ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ಪರಿಸ್ಥಿತಿ: ಕೇಂದ್ರದ ನೆರವಿಗೆ ಎಚ್‌ಡಿಕೆ ಮನವಿ

ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿ ಚರ್ಚೆ
Last Updated 27 ಡಿಸೆಂಬರ್ 2018, 20:32 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವರನ್ನು ಗುರುವಾರ ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯದ ವಿವಿಧ ಯೋಜನೆಗಳ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡುವಂತೆ ಮನವಿ ಸಲ್ಲಿಸಿದರು.

ಬರದಿಂದ ತತ್ತರಿಸಿರುವ 156 ತಾಲ್ಲೂಕುಗಳಲ್ಲಿ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಕೂಡಲೇ ಕೇಂದ್ರದಿಂದ ಆರ್ಥಿಕ ನೆರವು ನೀಡಬೇಕು ಎಂದು ಅವರು ಪ್ರಧಾನಿ ಭೇಟಿಯ ವೇಳೆ ಆಗ್ರಹಿಸಿದರು.

ಪ್ರಸಕ್ತ ವರ್ಷ ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ವೈಫಲ್ಯದಿಂದ ಹಿಂದೆಂದೂ ಕಂಡರಿಯದಂಥ ಬರ ಸ್ಥಿತಿ ತಲೆದೋರಿದೆ. ಕೃಷಿ ಕೂಲಿಕಾರರಿಗೆ ಉದ್ಯೋಗ ಕಲ್ಪಿಸುವುದಲ್ಲದೆ, ಕುಡಿಯುವ ನೀರು ಮತ್ತು ಮೇವು ಪೂರೈಕೆಗೆ ಕ್ರಮ ಕೈಗೊಳ್ಳಬೇಕಿದೆ. ಸಂಕಷ್ಟದಲ್ಲಿರುವ ರೈತ ಸಮೂಹಕ್ಕೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಅವರು ಮನವಿ ಮಾಡಿದರು.

ರಾಷ್ಟ್ರೀಯ ವಿಕೋಪ ಪರಿಹಾರ ನಿಧಿ (ಎನ್‌ಡಿಆರ್‍ಎಫ್) ಅಡಿ ಎಲ್ಲ ರೈತರಿಗೂ ಇನ್‌ಪುಟ್‌ ಸಬ್ಸಿಡಿ ನೀಡಬೇಕು. ಮುಂಗಾರು ಹಂಗಾಮಿನಲ್ಲಿ ಬರದಿಂದ ನಷ್ಟಕ್ಕೀಡಾಗಿರುವ ರೈತರಿಗೆ ₹ 2,434 ಕೋಟಿ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಅವರು ಕೋರಿದರು.

ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿ ಬಾಕಿ ಇರುವ ₹ 935 ಕೋಟಿ ಅನುದಾನ ಒಳಗೊಂಡಂತೆ, ಬರಪೀಡಿತ ಪ್ರದೇಶಗಳ ಕೂಲಿಕಾರರು ಗುಳೆ ಹೋಗುವುದನ್ನು ತಡೆಯಲು ಒಟ್ಟು ₹ 2,538 ಕೋಟಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಮೇಕೆದಾಟು ಯೋಜನೆ ಮೂಲಕ 67 ಟಿಎಂಸಿ ಅಡಿ ಸಂಗ್ರಹ ಸಾಮರ್ಥ್ಯದ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಮಹದಾಯಿ ನೀರಿನ ಬಳಕೆ ಕುರಿತೂ ಕರ್ನಾಟಕದ ನೆರವಿಗೆ ಬರುವ ನಿಟ್ಟಿನಲ್ಲಿ ಆಸಕ್ತಿ ತಾಳಬೇಕು ಎಂದು ಅವರು ಆಗ್ರಹಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ-ಯ ಮೂರನೇ ಹಂತದ ಮೂಲಕ ವಿಜಯಪುರ, ರಾಯಚೂರು, ಕಲ್ಬುರ್ಗಿ, ಯಾದಗಿರಿ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಗಳ 5.30 ಲಕ್ಷ ಹೆಕ್ಟೇರ್‌ ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಬಹುದಾಗಿದೆ. ಕೂಡಲೇ ಇದನ್ನು ‘ರಾಷ್ಟ್ರೀಯ ಯೋಜನೆ’ ಎಂದು ಘೋಷಿಸುವ ಮೂಲಕ ಭೂಸ್ವಾಧೀನ ಪ್ರಕ್ರಿಯೆಗೆ ಅಗತ್ಯವಿರುವ ₹ 60,000 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಅವರು ಪ್ರಧಾನಿಯವರಿಗೆ ಮನವಿ ಸಲ್ಲಿಸಿದರು.

ಉಪನಗರ ರೈಲು
ಉಪನಗರ ರೈಲ್ವೆ ಯೋಜನೆಗೆ ಮುಂದಿನ ತಿಂಗಳು ಶಂಕು ಸ್ಥಾಪನೆ ನೆರವೇರಿಸಲು ಉದ್ದೇಶಿಸಲಾಗಿದೆ. ಪ್ರಧಾನಿ ಮೋದಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದ್ದು, ರಾಜ್ಯದ ಬಹುತೇಕ ಪ್ರಸ್ತಾವನೆಗಳಿಗೆ ರೈಲ್ವೆ ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದರು.

ರೈಲ್ವೆ ಹಾಗೂ ಇಂಧನ ಸಚಿವ ಪೀಯೂಷ್‌ ಗೋಯಲ್‌ ಅವರನ್ನು ಭೇಟಿ ಮಾಡಿ ವಿವಿಧ ರೈಲ್ವೆ ಯೋಜನೆಗಳ ಕುರಿತು ಚರ್ಚಿಸಿದ ಕುಮಾರಸ್ವಾಮಿ, ಬೆಂಗಳೂರು ಉಪನಗರ (ಸಬ್‌ ಅರ್ಬನ್‌) ರೈಲ್ವೆ ಯೋಜನೆಗಾಗಿನ ಭೂಸ್ವಾಧೀನ ಪ್ರಕ್ರಿಯೆ ಸೇರಿದಂತೆ ರಾಜ್ಯ ಸರ್ಕಾರ ನೀಡಬೇಕಿರುವ ಎಲ್ಲ ರೀತಿಯ ಒಪ್ಪಿಗೆಗಳಿಗೆ ಸಂಬಂಧಿಸಿದ ಆದೇಶವನ್ನು ಮೂರು ದಿನಗಳಲ್ಲಿ ಹೊರಡಿಸಲಾಗುವುದು ಎಂದು ಹೇಳಿದರು.

ಬೀದರ್‌– ನಾಂದೇಡ್‌ ರೈಲು ಮಾರ್ಗ ಹಾಗೂ ಬೇಲೂರು– ಸಕಲೇಶಪುರ– ಹಾಸನ ರೈಲು ಮಾರ್ಗಗಳಿಗೆ ಸಚಿವರು ಒಪ್ಪಿಗೆ ಸೂಚಿಸಿದ್ದಾರೆ. ಹುಬ್ಬಳ್ಳಿ– ಅಂಕೋಲಾ ರೈಲು ಮಾರ್ಗಕ್ಕೆ ಪರಿಸರ ಮತ್ತು ಅರಣ್ಯ ಸಚಿವಾಲಯದ ಮಾನದಂಡಗಳ ಅನ್ವಯ ಒಪ್ಪಿಗೆ ನೀಡುವಂತೆ ಅವರನ್ನು ಕೋರಲಾಗಿದೆ ಎಂದು ಅವರು ವಿವರಿಸಿದರು.

ರಾಜ್ಯದ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಅಗತ್ಯವಿರುವ ಕಲ್ಲಿದ್ದಲು ಪೂರೈಕೆ ನಿಟ್ಟಿನಲ್ಲಿ ಕಲ್ಲಿದ್ದಲು ಘಟಕ ಹಂಚಿಕೆ ಮಾಡುವಂತೆಯೂ ಇದೇ ಸಂದರ್ಭದಲ್ಲಿ ಮನವಿ ಮಾಡಲಾಗಿದ್ದು, ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ಅವರು ಹೇಳಿದರು.

ಅವಧಿ ವಿಸ್ತರಣೆಗೆ ಆಗ್ರಹ
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕಾಯ್ದೆಯ ಅನುಷ್ಠಾನದಲ್ಲಿ ಕನಾಟಕವು ಇತರ ರಾಜ್ಯಗಳಿಗೆ ಮಾದರಿಯಾಗಿದ್ದು, 2025ರವರೆಗೆ ಜಿಎಸ್‌ಟಿ ಪರಿಹಾರ ಅವಧಿಯನ್ನು ವಿಸ್ತರಿಸುವಂತೆ ರಾಜ್ಯ ಸರ್ಕಾರ ಕೇಂದ್ರವನ್ನು ಕೋರಿದೆ.

ಹಣಕಾಸು ಸಚಿವ ಅರುಣ್ ಜೇಟ್ಲಿ ಅವರೊಂದಿಗೆ ಗುರುವಾರ ಈ ಕುರಿತು ಚರ್ಚಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ನಿರೀಕ್ಷಿತ ಪ್ರಮಾಣದ ಪರೋಕ್ಷ ತೆರಿಗೆ ಸಂಗ್ರಹಣೆಯಾಗದೆ ಸಾಮಾಜಿಕ ಭದ್ರತೆಯ ಯೋಜನೆಗಳಿಗೆ ಅನುದಾನ ಕೊರತೆ ಆಗಲಿದೆ. ಕಾರಣ ಪರಿಹಾರ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ಜಿಎಸ್‌ಟಿ ಕಾಯ್ದೆ ಜಾರಿಗೆ ಮೊದಲು ರಾಜ್ಯದಲ್ಲಿ ತೆರಿಗೆ ಸಂಗ್ರಹ ಉತ್ತಮವಾಗಿತ್ತು. ಕಾಯ್ದೆ ಜಾರಿಯ ನಂತರ ತೆರಿಗೆ ಸಂಗ್ರಹ ಇಳಿಮುಖವಾಗಿದ್ದು, ಶೇ 20ರಷ್ಟು ಕೊರತೆ ಕಂಡುಬಂದಿದೆ ಎಂದು ಅವರು ಜೇಟ್ಲಿ ಅವರಿಗೆ ವಿವರಿಸಿದರು.

ವಿಮಾನ ಹಾರಟಕ್ಕೆ ಕ್ರಮ ಕೈಗೊಳ್ಳಿ
ರಾಜ್ಯದ ಕಲ್ಬುರ್ಗಿ ಮತ್ತು ಬೀದರ್‌ ವಿಮಾನ ನಿಲ್ದಾಣಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ಹಾರಾಟಕ್ಕೆ ಕ್ರಮ ಕೈಗೊಳ್ಳುವಂತೆ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಸೂಚಿಸಬೇಕು ಎಂದು ಕೇಂದ್ರದ ವಿಮಾನಯಾನ ಮತ್ತು ವಾಣಿಜ್ಯ ಸಚಿವ ಸುರೇಶ ಪ್ರಭು ಅವರಿಗೆ ಕುಮಾರಸ್ವಾಮಿ ಕೋರಿದರು.

ವಿಶೇಷ ಉದ್ದೇಶ ವಾಹಕ (ಎಸ್‌ಪಿವಿ)ದ ಮೂಲಕ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯಪುರ ಮತ್ತು ಕಾರವಾರಗಳಲ್ಲೂ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ. ಅಗತ್ಯ ನೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಭಾರತೀಯ ವಾಯುಪಡೆಯು ಬೆಂಗಳೂರಿನಲ್ಲಿರುವ ಹೆಲಿಕಾಪ್ಟರ್ ತರಬೇತಿ ವಿಭಾಗವನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಸ್ಥಳಾಂತರದ ಪ್ರಸ್ತಾವನೆ ಸಲ್ಲಿಸಿದೆ. ಮೈಸೂರು ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಪಡಿಸಿ ನಾಗರಿಕ ಬಳಕೆ ಹಾಗೂ ಮಿಲಿಟರಿ ಬಳಕೆಗೆ ಅಗತ್ಯವಿರುವ ಎಲ್ಲ ಸೌಲಭ್ಯ ಒದಗಿಸುವುದಾಗಿ ವಾಯುಪಡೆಯೇ ತಿಳಿಸಿದ್ದು, ಕೇಂದ್ರ ಸರ್ಕಾರ ಈ ಕುರಿತು ಗಮನಿಸಬೇಕು ಎಂದು ಅವರು ಇದೇ ವೇಳೆ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT