ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಕ್ರಮಕ್ಕೆ ಸಹಕರಿಸುವ ಪೊಲೀಸರ ವಿರುದ್ಧ ಶಿಸ್ತುಕ್ರಮ’

Last Updated 2 ಏಪ್ರಿಲ್ 2018, 19:53 IST
ಅಕ್ಷರ ಗಾತ್ರ

ಬೆಂಗಳೂರು: ‘ವಿಧಾನಸಭಾ ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಎಸಗುವ ಅಕ್ರಮಗಳಿಗೆ ಪೊಲೀಸರು ಸಹಕರಿಸುವುದು ಕಂಡುಬಂದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾದ ನೀಲಮಣಿ ರಾಜು ಎಚ್ಚರಿಕೆ ನೀಡಿದರು.

ಕೋರಮಂಗಲದ ರಾಜ್ಯ ಮೀಸಲು ‍ಪೊಲೀಸ್ ಪಡೆಯ (ಕೆಎಸ್‌ಆರ್‌‌ಪಿ) ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ‘ಪೊಲೀಸ್ ಧ್ವಜ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲಿದ್ದೇವೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಅಲ್ಲೆಲ್ಲ ಬಿಗಿ ಭದ್ರತೆ ಕೈಗೊಳ್ಳಲು ಕ್ರಮ ಕೈಗೊಂಡಿದ್ದೇವೆ’ ಎಂದರು.

‘ಚುನಾವಣಾ ಪ್ರಚಾರ ಸಭೆಗಳಲ್ಲಿ ವಾದ್ಯಮೇಳ, ಅಶ್ಲೀಲ ನೃತ್ಯ, ಬಾಡೂಟಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಅಂಥ ಕಾರ್ಯಕ್ರಮಗಳು ನಡೆದರೆ, ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಠಾಣೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ‘ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ, ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಲು ಪೊಲೀಸರು ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಚುನಾವಣೆಗಳು, ಹಬ್ಬಗಳು ಹಾಗೂ ಯಾವುದೇ ಕಾರ್ಯಕ್ರಮವಿದ್ದರೂ ಅಲ್ಲೆಲ್ಲ ಪೊಲೀಸರು ಕೆಲಸ ಮಾಡುತ್ತಾರೆ. ಅವರೆಲ್ಲ ಮನೆಯಿಂದ ದೂರವಿದ್ದು, ಸಮಾಜವೇ ಮನೆ ಎಂದು ದುಡಿಯುತ್ತಿದ್ದಾರೆ. ಅವರ ಶ್ರಮಕ್ಕೆ ಬೆಲೆ ಕಟ್ಟಲಾಗದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT