ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ: ರಾಹುಲ್ ಗಾಂಧಿ

Last Updated 25 ನವೆಂಬರ್ 2019, 11:12 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಪರಿಸ್ಥಿತಿ ಕುರಿತು ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಲೋಕಸಭೆಯಲ್ಲಿ ತಿಳಿಸಿದರು.

ಶೂನ್ಯ ವೇಳೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿರುವುದರಿಂದಾಗಿ ನಾನಿಂದು ಪ್ರಶ್ನೆಗಳನ್ನು ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಹೇಳಿದರು.

ಬಿಜೆಪಿ ತರಾತುರಿಯಲ್ಲಿ ಮಹಾರಾಷ್ಟ್ರದಲ್ಲಿಸರ್ಕಾರ ರಚಿಸಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಸೋಮವಾರ ಕಲಾಪ ಆರಂಭವಾದಾಗ ವಿಪಕ್ಷಗಳ ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಪ್ರಜಾಪ್ರಭುತ್ವದ ಹತ್ಯೆಯನ್ನು ನಿಲ್ಲಿಸಿ ಎಂದು ಘೋಷಣೆ ಕೂಗಿದರು. ಈ ವೇಳೆ ಸಭಾಪತಿ ಓಂ ಬಿರ್ಲಾ ಕಲಾಪವನ್ನು 12ಗಂಟೆಗೆ ಮುಂದೂಡಿದರು.

ಕಾಂಗ್ರೆಸ್, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(IUML) ಮತ್ತು ತೃಣಮೂಲ ಕಾಂಗ್ರೆಸ್(TMC) ಸೋಮವಾರ ಲೋಕಸಭೆಯಲ್ಲಿ ಮಹಾರಾಷ್ಟ್ರದ ವಿಚಾರವಾಗಿ ಕಲಾಪ ಮುಂದೂಡುವಿಕೆಯ ನಿಲುವಳಿ ಸೂಚನೆಯನ್ನು ಮಂಡಿಸಿದವು. ಮಹಾರಾಷ್ಟ್ರದ ಪರಿಸ್ಥಿತಿ ಕುರಿತು ಸಿಪಿಎಂ ಕೂಡ ಲೋಕಸಭೆಯಲ್ಲಿ ಮುಂದೂಡಿಕೆ ನಿಲುವಳಿ ಸೂಚನೆಯನ್ನು ನೀಡಿತು.

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂತೆಗೆತದ ಕುರಿತು ಚರ್ಚಿಸಲು ವಿಪಕ್ಷಗಳು ಪಟ್ಟು ಹಿಡಿದಿದ್ದವು. ಇದಕ್ಕೆ ಸಭಾಧ್ಯಕ್ಷರು ಒಪ್ಪದಿದ್ದಾಗ ಸಂಸದರು ಘೋಷಣೆಗಳನ್ನು ಕೂಗಲು ಆರಂಭಿಸಿದರು. ಇದರಿಂದಾಗಿ ಸದನವನ್ನು ಮಧ್ಯಾಹ್ನ 2ಗಂಟೆವರೆಗೂ ಮುಂದೂಡಲಾಯಿತು.

ಇನ್ನೊಂದೆಡೆ ಸಂಸತ್ತಿನ ಹೊರಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪಕ್ಷದ ಸದಸ್ಯರು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿಯ ನಡೆಯನ್ನು ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT