ಗುರುವಾರ , ಏಪ್ರಿಲ್ 2, 2020
19 °C

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಗೆ ಕ್ಷಣಗಣನೆ: ಪಕ್ಷದ ಕಚೇರಿಯಲ್ಲಿ ಮೋದಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಇಂದು (ಮಾರ್ಚ್ 10) ಮುಂಜಾನೆ ರಾಜೀನಾಮೆ ನೀಡಿದ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದೆ. ಪಕ್ಷದ ಪ್ರಧಾನ ಕಚೇರಿಗೆ ಪ್ರಧಾನಿ ನರೇಂದ್ರ ಮೋದಿ ಬಂದಿದ್ದಾರೆ.

ಮಾರ್ಚ್ 26ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಬಿಜೆಪಿ ಚುನಾವಣಾ ಸಮಿತಿ ಸಭೆಗೂ ಇಂದು ಸಮಯ ನಿಗದಿಯಾಗಿದೆ.

‘ಜ್ಯೋತಿರಾದಿತ್ಯ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಅವರ ಹೆಸರನ್ನು ಮಧ್ಯಪ್ರದೇಶದ ಅಭ್ಯರ್ಥಿಯಾಗಿ ಪಕ್ಷವು ಘೋಷಿಸುವ ಸಾಧ್ಯತೆಯಿದೆ’ ಎಂದು ಬಿಜೆಪಿ ಪದಾಧಿಕಾರಿಯೊಬ್ಬರು ಹೇಳಿದರು.

ಇಂದು ಮುಂಜಾನೆ ಸಿಂಧಿಯಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಭೇಟಿಯಾಗಿ, ಚರ್ಚಿಸಿದರು. ಮೋದಿ ನಿವಾಸಕ್ಕೆ ಸಿಂಧಿಯಾ ಪ್ರವೇಶಿಸುವಾಗ ಗೃಹ ಸಚಿವ ಅಮಿತ್ ಶಾ ಉಪಸ್ಥಿತರಿದ್ದರು. ಸುದೀರ್ಘ ಚರ್ಚೆ ನಡೆಸಿ, ಹೊರಬಂದ ಕೆಲವೇ ಸಮಯದಲ್ಲಿ ರಾಜೀನಾಮೆ ನಿರ್ಧಾರವನ್ನು ಸಿಂಧಿಯಾ ಪ್ರಕಟಿಸಿದರು.

ಮಧ್ಯಪ್ರದೇಶದಲ್ಲಿ ಈಗಾಗಲೇ 19 ಶಾಸಕರು ರಾಜ್ಯಪಾಲ ಲಾಲ್ಜಿ ಟಂಡನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನೂ ಮೂವರು ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ಈ ಬೆಳವಣಿಗೆಯಿಂದಾಗಿ ಮಧ್ಯಪ್ರದೇಶದಲ್ಲಿ ಕಮಲ್‌ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ.

‘ನನ್ನ ರಾಜ್ಯ ಮತ್ತು ದೇಶದ ಜನರ ಹಿತಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ನನ್ನ ಗುರಿ. ಆದರೆ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಆ ಕೆಲಸ ಮಾಡಲು ಆಗುತ್ತಿಲ್ಲ’ ಎಂದು ಹೇಳಿ, ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ರವಾನಿಸಿದ್ದರು.

ರಾಜೀನಾಮೆ ಸಲ್ಲಿಸಿದ ಕೆಲವೇ ನಿಮಿಷಗಳ ನಂತರ ಜ್ಯೋತಿರಾದಿತ್ಯ ಅವರನ್ನು ಸೋನಿಯಾ ಗಾಂಧಿ ‘ಪಕ್ಷ ವಿರೋಧಿ ಚಟುವಟಿಕೆ’ ಆರೋಪದಡಿ ಪಕ್ಷದಿಂದ ಹೊರಹಾಕಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು