ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಸಭೆಯಲ್ಲಿ ಲಾಕ್‌ಡೌನ್ ಪರ ಸಿಎಂಗಳ ಒಲವು: ವಿಸ್ತರಣೆ ಸಾಧ್ಯತೆ

Last Updated 27 ಏಪ್ರಿಲ್ 2020, 9:21 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್ ಸೋಂಕು (ಕೋವಿಡ್–19) ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮೇ 3ರ ಬಳಿಕವೂ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಹೆಚ್ಚಿನ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಬಳಿ ಚರ್ಚೆ ನಡೆಸಿದ್ದಾರೆ.

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಮೋದಿ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಮೇ 16 ವರೆಗೆ ಲಾಕ್‌ಡೌನ್ ವಿಸ್ತರಣೆಗೆ ಅವಕಾಶ ನೀಡಬೇಕು ಎಂದು ಮೇಘಾಲಯ ಮತ್ತು ಮಿಜೋರಾಂ ಮುಖ್ಯಂತ್ರಿಗಳು ಮನವಿ ಮಾಡಿದ್ದಾರೆ. ಹಂತಹಂತವಾಗಿ ಆರ್ಥಿಕ ಚಟುವಟಿಕೆಗಳಿಗೆ ಅನುಮತಿ ನೀಡುತ್ತೇವೆ ಎಂದು ಉತ್ತರಾಖಂಡ ಮುಖ್ಯಮಂತ್ರಿಯವರು ಪ್ರಧಾನಿಗೆ ತಿಳಿಸಿದ್ದಾರೆ.

ಆದ್ಯತೆ ಮೇರೆಗೆ ಹಂತಹಂತವಾಗಿ ಲಾಕ್‌ಡೌನ್ ತೆರವುಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆಗಿನ ಸಭೆಯಲ್ಲಿ ಪ್ರಧಾನಿಯವರು ದೀರ್ಘ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಗಳ ಪಾತ್ರ ಮತ್ತು ಸಹಕಾರವನ್ನು ಮೋದಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

’ಲಾಕ್‌ಡೌನ್ ನಿಯಮ ಉಲ್ಲಂಘಿಸಬಾರದು’: ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಕಡಿಮೆ ಇರುವುದು ನಿಜ. ಆದರೂ ಲಾಕ್‌ಡೌನ್ ನಿಯಮಗಳನ್ನು ಯಾರೂ ಉಲ್ಲಂಘಿಸಬಾರದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೈಗಾರಿಕೆ, ಅಗತ್ಯವಸ್ತುಗಳ ವ್ಯಾಪಾರ ವಹಿವಾಟು ಮತ್ತು ಇತರ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿದ್ದೇವೆ. ಕೊರೊನಾ ವಿರುದ್ಧ ನಡೆಯುತ್ತಿರುವುದು ಸುದೀರ್ಘ ಹೋರಾಟ. ಹಂತಹಂತವಾಗಿ ಲಾಕ್‌ಡೌನ್ ತೆರವು ಮಾಡಬೇಕಿದೆ ಎಂದೂ ಅಮಿತ್ ಶಾ ಹೇಳಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದಾರೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಸುಧಾಕರ್, ಬಸವರಾಜ ಬೊಮ್ಮಯಿ ಸಾಥ್ ನೀಡಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿಲ್ಲ. ಕೇರಳ ಸರ್ಕಾರವು ತನ್ನ ಸಲಹೆಗಳನ್ನು ಕೇಂದ್ರಕ್ಕೆ ಲಿಖಿತ ರೂಪದಲ್ಲಿ ಸಲ್ಲಿಸಿದೆ. ಕೇರಳ ಮುಖ್ಯ ಕಾರ್ಯದರ್ಶಿ ಕಾನ್ಫರನ್ಸ್‌ನಲ್ಲಿ ಭಾಗವಹಿಸಿದ್ದಾರೆ.

ಕೋವಿಡ್‌–19 ಪಿಡುಗು ವಿರುದ್ಧ ಹೋರಾಟ ಆರಂಭಗೊಂಡ ನಂತರ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನಡೆಸುತ್ತಿರುವ ಮೂರನೇ ವಿಡಿಯೊ ಕಾನ್ಫರೆನ್ಸ್‌ ಇದಾಗಿದೆ. ಲಾಕ್‌ಡೌನ್ ಮೇ 3ರವರೆಗೆ ವಿಸ್ತರಿಸುವ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಏಪ್ರಿಲ್ 11ರಂದು ಪ್ರಧಾನಿಯವರು ಎಲ್ಲ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದ್ದರು. ಆಗ, ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್‌ಡೌನ್ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT