ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟರ್ಕಿ, ಈಜಿಪ್ಟ್‌ನಿಂದ ಬರಲಿದೆ ಈರುಳ್ಳಿ

Last Updated 1 ಡಿಸೆಂಬರ್ 2019, 18:30 IST
ಅಕ್ಷರ ಗಾತ್ರ

ನವದೆಹಲಿ:ಈಜಿಪ್ಟ್ ಹಾಗೂ ಟರ್ಕಿಯ ಈರುಳ್ಳಿ ಇನ್ನೇನು ನಿಮ್ಮ ಅಡುಗೆ ಮನೆಗಳಲ್ಲಿ ಕಾಣಿಸಿಕೊಳ್ಳಲಿದೆ. ಈರುಳ್ಳಿ ಬೆಲೆ ಗಗನಕ್ಕೇರುವ ಕಾರಣ ವಿದೇಶದಿಂದ ಈರುಳ್ಳಿ ಆಮದು ಮಾಡಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

ಸರ್ಕಾರಿ ಸ್ವಾಮ್ಯದ ಮೆಟಲ್ಸ್ ಅಂಡ್ ಮಿನರಲ್ಸ್ ಟ್ರೇಡಿಂಗ್ ಕಾರ್ಪೊರೇಷನ್ ಮೂಲಕ ಟರ್ಕಿಯಿಂದ 11 ಸಾವಿರ ಟನ್ ಈರುಳ್ಳಿ ಆಮದು ಮಾಡಿಕೊಳ್ಳಲು ಸರ್ಕಾರ ಭಾನುವಾರ ನಿರ್ಧರಿಸಿದೆ. ಈಜಿಪ್ಟ್‌ನಿಂದ 6 ಸಾವಿರ ಟನ್ ಆಮದಿಗೆ ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ.

ಡಿಸೆಂಬರ್ ಮಧ್ಯಭಾಗದಿಂದ ಜನವರಿ ತಿಂಗಳ ಒಳಗೆ ವಿದೇಶದ ಈರುಳ್ಳಿ ಮುಂಬೈ ಬಂದರಿಗೆ ಬರುವ ಸಾಧ್ಯತೆಯಿದೆ. ಆಮದು ಮಾಡಿಕೊಳ್ಳಲಾದ ಪ್ರತಿ ಕೆ.ಜಿ ಈರುಳ್ಳಿ ₹50ರಿಂದ ₹60ಕ್ಕೆ ಲಭ್ಯವಾಗುವ ನಿರೀಕ್ಷೆಯಿದೆ.

ಕರ್ನಾಟಕ, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಲ್ಲಿ ಅಕಾಲಿಕ ಮಳೆಯಿಂದಾಗಿ ಮಾರುಕಟ್ಟೆಗೆ ಈರುಳ್ಳಿ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗಿಲ್ಲ. ಹೀಗಾಗಿದೆಹಲಿ ಸೇರಿದಂತೆ ಬಹುತೇಕ ಕಡೆಗಳಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ ಈರುಳ್ಳಿ ದರ ₹90 ದಾಟಿದೆ. ಬೆಂಗಳೂರಿನ ಹಲವು ಹೋಟೆಲ್‌ಗಳಲ್ಲಿ ‘ಈರುಳ್ಳಿ ದೋಸೆ’ ಲಭ್ಯವಿಲ್ಲ.

ಈರುಳ್ಳಿ ಬೆಲೆ ಮೇಲೆ ನಿಗಾ ವಹಿಸಲು ಹಾಗೂ ಅದು ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳುವ ಸಲುವಾಗಿ ಗೃಹಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,ಗ್ರಾಹಕ ವ್ಯವಹಾರ ಸಚಿವ ರಾಮ್‌ವಿಲಾಸ್ ಪಾಸ್ವಾನ್, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನೊಳಗೊಂಡ ಸಚಿವರ ತಂಡವನ್ನು ಕೇಂದ್ರ ಸರ್ಕಾರ ರಚಿಸಿದೆ.

ಸ್ಥಳೀಯ ಮಾರುಕಟ್ಟೆಯಲ್ಲಿ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈರುಳ್ಳಿ ರಫ್ತು ನಿಷೇಧಿಸಲಾಗಿದ್ದು, ದಾಸ್ತಾನು ಮಾಡಲು ಮಿತಿ ನಿಗದಿಪಡಿಸಲಾಗಿದೆ ಎಂದು ಸಚಿವ ರಾಮ್‌ವಿಲಾಸ್ ಪಾಸ್ವಾನ್ ಅವರು ಲೋಕಸಭೆಗೆ ಮಾಹಿತಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT