ಭಾನುವಾರ, ಡಿಸೆಂಬರ್ 6, 2020
19 °C
ಜಾರಿ ನಿರ್ದೇಶನಾಲಯದ ಮನವಿಗೆ ತಡೆ ನೀಡಲು ಕೋರಿ ಅರ್ಜಿ

‘ದೇಶಭ್ರಷ್ಟ ಆರ್ಥಿಕ ಅಪರಾಧಿ’: ಮಲ್ಯ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ‘ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಲು ಹಾಗೂ ನನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿರುವ ಮನವಿಗೆ ತಡೆ ನೀಡಬೇಕು’ ಎಂಬ ಉದ್ಯಮಿ ವಿಜಯ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.

‘ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ’ಯಡಿ ಮಲ್ಯ ಅವರನ್ನು ದೇಶಭ್ರಷ್ಟ ಎಂದು ಘೋಷಿಸಲು ಅನುಮತಿ ನೀಡುವಂತೆ ಕೋರಿದ್ದ ಇ.ಡಿ, ಈ ಸಂಬಂಧ ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್‌ಎ) ಕಾಯ್ದೆಯ ವಿಶೇಷ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: ಸಾಲ ಸಂಕಷ್ಟ: ಸ್ವಿಸ್ ಬ್ಯಾಂಕ್ ಪಾಲಾಗಲಿದೆಯೇ ವಿಜಯ್ ಮಲ್ಯ ಲಂಡನ್‌ ನಿವಾಸ?

ಬಾಕಿ ಸಾಲ ವಸೂಲಿಗಾಗಿ ಮಲ್ಯ ವಿರುದ್ಧ ಬ್ಯಾಂಕುಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು  ಪಿಎಂಎಲ್‌ಎಯ ಮೇಲ್ಮನವಿ ನ್ಯಾಯಮಂಡಳಿಯು ನ.26ರಂದು ನಡೆಸಲಿದೆ. ಅಲ್ಲಿಯ ವರೆಗೆ ಇ.ಡಿ ಸಲ್ಲಿಸಿರುವ ಮನವಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ನಂತರ ಮಲ್ಯ, ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಆರೋಪಿಯೊಬ್ಬನನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಸಾರಿದರೆ, ತನಿಖೆ ನಡೆಸುವ ಸಂಸ್ಥೆಯು ಆರೋಪಿಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಈ ಕಾಯ್ದೆ ಅವಕಾಶ ಕಲ್ಪಿಸುತ್ತದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು