ್, ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಬಹುದು. ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇದೇ 16ರಂದು ಸಿಬ್ಬಂದಿ ಆಯ್ಕೆ ಸಂಸ್ಥೆಯ (ಐಬಿಪಿಎಸ್‌) ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು’ ಎಂದು ಹಣಕಾಸು ಸಚಿವಾಲಯದ ಟ್ವೀಟ್ ಉಲ್ಲೇಖಿಸಿದೆ.

ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಲ್ಲಿನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ಬರೆಯಲು ಅವಕಾಶ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಜುಲೈ 4ರಂದೇ ತಿಳಿಸಿತ್ತು.

‘ಕನ್ನಡ ಒಳಗೊಂಡಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ ನಡೆಸಲಾಗುವುದು.ಈ ವ್ಯವಸ್ಥೆಯು ಇದೇ ವರ್ಷದಿಂದ ಜಾರಿಗೆ ಬರಲಿದೆ’ ಎಂದುಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಹೇಳಿದ್ದರು.

ರಾಷ್ಟ್ರೀಕೃತ ಬ್ಯಾಂಕ್‌ಗಳ ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ ಗುರುವಾರ ಅರ್ಜಿ ಆಹ್ವಾನಿಸಲಾಗಿತ್ತು. ರಾಜ್ಯದಲ್ಲಿ ಖಾಲಿ ಇರುವ 953 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಅಭ್ಯರ್ಥಿಗಳು ಇಂಗ್ಲಿಷ್‌ ಅಥವಾ ಹಿಂದಿ ಭಾಷೆಗಳಲ್ಲಿ ಮಾತ್ರ ಈ ಪರೀಕ್ಷೆಗಳನ್ನು ಬರೆಯಬಹುದಾಗಿದೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ತಿಳಿದಿರಬೇಕು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆದರೆ, ಅದನ್ನು ಖಚಿತಪಡಿಸುವುದಕ್ಕೆ ಯಾವುದೇ ಮಾನದಂಡಗಳನ್ನು ಸೂಚಿಸಿಲ್ಲ.

ಇದರ ಬೆನ್ನಲ್ಲೇ, ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೂರಾಷ್ಟ್ರೀಕೃತ ಬ್ಯಾಂಕ್‌ಗಳ ಕ್ಲರ್ಕ್‌ ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT