ಸೋಮವಾರ, ಮೇ 25, 2020
27 °C
ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಆರೋಪಗಳ ತನಿಖೆ ವರದಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುವ ಸಮಿತಿ

ಪ್ರಧಾನಿ ನೇತೃತ್ವದ ಉನ್ನತ ಸಮಿತಿಯಿಂದ ಹೊರಗುಳಿದ ಮುಖ್ಯ ನ್ಯಾಯಮೂರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ವಿರುದ್ಧದ ಆರೋಪಗಳ ತನಿಖೆಯ ನಂತರದ ತೀರ್ಮಾನವನ್ನು ತೆಗೆದುಕೊಳ್ಳುವ ಪ್ರಧಾನಿ ನೇತೃತ್ವದ ಉನ್ನತ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಹೊರಗುಳಿದಿದ್ದಾರೆ. 

ವರ್ಮಾ ವಿರುದ್ಧದ ಆರೋಪಗಳ ತನಿಖೆ ವರದಿ ಪರಿಶೀಲನೆ ಸಂಬಂಧಿಸಿದಂತೆ ಒಂದು ವಾರದ ಒಳಗೆ ಉನ್ನತ ಸಮಿತಿಯು ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಆದೇಶಿಸಿದ್ದು, ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಉನ್ನತ ಸಮಿತಿಗೆ ನ್ಯಾಯಮೂರ್ತಿ ಎ.ಕೆ.ಸಿಕ್ರಿ ಅವರನ್ನು ನೇಮಿಸಿದ್ದಾರೆ.

ಉನ್ನತ ಮಟ್ಟದ ಸಮಿತಿಯು  ಪ್ರಧಾನಿ ನರೇಂದ್ರ ಮೋದಿ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಥವಾ ಅವರ ನಿರ್ದೇಶಿಸಿದ ನ್ಯಾಯಮೂರ್ತಿ ಒಳಗೊಂಡಿರಲಿದೆ. ವರ್ಮಾ ಅವರ ಅಧಿಕಾರಾವಧಿ ಜನವರಿ 31ಕ್ಕೆ ಕೊನೆಯಾಗಲಿದ್ದು, ಇನ್ನು ಒಂದು ವಾರದೊಳಗೆ ಸಮಿತಿಯು ನಿರ್ಧಾರ ತೆಗೆದುಕೊಳ್ಳಬೇಕಿದೆ. 

ವರ್ಮಾ ಅವರನ್ನು ದೀರ್ಘ ರಜೆಯ ಮೇಲೆ ಕಳುಹಿಸಿ ಕೇಂದ್ರ ಸರ್ಕಾರ ಮತ್ತು ಕೇಂದ್ರ ಜಾಗೃತ ಆಯೋಗ (ಸಿವಿಸಿ) ಅಕ್ಟೋಬರ್‌ನಲ್ಲಿ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಪಡಿಸಿತ್ತು. ಬುಧವಾರ ಸಿಬಿಐ ಮುಖ್ಯಸ್ಥ ಅಲೋಕ್‌ ವರ್ಮಾ ದೆಹಲಿಯ ಕಚೇರಿಗೆ ಮರಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು