ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ, ದೆಹಲಿಯಲ್ಲಿ ಕೊರೊನಾ ವೈರಸ್ ಹರಡಲು ನಮಸ್ತೆ ಟ್ರಂಪ್ ಕಾರಣ: ಸಂಜಯ್ ರಾವುತ್

Last Updated 31 ಮೇ 2020, 10:16 IST
ಅಕ್ಷರ ಗಾತ್ರ

ಮುಂಬೈ: ಫೆಬ್ರುವರಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ಅಹಮದಾಬಾದ್‌ನಲ್ಲಿ ನಡೆದ 'ನಮಸ್ತೆ ಟ್ರಂಪ್' ಕಾರ್ಯಕ್ರಮವೇ ಗುಜರಾತ್, ಮುಂಬೈ ಮತ್ತು ದೆಹಲಿಯಲ್ಲಿ ಕೊರೊನಾ ವೈರಸ್ ಹರಡಲು ಕಾರಣ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಆರೋಪಿಸಿದ್ದಾರೆ.

ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ಬರೆದಿರುವ ಅಂಕಣದಲ್ಲಿ, ಅಮೆರಿಕದ ಅಧ್ಯಕ್ಷರ ಭೇಟಿಯ ಸಂದರ್ಭದಲ್ಲಿ ಅಧ್ಯಕ್ಷ ಟ್ರಂಪ್ ಅವರ ಕೆಲವು ಪ್ರತಿನಿಧಿಗಳು ಈ ನಗರಗಳಿಗೆ ಭೇಟಿ ನೀಡಿದ್ದರು ಎಂಬುದನ್ನು ಗಮನಿಸಬೇಕು ಎಂದು ಹೇಳಿದ್ದಾರೆ.

ಕೋವಿಡ್-19 ಲಾಕ್‌ಡೌನ್ ಅನ್ನು ಯಾವುದೇ ಪೂರ್ವ ಸಿದ್ಧತೆಗಳೇ ಇಲ್ಲದೆ ಅನುಷ್ಠಾನಗೊಳಿಸಿದ್ದಕ್ಕಾಗಿ ಮತ್ತು ಈಗ ನಿರ್ಬಂಧಗಳನ್ನು ಸಡಿಲಗೊಳಿಸುವ ಜವಾಬ್ದಾರಿಯನ್ನು ರಾಜ್ಯಗಳಿಗೆ ನೀಡಿರುವುದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

'ಗುಜರಾತ್‌ನಲ್ಲಿ ಕೊರೊನಾ ವೈರಸ್ ಹರಡುವಿಕೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಸ್ವಾಗತಿಸಲು ನಡೆದ ಬೃಹತ್ ಸಾರ್ವಜನಿಕ ಸಭೆಯು ಕಾರಣ ಎಂಬುದನ್ನು ಅಲ್ಲಗಳೆಯುವಂತಿಲ್ಲ. ಟ್ರಂಪ್ ಅವರೊಂದಿಗೆ ಬಂದ ಕೆಲವು ಪ್ರತಿನಿಧಿಗಳು ಮುಂಬೈ, ದೆಹಲಿಗೆ ಭೇಟಿ ನೀಡಿದ್ದೇ ವೈರಸ್ ಹರಡಲು ಕಾರಣವಾಯಿತು' ಎಂದು ತಿಳಿಸಿದ್ದಾರೆ.

ಫೆಬ್ರವರಿ 24 ರಂದು ಅಹಮದಾಬಾದ್‌ನಲ್ಲಿ ನಡೆದ ರೋಡ್‌ ಶೋನಲ್ಲಿ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ರೋಡ್ ಶೋ ಬಳಿಕ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಟ್ರಂಪ್ ಇಬ್ಬರೂ ಮೊಟೆರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನುದ್ದೇಶಿಸಿ ಮಾತನಾಡಿದ್ದರು.

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಮತ್ತು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವ ಪ್ರಯತ್ನಕ್ಕೆ ಕೊರೊನಾ ವೈರಸ್‌‌ ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳುವುದು ಸರಿಯಲ್ಲ. ಒಂದು ವೇಳೆ ಇದೇ ಕಾರಣವಾಗಿದ್ದರೆ ಬಿಜೆಪಿ ಆಢಳಿತಾರೂಢ ರಾಜ್ಯಗಳು ಸೇರಿ 17 ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಬೇಕಾಗುತ್ತದೆ. ಆರು ತಿಂಗಳ ಹಿಂದಷ್ಟೇ ರಾಷ್ಟ್ರಪತಿ ಆಳ್ವಿಕೆಯನ್ನು ಹೇಗೆ ವಿಧಿಸಲಾಯಿತು ಮತ್ತು ತೆಗೆದು ಹಾಕಲಾಯಿತು ಎಂಬುದಕ್ಕೆ ರಾಜ್ಯವೇ ಸಾಕ್ಷಿಯಾಗಿದೆ ಎಂದಿದ್ದಾರೆ.

ವೈರಸ್ ವಿರುದ್ಧ ಹೋರಾಡಲು ಯಾವುದೇ ಯೋಜನೆ ಇಲ್ಲದೆಯೇ ಸಾಂಕ್ರಾಮಿಕ ರೋಗವನ್ನು ನಿಗ್ರಹಿಸುವಲ್ಲಿ ಕೇಂದ್ರ ಸರ್ಕಾರವೂ ಕೂಡ ವಿಫಲವಾಗಿದೆ. ಯಾವುದೇ ಯೋಜೆನೆ ಇಲ್ಲದೆ ಲಾಕ್‌ಡೌನ್ ಮಾಡಿ ಈಗ ಲಾಕ್‌ಡೌನ್ ತೆರವುಗೊಳಿಸುವ ಜವಾಬ್ದಾರಿಯನ್ನು ರಾಜ್ಯಗಳ ಮೇಲಾಕಿರುವುದು ಅವ್ಯವಸ್ಥೆ ಮತ್ತಷ್ಟು ಹೆಚ್ಚಾಗುತ್ತದೆ ಮತ್ತು ಬಿಕ್ಕಟ್ಟನ್ನು ಇನ್ನಷ್ಟು ಹದಗೆಡಿಸುತ್ತದೆ ಎಂದು ತಿಳಿಸಿದ್ದಾರೆ.
ಲಾಕ್‌ಡೌನ್ ಹೇಗೆ ವಿಫಲವಾಗಿದೆ ಎಂಬುದರ ಕುರಿತು ಅತ್ಯುತ್ತಮ ವಿಶ್ಲೇಷಣೆಯನ್ನು ಮಂಡಿಸಿದ್ದಕ್ಕಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಶಿವಸೇನೆ ಮುಖಂಡರು ಶ್ಲಾಘಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT