ಗುರುವಾರ , ಮೇ 6, 2021
30 °C

ದೆಹಲಿ ಹಿಂಸಾಚಾರ: ಮಾರ್ಚ್‌ 12ಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರ ಮತ್ತು ರಾಜಕೀಯ ಮುಖಂಡರಿಂದ ದ್ವೇಷ ಭಾಷಣ ವಿರುದ್ಧ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮಾರ್ಚ್‌ 12ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ದೆಹಲಿ ಹೈಕೋರ್ಟ್‌ ತಿಳಿಸಿದೆ. 

ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾ ಮತ್ತು ಕಪಿಲ್‌ ಮಿಶ್ರಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ. ಜೊತೆಗೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ರಾಹುಲ್‌ ಹಾಗೂ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ದ್ವೇಷ ಭಾಷಣದ ಅರ್ಜಿಗಳೂ ಸಲ್ಲಿಸಲಾಗಿದೆ.

ಅರ್ಜಿಗಳ ವಿಚಾರಣೆಯನ್ನು ಏ.13ರಂದು ನಡೆಸುವುದಾಗಿ ಈ ಹಿಂದೆ ಹೈಕೋರ್ಟ್‌ ತಿಳಿಸಿತ್ತು. ‘ಅಷ್ಟು ವಿಳಂಬ ನ್ಯಾಯೋಚಿತವಲ್ಲ.ಅರ್ಜಿಗಳನ್ನು ಮಾರ್ಚ್ 6ರಂದು ವಿಚಾರಣೆ ನಡೆಸಿ, ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ಸೂಚಿಸಿತ್ತು. 

ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಾಟೇಲ್‌ ಮತ್ತು ನ್ಯಾಯಮೂರ್ತಿ ಸಿ.ಹರಿಶಂಕರ್‌ ಪ್ರಕರಣದ ವಿಚಾರಣೆ ನಡೆಸಿದರು. ಸುಪ್ರೀಂ ಕೋರ್ಟ್‌ ಸೂಚನೆಯಂತೆ, ಪ್ರಕರಣ ಸಂಬಂಧಿತ ಎಲ್ಲಾ ಅರ್ಜಿಗಳನ್ನು ಒಂದೇ ದಿನ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.

ಪ್ರತಿಕ್ರಿಯೆಗೆ ಸೂಚನೆ: ಮಾರ್ಚ್‌ 12ರ ಒಳಗೆ ಪ್ರಕರಣ ಸಂಬಂಧ ಪ್ರತಿಕ್ರಿಯೆಯನ್ನು ಸಲ್ಲಿಸಬೇಕು ಎಂದು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ದ್ವೇಷ ಭಾಷಣ: ಪ್ರತಿಕ್ರಿಯೆಗೆ ಸೂಚನೆ
ಸಿಎಎ ವಿರೋಧಿ ಪ್ರತಿಭಟನೆ ವೇಳೆ ದ್ವೇಷ ಭಾಷಣ ಆರೋಪದ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಸಾಮಾಜಿಕ ಕಾರ್ಯಕರ್ತ ಹರ್ಷ ಮಂದರ್‌ಗೆ ಸೂಚಿಸಿದೆ. 

ಪ್ರಕರಣ ಸಂಬಂಧ ಹರ್ಷ ವರ್ಧನ್‌ ಅವರಿಗೆ ನಿಂದನೆ ನೋಟಿಸ್‌ ನೀಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ನ್ಯಾಯಾಲಯ, ಅರ್ಜಿ ವಿಚಾರಣೆಯನ್ನು ಏಪ್ರಿಲ್‌ 15ಕ್ಕೆ ನಡೆಸುವುದಾಗಿ ತಿಳಿಸಿದೆ.

ದೆಹಲಿ ಪೊಲೀಸರು ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಮಂದರ್‌ ವಿರುದ್ಧ ಅಫಿಡವಿಟ್‌ ಸಲ್ಲಿಸಿ, ನ್ಯಾಯಾಂಗ ನಿಂದನೆ ಪ್ರಕ್ರಿಯೆ ಪ್ರಾರಂಭಿಸಲು ಆಗ್ರಹಿಸಿದ್ದರು.  ‘ಮಂದರ್‌ ಅವರ ಭಾಷಣವನ್ನು ನಾನು ಕೇಳಿದ್ದೇನೆ. ಅದರಲ್ಲಿ ಯಾವುದೇ ರೀತಿಯ ನಿಂದನೆ ಮತ್ತು ಆಕ್ಷೇಪಾರ್ಹ ಹೇಳಿಕೆಗಳಿರಲಿಲ್ಲ’ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.

ಸಿಎಎ ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ಕೇಂದ್ರಕ್ಕೆ ‘ಸುಪ್ರೀಂ’ ನೋಟಿಸ್‌ 
ಪೌರತ್ವ (ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಪತ್ರಕರ್ತರೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇದೇ ತಿಂಗಳಲು ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರ್ಧರಿಸಿತು.

ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ, ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ಸೂರ್ಯ ಕಾಂತ್‌ ಅವರನ್ನು ಒಳಗೊಂಡ ನ್ಯಾಯಪೀಠ ಅರ್ಜಿ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್‌ ನೀಡಿದೆ.

ಸಿಎಎ ಸಿಂಧುತ್ವ ಪ್ರಶ್ನಿಸಿ ಪತ್ರಕರ್ತ ಸಾಕೇತ್‌ ಗೋಖಲೆ ಅವರ ಅರ್ಜಿ ಸೇರಿ ಒಟ್ಟು 160 ಅರ್ಜಿಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ನಿರ್ಧರಿಸಿದೆ. 

ಕಳೆದ ಡಿ.18 ರಂದು ಅರ್ಜಿಗಳ ಪರಿಶೀಲನೆಗೆ ನಿರ್ಧರಿಸಿದ್ದ ಸುಪ್ರೀಂ ಕೋರ್ಟ್‌ ಕಾಯ್ದೆಗೆ ತಡೆನೀಡಲು ನಿರಾಕರಿಸಿತ್ತು. ಜನವರಿಯಲ್ಲಿ ಈ ಸಂಬಂಧಿತ ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರಕ್ಕೆ ನಾಲ್ಕು ವಾರಗಳ ಗಡುವು ನೀಡಿತ್ತು. 

ಅಸ್ಸಾಂ ಮತ್ತು ತ್ರಿಪುರಾದಲ್ಲಿ ಸಮಸ್ಯೆ ದೇಶದ ಇತರ ಭಾಗಗಳಿಗಿಂತ ಭಿನ್ನವಾಗಿದೆ. ಹೀಗಾಗಿ ಆ ರಾಜ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ತಿಳಿಸಿತ್ತು.

ಬಂಧಿತರ ವಿವರ ಬಹಿರಂಗಪಡಿಸಲು ಕೋರಿ ಅರ್ಜಿ
ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿತರಾಗಿರುವವರ ಹೆಸರುಗಳನ್ನು ಬಹಿರಂಗಪಡಿಸುವಂತೆ ನಿರ್ದೇಶಿಸಬೇಕು ಎಂದು ಕೋರಿ ಸಿಪಿಐ (ಎಂ) ನಾಯಕಿ ಬೃಂದಾ ಕಾರಟ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯೆ ದಾಖಲಿಸುವಂತೆ ಪೊಲೀಸ್‌ ಇಲಾಖೆ ಮತ್ತು ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್‌ ಸೂಚಿಸಿದೆ. 

ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಾಟೀಲ್‌ ಮತ್ತು ನ್ಯಾಯಮೂರ್ತಿ ಸಿ. ಹರಿ ಶಂಕರ್‌ ಅವರಿದ್ದ ಪೀಠ ಅರ್ಜಿಯ ವಿಚಾರಣೆ ನಡೆಸಿತು. ಬಂಧಿತ ವ್ಯಕ್ತಿಗಳ ಹೆಸರಿನ ಪಟ್ಟಿ ಪೊಲೀಸ್‌ ನಿಯಂತ್ರಣ ಕೊಠಡಿ ಮತ್ತು ಜಿಲ್ಲೆಯ ಪೊಲೀಸ್‌ ಠಾಣೆಯಲ್ಲಿ ಪ್ರಕಟಿಸಬೇಕು. ಪ್ರಕರಣದ ಪ್ರತಿ ಹಂತದ ಮಾಹಿತಿ ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.  

ಎರಡು ದಿನಗಳ ಅಭಿಯಾನ
ಗಲಭೆಯಿಂದ ಸಂತ್ರಸ್ತರಾದವರಿಗೆ ಪರಿಹಾರ ನೀಡಲು ಶನಿವಾರದಿಂದ ಎರಡು ದಿನಗಳ ಬೃಹತ್‌ ಪರಿಶೀಲನಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ. 

‘ಆರು ಐಎಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ಆಂದೋಲನ ನಡೆಯಲಿದೆ’ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು