ದುರ್ಬಲ ಮುಂಗಾರು: ಆತಂಕ ಬೇಡ

ಶುಕ್ರವಾರ, ಜೂಲೈ 19, 2019
28 °C
ಜುಲೈ, ಆಗಸ್ಟ್‌ನಲ್ಲಿ ಚುರುಕಾಗಲಿದೆ ಮಳೆ; ಹವಾಮಾನ ಇಲಾಖೆ ಮಾಹಿತಿ

ದುರ್ಬಲ ಮುಂಗಾರು: ಆತಂಕ ಬೇಡ

Published:
Updated:

ನವದೆಹಲಿ: ‘ಮುಂಗಾರು ಮಳೆಯ ಪ್ರಮಾಣದಲ್ಲಿ ಈ ಬಾರಿ ಕೊರತೆಯಾಗಿದ್ದರೂ ಕೃಷಿ ಕ್ಷೇತ್ರವು ಆತಂಕಕ್ಕೆ ಒಳಗಾಗಬೇಕಾಗಿಲ್ಲ. ಮುಂಬರುವ ದಿನಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇರುವುದರಿಂದ ಕೃಷಿ ಚಟುವಟಿಕೆಗಳು ಚುರುಕುಗೊಳ್ಳಲಿವೆ’ ಎಂದು ಕೃಷಿ ಸಚಿವ ನರೇಂದ್ರಸಿಂಗ್‌ ತೋಮರ್‌ ಹೇಳಿದ್ದಾರೆ.

ಈ ಬಾರಿ ಮುಂಗಾರು ಮಳೆಯ ಪ್ರಮಾಣ ವಾಡಿಕೆಗಿಂತ ಶೇ 33ರಷ್ಟು ಕಡಿಮೆಯಾಗಿದೆ. ಇದರಿಂದಾಗಿ ಬಿತ್ತನೆಯ ಮೇಲೆ ಪರಿಣಾಮ ಉಂಟಾಗಿದೆ.

‘ಜುಲೈ ಮತ್ತು ಆಗಸ್ಟ್‌ ತಿಂಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಮಳೆ ಚುರುಕಾದರೆ ಭತ್ತ ಸೇರಿದಂತೆ ಎಲ್ಲಾ ಬೆಳೆಗಳ ಬಿತ್ತನೆ ಪ್ರಮಾಣ ಏರಿಕೆಯಾಗಲಿದೆ. ಅಧಿಸೂಚಿತ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುವ ವಿಚಾರದಲ್ಲೂ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ. ಇದು ಸಹ ಕೃಷಿ ಚಟುವಟಿಕೆ ಚುರುಕುಗೊಳ್ಳಲು ಸಹಕಾರಿಯಾಗಲಿದೆ’ ಎಂದು ಕೃಷಿ ಇಲಾಖೆ ಕಾರ್ಯದರ್ಶಿ ಸಂಜಯ್‌ ಅಗರ್ವಾಲ್‌ ತಿಳಿಸಿದ್ದಾರೆ.

ದೇಶದಲ್ಲಿ ಉಂಟಾಗಿರುವ ಮಳೆಯ ಕೊರತೆ ಹಾಗೂ ಬರ ಪರಿಸ್ಥಿತಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ತೋಮರ್‌, ‘ಬರ ಪರಿಸ್ಥಿತಿ ಭಾರತಕ್ಕೆ ಹೊಸದಲ್ಲ. ಆದರೆ ಈಗಿನ ಸ್ಥಿತಿಯಿಂದ ಆತಂಕಗೊಳ್ಳಬೇಕಾಗಿಲ್ಲ. ಸಚಿವಾಲಯವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ’ ಎಂದರು.

ಹವಾಮಾನ ಇಲಾಖೆಯ ನೈರುತ್ಯ ವಿಭಾಗವು ನೀಡಿರುವ ಜೂನ್‌ ತಿಂಗಳ ಅಂತ್ಯದವರೆಗಿನ ಅಂಕಿಅಂಶಗಳ ಪ್ರಕಾರ, ಈ ಭಾಗದ ಶೇ 78ರಷ್ಟು ಪ್ರದೇಶಗಳಲ್ಲಿ ಶೇ 33ರಷ್ಟು ಮಳೆಯ ಕೊರತೆ ಉಂಟಾಗಿದೆ. ಪರಿಣಾಮವಾಗಿ ಕಳೆದ ವಾರಾಂತ್ಯದವರೆಗೆ 146.61 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 162.07 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿತ್ತು ಎಂದು ಕೃಷಿ ಸಚಿವಾಲಯ ಹೇಳಿದೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !