ಜಿಎಸ್‌ಟಿ ವ್ಯಾಪ್ತಿಗೆ ತೈಲೋತ್ಪನ್ನ: ಕರ್ನಾಟಕದ ವಿರೋಧ

7

ಜಿಎಸ್‌ಟಿ ವ್ಯಾಪ್ತಿಗೆ ತೈಲೋತ್ಪನ್ನ: ಕರ್ನಾಟಕದ ವಿರೋಧ

Published:
Updated:

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಎಲ್ಲ ತೈಲೋತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಒಳಪಡಿಸುವ ಕೇಂದ್ರದ ಪ್ರಸ್ತಾವಕ್ಕೆ ಕರ್ನಾಟಕದ ವಿರೋಧವಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

‘ಹಿಂದೂಸ್ತಾನ್‌ ಟೈಮ್ಸ್‌’ ಪತ್ರಿಕಾ ಸಮೂಹ ಶನಿವಾರ ಇಲ್ಲಿ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತೈಲೋತ್ಪನ್ನಗಳ ದರ ನಿಯಂತ್ರಿಸಲು ಕೇಂದ್ರ ಸರ್ಕಾರ ಪರ್ಯಾಯ ಮಾರ್ಗ ಅನುಸರಿಸಬೇಕೇ ವಿನಾ ಜಿಎಸ್‌ಟಿ ವ್ಯಾಪ್ತಿಗೆ ತರುವುದೇ ಪರಿಹಾರ ಎಂದು ಭಾವಿಸಬಾರದು ಎಂದು ಹೇಳಿದರು.

ತೈಲೋತ್ಪನ್ನಗಳನ್ನೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸುವುದರಿಂದ ರಾಜ್ಯಗಳ ಆದಾಯದಲ್ಲಿ ಭಾರಿ ಪ್ರಮಾಣದ ಹೊಡೆತ ಬೀಳಲಿದೆ. ರಾಜ್ಯ ಸರ್ಕಾರಗಳಿಗೆ ಇರುವ ಸಂವಿಧಾನದತ್ತ ಅಧಿಕಾರಗಳನ್ನು ನಿರಾಕರಿಸುವ ಕೇಂದ್ರದ ಕ್ರಮವು ಸ್ವಾಗತಾರ್ಹ ಅಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಇದು ಸೂಕ್ತ ನಡೆಯಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಜಾಗತಿಕವಾಗಿ ಹೆಸರಾಗಿರುವ ಬೆಂಗಳೂರು ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಶೀಘ್ರವೇ ಪೆರಿಫೆರಲ್ ರಿಂಗ್ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಮುಂದಿನ ನಾಲ್ಕೈದು ತಿಂಗಳುಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಭಾರಿ ಬದಲಾವಣೆ ಬರಲಿದೆ. ‘ನಮ್ಮ ಮೆಟ್ರೋ’ ಕಾಮಗಾರಿಯೂ ಕಾಲಮಿತಿಯಲ್ಲಿ ಪೂರ್ಣಗೊಳ್ಳಲಿದೆ. ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಎಲೆವೇಟೆಡ್ ಕಾರಿಡಾರ್ ನಿರ್ಮಾಣದ ಉದ್ದೇಶ ಹೊಂದಿದೆ ಎಂದು ಅವರು ವಿವರಿಸಿದರು.

ಐದು ವರ್ಷಗಳ ಅವಧಿಗೆ ಜೆಡಿಎಸ್‌– ಕಾಂಗ್ರೆಸ್‌ ಆಡಳಿತ ಇರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದ ಆಹಾರ ಸಚಿವ ರಾಮ್‌ವಿಲಾಸ್‌ ಪಾಸ್ವಾನ್‌ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿ, ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ರಾಜ್ಯ ಸರ್ಕಾರಕ್ಕೆ ಬಾಕಿ ಉಳಿಸಿಕೊಂಡಿರುವ ₹ 1,127 ಕೋಟಿ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರಲ್ಲದೆ, ಈ ಕುರಿತ ದಾಖಲೆಗಳನ್ನು ಸಲ್ಲಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 5

  Angry

Comments:

0 comments

Write the first review for this !