ಮಂಗಳವಾರ, ಫೆಬ್ರವರಿ 18, 2020
18 °C

ಸುಪ್ರೀಂ ಕೋರ್ಟ್‌ನಲ್ಲಿಂದು ಪೌರತ್ವ ಕಾನೂನು ವಿರುದ್ಧದ 144 ಅರ್ಜಿ ವಿಚಾರಣೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಸಲ್ಲಿಕೆಯಾಗಿರುವ 144 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದು, ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ.

ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಹೆಚ್ಚಿನವು ಕಾನೂನನ್ನು ಹಿಂಪಡೆಯಬೇಕೆಂದು ಒತ್ತಾಯಿಸಿವೆ. ನೂತನ ಸಿಎಎ ಕಾನೂನುಬಾಹಿರ ಮತ್ತು ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿದೆ. ಧರ್ಮದ ಆಧಾರದ ಮೇಲೆ ಪೌರತ್ವವನ್ನು ನೀಡುವುದರಿಂದ ಸಮಾನತೆಯ ಹಕ್ಕಿಗೆ ವಿರುದ್ಧವಾದ ಕಾನೂನು ಇದಾಗಿದೆ ಎಂದು ಅರ್ಜಿಗಳಲ್ಲಿ ವಾದಿಸಲಾಗಿದೆ. ಮತ್ತೆ ಕೆಲವು ಅರ್ಜಿಗಳು ಪೌರತ್ವ ಕಾನೂನನ್ನು ಸ್ಥಗಿತಗೊಳಿಸಬೇಕು ಎಂದು ಕೋರಿವೆ.

ಕಾಂಗ್ರೆಸ್, ಡಿಎಂಕೆ, ಸಿಪಿಐ, ಸಿಪಿಎಂ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ಅಸಾದುದ್ದೀನ್ ಓವೈಸಿಯ ಆಲ್ ಇಂಡಿಯಾ ಮಜಿಲಿಸ್‌ ಇ ಇತ್ತೇಹಾದುಲ್ ಮುಸ್ಲಿಮೀನ್ ಮತ್ತು ಕಮಲ್ ಹಾಸನ್ ಅವರ ಮಕ್ಕಳ್ ನೀದಿ ಮೈಯಂ ಪಕ್ಷಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

ಇದನ್ನೂ ಓದಿ: 

ಪೌರತ್ವ ತಿದ್ದುಪಡಿ ಕಾನೂನನ್ನು ಸಾಂವಿಧಾನಿಕ ಎಂದು ಘೋಷಿಸಬೇಕೆಂದು ಮನವಿ ಮಾಡಿದ್ದ ಅರ್ಜಿಯನ್ನು ಜನವರಿ 9 ರಂದು ನ್ಯಾಯಾಲಯ ನಿರಾಕರಿಸಿತ್ತು. ದೇಶವು 'ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದೆ' ಮತ್ತು 'ಈಗ ಶಾಂತಿ ಪಾಲನೆಗಾಗಿ ನಮ್ಮ ಪ್ರಯತ್ನವಿರಬೇಕು' ಎಂದು ಹೇಳಿತ್ತು. ಕಾನೂನಿನ ಸಿಂಧುತ್ವವನ್ನು ನಿರ್ಧರಿಸುವುದು ಈ ನ್ಯಾಯಾಲಯದ ಕೆಲಸವೇ ಹೊರತು ಅದನ್ನು ಸಾಂವಿಧಾನಿಕವೆಂದು ಘೋಷಿಸುವುದಲ್ಲ ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರಿದ್ದ ನ್ಯಾಯಪೀಠ ಹೇಳಿತ್ತು. 

ಈ ವಿಚಾರದ ಕುರಿತು ಪ್ರತಿಕ್ರಿಯಿಸುವಂತೆ ಕೋರಿ ನ್ಯಾಯಾಲಯ ಈಗಾಗಲೇ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್‌ಗಳಲ್ಲಿ ದಾಖಲಾದ ಇದೇ ರೀತಿಯ ಕೆಲವು ಪ್ರಕರಣಗಳನ್ನು ಸುಪ್ರೀಂ ಕೋರ್ಟ್‌ಗೆ ವರ್ಗಾಯಿಸುವಂತೆ ಕೇಂದ್ರವು ನ್ಯಾಯಾಲಯವನ್ನು ಕೋರಿದೆ.

ಪೌರತ್ವ ತಿದ್ದುಪಡಿ ಕಾಯ್ದೆಯು 2015ಕ್ಕೂ ಮುಂಚೆ ಧಾರ್ಮಿಕ ದೌರ್ಜನ್ಯಕ್ಕೊಳಗಾಗಿ ಪಾಕಿಸ್ತಾನ, ಅಫ್ಗಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಭಾರತಕ್ಕೆ ಬಂದ ಮುಸ್ಲಿಮೇತರ ಅಲ್ಪಸಂಖ್ಯಾತರಿಗೆ ದೇಶದ ಪೌರತ್ವವನ್ನು ನೀಡುವುದಾಗಿದೆ. ಆದರೆ ವಿರೋಧ ವ್ಯಕ್ತಪಡಿಸುತ್ತಿರುವವರು ಈ ಕಾನೂನು ಮುಸ್ಲಿಂ ವಿರೋಧಿ ಮತ್ತು ಸಂವಿಧಾನದ ಜಾತ್ಯತೀತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂದು ದೂರಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು