ಭಾನುವಾರ, ಸೆಪ್ಟೆಂಬರ್ 22, 2019
28 °C
ಪಂಜಾಬ್ ಗುರುದಾಸ್ ಪುರ ಜಿಲ್ಲೆಯಲ್ಲಿ ದುರಂತ

ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ: 20 ಮಂದಿ ಸಾವು

Published:
Updated:

ಗುರುದಾಸ್‌ಪುರ(ಪಂಜಾಬ್): ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಪಂಜಾಬ್‌‌ನ ಗುರುದಾಸ್‌‌ಪುರದಲ್ಲಿ ಬುಧವಾರ ಸಂಭವಿಸಿದೆ.

ಸ್ಫೋಟ ಸಂಭವಿಸಿದ ಪರಿಣಾಮ ಕಾರ್ಖಾನೆಯ ಕಟ್ಟಡ ಕುಸಿದು ಬಿದ್ದಿದೆ. ವಿಷಯ ತಿಳಿದ ಕೂಡಲೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪೊಲೀಸ್ ಸಿಬ್ಬಂದಿಯಲ್ಲದೆ ಎನ್‌ಡಿಆರ್‌ಎಫ್ ಹಾಗೂ ಎಸ್ ಡಿ ಆರ್ ಎಫ್ ತಂಡಗಳು ಸ್ಥಳಕ್ಕೆ ಆಗಮಿಸಿವೆ ಎಂದು ಜಿಲ್ಲಾಧಿಕಾರಿ ವಿಪುಲ್ ಉಜ್ಜವಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಘಟನೆಯಲ್ಲಿ 15 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನೂ ಅಮೃತಸರದ ಗುರುನಾನಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಘಟನೆಯಲ್ಲಿ ಸಾವನ್ನಪ್ಪಿದವರ ಕುರಿತು ಶೋಕ ವ್ಯಕ್ತಪಡಿಸಿದ್ದಾರೆ.

ಪ್ರಬಲ ಸ್ಫೋಟಕ ಇದಾಗಿದ್ದು, ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಕಟ್ಟಡಗಳ ಕಿಟಕಿ ಬಾಗಿಲು ಒಂದು ಕಿಲೋ ಮೀಟರ್ ನಷ್ಟು ದೂರಕ್ಕೆ ಎಸೆಯಲ್ಪಟ್ಟಿವೆ. ಅಲ್ಲದೆ, ಕೆಲವು ಕಟ್ಟಡಗಳು ಕುಸಿದಿದ್ದರೆ, ಮತ್ತೆ ಕೆಲವು ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿವೆ. ಮೂರು ಅಂತಸ್ತಿನ ಪಟಾಕಿ ತಯಾರಿಕಾ ಕಟ್ಟಡದಲ್ಲಿ ಸ್ಫೋಟ ಸಂಭವಿಸಿದೆ. ಹಲವು ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಘಟನೆಯಲ್ಲಿ 19 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವವರನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Post Comments (+)