ದೆಹಲಿ ಮೆಟ್ರೊ, ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಕೇಜ್ರಿವಾಲ್

ನವದೆಹಲಿ: ಮೆಟ್ರೊ ರೈಲು, ದೆಹಲಿ ಸಾರಿಗೆ ನಿಗಮ ಮತ್ತು ಕ್ಲಸ್ಟರ್ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ 2–3 ತಿಂಗಳುಗಳಲ್ಲಿ ಯೋಜನೆ ಜಾರಿಗೊಳಿಸಲಾಗುವುದು ಎಂದೂ ತಿಳಿಸಿದ್ದಾರೆ.
ದೆಹಲಿಯಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ಸರ್ಕಾರ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ.
ಯೋಜನೆ ಜಾರಿಗೆ ಪ್ರಸಕ್ತ ಹಣಕಾಸು ವರ್ಷದ ಇನ್ನುಳಿದ ಅವಧಿಯಲ್ಲಿ ₹700–₹800 ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಪ್ರಸ್ತಾವದ ಬಗ್ಗೆ ಅಧ್ಯಯನ ನಡೆಸಲು ಕೇಜ್ರಿವಾಲ್ ಅವರು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯೋಜನೆ ಜಾರಿಗೊಳಿಸುವುದಕ್ಕೂ ಮುನ್ನ ಸಾರ್ವಜನಿಕರಿಂದಲೂ ಅಭಿಪ್ರಾಯ ಸಂಗ್ರಹಿಸಲು ಸರ್ಕಾರ ಮುಂದಾಗಿದೆ.
ಯೋಜನೆ ಬಗ್ಗೆ ವಿಸ್ತೃತ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಬಳಿಕ ಸಚಿವ ಸಂಪುಟದಲ್ಲಿ ಪ್ರಸ್ತಾಪ ಮಂಡನೆ ಮಾಡಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. ಈ ಯೋಜನೆಯಿಂದ ಮೆಟ್ರೊದಲ್ಲಿ ಪ್ರಯಾಣಿಕ ದಟ್ಟಣೆ ಉಂಟಾಗದು. ಪ್ರತಿದಿನ ಪ್ರಯಾಣಿಸುವವರ ಸಂಖ್ಯೆ ಕೇವಲ 1 ಲಕ್ಷದಷ್ಟು ಹೆಚ್ಚಾಗಬಹುದು. ಸದ್ಯ ದೆಹಲಿ ಮೆಟ್ರೊದಲ್ಲಿ ಪ್ರತಿ ದಿನ 25 ಲಕ್ಷ ಜನ ಪ್ರಯಾಣಿಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
‘ಮಹಿಳೆಯರ ಸುರಕ್ಷತೆ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿರಲಿದೆ. ನಗರದಾದ್ಯಂತ 1.50 ಲಕ್ಷ ಸಿಸಿಟಿವಿ ಕ್ಯಾಮರಾ ಅಳವಡಿಸಲು ಗುತ್ತಿಗೆ ನೀಡಲಾಗಿದೆ’ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.