ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುಕುಳಕ್ಕೊಳಗಾದ ಮುಸ್ಲಿಮರಿಗೂ ಪೌರತ್ವ ನೀಡಿ: ಮಾಯಾವತಿ ಒತ್ತಾಯ

Last Updated 15 ಜನವರಿ 2020, 13:25 IST
ಅಕ್ಷರ ಗಾತ್ರ

ಲಖನೌ:‘ಕಿರುಕುಳಕ್ಕೊಳಗಾಗಿರುವ ಮುಸ್ಲಿಮರಿಗೂ ಭಾರತೀಯ ಪೌರತ್ವ ನೀಡಬೇಕು’ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಬುಧವಾರ ಒತ್ತಾಯಿಸಿದರು.

ತಮ್ಮ 64 ನೇ ಜನ್ಮದಿನಾಚರಣೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಹಿಂದಕ್ಕೆ ಪಡೆಯಬೇಕು ಹಾಗೂ ಎಲ್ಲರ ಅಭಿಪ್ರಾಯ ಪಡೆದು ಹೊಸ ಕಾಯ್ದೆ ಜಾರಿಗೆ ತರಬೇಕು. ರಾಜಕೀಯ ಲಾಭಕ್ಕಾಗಿ ಬಿಜೆಪಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ. ಕೇಂದ್ರ ಸರ್ಕಾರದ ನೀತಿಗಳಿಂದಾಗಿಯೇ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಿದೆ’ ಎಂದರು.

ಬಿಜೆಪಿ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಸಿಎಎ ಅನ್ನು ಜಾರಿಗೆ ತಂದಿದೆ ಎಂದು ಆರೋಪಿಸಿದ ಅವರು, ಈ ಕಾರಣಕ್ಕಾಗಿಯೇ ದೇಶದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎಲ್ಲೆಡೆ ಹಿಂಸಾಚಾರ ನಡೆಯುತ್ತಿದೆ. ದೇಶದ ಆರ್ಥಿಕ ಪರಿಸ್ಥಿತಿಯೂ ಹದಗೆಟ್ಟಿದೆ ಎಂದು ಕಳವಳ ವ್ಯಕ್ತಪಡಿಸಿದ ಮಾಯಾವತಿ, ಬಿಜೆಪಿ ಹಾಗೂ ಕಾಂಗ್ರೆಸ್‌ ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು.

ಕಾಂಗ್ರೆಸ್‌ ನೇತೃತ್ವದ ಹಿಂದಿನ ಯುಪಿಎ ಸರ್ಕಾರ ಹಾದಿಯನ್ನೇ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅನುಸರಿಸುತ್ತಿದೆ. ಹೀಗೆ ಮುಂದುವರಿದರೆ ಮತ್ತಷ್ಟು ರಾಜ್ಯಗಳ ಅಧಿಕಾರವನ್ನು ಬಿಜೆಪಿ ಕಳೆದುಕೊಳ್ಳಲಿದೆ ಎಂದರು.

‘ಸಿಎಎ ಅನ್ನು ಸ್ಥಾಯಿ ಸಮಿತಿಗೆ ಕಳುಹಿಸುವಂತೆ ಮೇಲಿಂದಮೇಲೆ ಆಗ್ರಹಿಸಲಾಗಿದೆ. ಆದರೆ, ಕೇಂದ್ರವು ಮೊಂಡುತನದಿಂದ ವರ್ತಿಸುತ್ತಿದೆ. ಸಿಎಎ ಅಸಂವಿಧಾನಿಕ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ಕೀಳುಮಟ್ಟದ ರಾಜಕೀಯ ಮಾಡುತ್ತಿವೆ’ ಎಂದು ಅವರು ಆಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT