ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮಿತ್ ಶಾ ಹೆಸರಲ್ಲಿ ನಕಲಿ ಟ್ವೀಟ್‌: ಗುಜರಾತ್‌ನಲ್ಲಿ ನಾಲ್ವರ ಬಂಧನ

Last Updated 9 ಮೇ 2020, 12:58 IST
ಅಕ್ಷರ ಗಾತ್ರ

ಅಹಮದಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಟ್ವೀಟ್‌ ಹರಿಯಬಿಟ್ಟ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ ಎಂದು ಗುಜರಾತ್‌ ಪೊಲೀಸರು ಶನಿವಾರ ತಿಳಿಸಿದ್ದಾರೆ.

‘ಕೇಂದ್ರ ಮತ್ತು ಗುಜರಾತ್ ಸರ್ಕಾರಗಳು ಕೋವಿಡ್-19 ವಿರುದ್ಧ ಒಟ್ಟಾಗಿ ಹೋರಾಡುತ್ತಿವೆ. ಇಂತಹ ಸಂದರ್ಭದಲ್ಲಿಯೂ ಯಾವಾಗಲೂ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಸುದ್ದಿ ಹರಡುವುದು ಅಪರಾಧ. ಕೇಂದ್ರ ಗೃಹ ಸಚಿವರ ಹೆಸರಿನಲ್ಲಿ ಫೋಟೊಶಾಪ್ ಮಾಡಲಾದ ನಕಲಿ ಟ್ವೀಟೊಂದನ್ನು ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಡಲಾಗಿದೆ’ ಎಂದು ಕ್ರೈಂ ಬ್ರಾಂಚ್ ವಿಭಾಗದ ಪೊಲೀಸ್ ಆಯಕ್ತ ಅಜಯ್ ತೋಮರ್ ಹೇಳಿದ್ದಾರೆ.

ಕೃತ್ಯಕ್ಕೆ ಸಂಬಂಧಿಸಿ ಅಹಮದಾಬಾದ್ ನಗರ ಕ್ರೈಂ ಬ್ರಾಂಚ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(ಸಿ), 66(ಡಿ) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 419ರ ಅನ್ವಯ ಪ್ರಕರಣ ದಾಖಲಿಸಲಾಗಿದೆ.

ತನಿಖೆ ಪ್ರಗತಿಯಲ್ಲಿದೆ. ತನಿಖೆ ಬಳಿಕ ಹೆಚ್ಚಿನ ಮಾಹಿತಿ ದೊರೆಯಲಿದೆ ಎಂದೂ ತೋಮರ್ ಹೇಳಿದ್ದಾರೆ.

ಕೊರೊನಾ ವಿರುದ್ಧದ ಹೋರಾಟಕ್ಕೆ ಸಂಬಂಧಿಸಿದ ಸಭೆಗಳಲ್ಲಿ ಪಾಲ್ಗೊಂಡ ಚಿತ್ರಗಳನ್ನು ಅಮಿತ್ ಶಾ ನಿಯಮಿತವಾಗಿ ಟ್ವಿಟರ್‌ನಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇಷ್ಟಾದರೂ ಅವರ ಆರೋಗ್ಯ ಚೆನ್ನಾಗಿಲ್ಲ ಎಂದು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹರಿದಾಡುತ್ತಿತ್ತು. ಅಮಿತ್‌ ಶಾ ಮೂಳೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಶೀಘ್ರ ಗುಣಮುಖರಾಗಲು ಮುಸ್ಲಿಂ ಸಮುದಾಯದ ಆಶೀರ್ವಾದ ಕೋರಿದ್ದಾರೆ ಎಂಬ ನಕಲಿ ಟ್ವೀಟ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇದರ ಬೆನ್ನಲ್ಲೇ, ‘ನಾನು ಸಂಪೂರ್ಣ ಆರೋಗ್ಯದಿಂದ ಇದ್ದೇನೆ ಹಾಗೂ ಯಾವುದೇ ಕಾಯಿಲೆಯಿಂದ ಬಳಲುತ್ತಿಲ್ಲ’ ಎಂದು ಅಮಿತ್ ಶಾ ಸ್ಪಷ್ಟನೆಯನ್ನೂ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT