ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿ ಜಾರಿ ತೀರ್ಮಾನಿಸಿಲ್ಲ: ಕೇಂದ್ರ ಸ್ಪಷ್ಟನೆ

Last Updated 4 ಫೆಬ್ರುವರಿ 2020, 16:39 IST
ಅಕ್ಷರ ಗಾತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರಕಾರ ದೇಶದಾದ್ಯಂತ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಜಾರಿಗೆ ತರಲಿದೆಯೇ ಎನ್ನುವ ಕುರಿತು ಕೇಂದ್ರ ಗೃಹ ಸಚಿವಾಲಯವು ಇಂದು ಸ್ಪಷ್ಟನೆ ನೀಡಿದೆ.

ಈ ಕುರಿತಂತೆ ಸಂಸತ್ತಿನಲ್ಲಿ ಲಿಖಿತ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವಾಲಯದ ರಾಜ್ಯ ಖಾತೆ ಸಚಿವ ನಿತ್ಯಾನಂದ ರಾಯ್, ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ)ಯನ್ನು ಜಾರಿ ಮಾಡುವ ಯೋಜನೆ ಸರ್ಕಾರದ ಮುಂದಿಲ್ಲ. ದೇಶದಾದ್ಯಂತ ಎನ್‌ಆರ್‌ಸಿ ಜಾರಿ ಬಗ್ಗೆ ಸರ್ಕಾರ ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಈ ಮೂಲಕ ಎನ್‌ಆರ್‌ಸಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸ್ಪಷ್ಟನೆ ನೀಡುವ ಪ್ರಯತ್ನವನ್ನು ಸರ್ಕಾರ ಮಾಡಿದೆ. ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಧರ್ಮಾಧಾರಿತವಾಗಿ ಭಾರತದ ಪೌರತ್ವ ನೀಡುವ ಕಾಯ್ದೆಯನ್ನು ಕಳೆದ ಡಿಸೆಂಬರ್‌ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. ಇದು ದೇಶದಾದ್ಯಂತ ತೀವ್ರ ವಿರೋಧಕ್ಕೆ ಕಾರಣವಾಗಿತ್ತು.

ಸಿಎಎ ಜಾರಿಯ ವಿಳಂಬದ ಹಿಂದೆ ಕಾಯ್ದೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಗಳು ಮತ್ತು ವಿರೋಧ ಪಕ್ಷಗಳು ಇವೆ ಎಂದು ಹೇಳಲಾಗಿದೆ.

ಹಲವು ರಾಜ್ಯಗಳಲ್ಲಿನ ಸಿಎಎ ಬಗ್ಗೆ ಇರುವ ವಿರೋಧದ ಕುರಿತು ಅರಿವಿದೆ. ಬಿಜೆಪಿ ಮತ್ತು ಬಿಜೆಪಿಯೇತರ ಆಡಳಿತವಿರುವ ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಜತೆಯಲ್ಲಿ ನಾವು ಸಂಪರ್ಕದಲ್ಲಿದ್ದೇವೆ ಮತ್ತು ಕಾಯ್ದೆ ಕುರಿತಂತೆ ಅವರಿಗಿರುವ ಭಯ ಹೋಗಲಾಡಿಸಲು ಮತ್ತು ಸರ್ಕಾರದ ನಿರ್ಧಾರದ ಕುರಿತು ವಿವರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯಿಂದಾಗಿ ಮುಸ್ಲಿಂ ಪ್ರಾಬಲ್ಯವಿರುವ ನೆರೆಯ ಮೂರು ರಾಷ್ಟ್ರಗಳಿಂದ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಬರುವ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವವನ್ನು ನೀಡುವುದಾಗಿದೆ. ಆದರೆ ಇದು ಧರ್ಮದ ನಡುವೆ ತಾರತಮ್ಯ ಎಸಗುತ್ತದೆ ಮತ್ತು ಸಂವಿಧಾನದ ಜಾತ್ಯತೀತ ಆಶಯಗಳಿಗೆ ವಿರುದ್ಧವಾಗಿದೆ ಎಂಬ ಟೀಕೆಗಳು ವ್ಯಕ್ತವಾಗಿವೆ.

ಎನ್‌ಪಿಆರ್‌: ದಾಖಲೆಗಳ ಸಂಗ್ರಹ ಇಲ್ಲ

ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ (ಎನ್‌ಪಿಆರ್‌) ಸಂಬಂಧಿಸಿ ಯಾವುದೇ ದಾಖಲೆಗಳನ್ನು ಸಂಗ್ರಹಿಸುವುದಿಲ್ಲ. ಆಧಾರ್‌ ಸಂಖ್ಯೆ ಕುರಿತ ಮಾಹಿತಿ ನೀಡುವುದು ಸಹ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

‘ಎನ್‌ಪಿಆರ್‌ ಸಿದ್ಧಪಡಿಸುವುದಕ್ಕೆ ಸಂಬಂಧಿಸಿದ ಕೆಲವು ರಾಜ್ಯಗಳು ತಮ್ಮ ಅಸಮಾಧಾನ– ಆತಂಕವನ್ನು ವ್ಯಕ್ತಪಡಿಸಿವೆ. ಈ ಅಂಶಗಳ ಕುರಿತಂತೆ ಆಯಾ ರಾಜ್ಯಗಳ ಜೊತೆ ಕೇಂದ್ರ ಚರ್ಚೆ ನಡೆಸುತ್ತಿದೆ. ಜನಸಂಖ್ಯೆ ಹಂಚಿಕೆ ಕುರಿತಂತೆ ಪ್ರತಿ ವ್ಯಕ್ತಿ, ಕುಟುಂಬದ ಮಾಹಿತಿಯನ್ನು ಪರಿಷ್ಕರಿಸಲಾಗುತ್ತದೆ‘ ಎಂದೂ ಅವರು ಹೇಳಿದರು. ಎನ್‌ಪಿಆರ್‌ಗಾಗಿ ಮಾಹಿತಿ ಸಂಗ್ರಹ ಕಾರ್ಯ ಏಪ್ರಿಲ್‌ 1ರಿಂದ ಸೆಪ್ಟೆಂಬರ್‌ 30ರ ವರೆಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT