ಬುಧವಾರ, ಸೆಪ್ಟೆಂಬರ್ 23, 2020
19 °C

ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧ | ಕೇರಳ ಸಿಎಂ ಜತೆ ರಾಹುಲ್‌ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ– 766ರಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧಿಸಿದ್ದರಿಂದ ಜನತೆಗೆ ಎದುರಾಗಿರುವ ಸಮಸ್ಯೆಗಳ ನಿವಾರಣೆ ಕುರಿತು ವಯನಾಡು ಸಂಸದ ರಾಹುಲ್‌ ಗಾಂಧಿ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಜೊತೆ ಚರ್ಚಿಸಿದ್ದಾರೆ.

ಮಂಗಳವಾರ ಇಲ್ಲಿನ ಕೇರಳ ಭವನದಲ್ಲಿ ವಿಜಯನ್‌ ಅವರನ್ನು ಭೇಟಿ ಮಾಡಿದ ರಾಹುಲ್‌, ವನ್ಯಜೀವಿಗಳ ಸುಗಮ ಸಂಚಾರಕ್ಕೆ ಅನುವಾಗುವಂತೆ ಈ ಹೆದ್ದಾರಿಯಲ್ಲಿ ಕೆಳಸೇತುವೆ ನಿರ್ಮಿ ಸಬೇಕಿದೆ. ಬೆಳಿಗ್ಗೆ 1ರಿಂದ 3ರವರೆಗಿನ ಅವಧಿಯಲ್ಲಿ ಅರಣ್ಯ ಇಲಾಖೆಯ ಬೆಂಗಾವಲಿನೊಂದಿಗೇ ವಾಹನ ಸಂಚಾರಕ್ಕೆ ಚಾಲನೆ ನೀಡಬೇಕಿದೆ ಎಂದು ಮನವಿ ಮಾಡಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಈ ಸಮಸ್ಯೆಯ ನಿವಾರಣೆಗೆ ಯತ್ನಿಸುವುದಾಗಿ ಮುಖ್ಯಮಂತ್ರಿಯವರು ಭರವಸೆ ನೀಡಿದ್ದಾರೆ ಎಂದು ಈ ಭೇಟಿಯ ನಂತರ ರಾಹುಲ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವನ್ಯಜೀವಿ ಮತ್ತು ಮಾನವ ಸಂಘರ್ಷ ಕೊನೆಗೊಳಿಸಲು ಯೋಜನೆಗಳ ಅನುಷ್ಠಾನ ಅಗತ್ಯವಿದೆ. ಈ ನಿಟ್ಟಿನಲ್ಲಿ ಅಧ್ಯಯನವನ್ನೂ ಕೈಗೆತ್ತಿಕೊಳ್ಳಬೇಕು. ಜನರ ಸಮಸ್ಯೆ ನಿವಾರಣೆ ಹಾಗೂ ಪರಿಸರ ಸಮತೋಲನ ಕಾಪಾ ಡುವತ್ತ ಚಿಂತನೆ ನಡೆಸಬೇಕು ಎಂದು ಮುಖ್ಯಮಂತ್ರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಕೋರಲಾಗಿದೆ ಎಂದು ಅವರು ಹೇಳಿದ್ದಾರೆ.

ದೇಶದ ಇತರ ರಾಷ್ಟ್ರೀಯ ಉದ್ಯಾನದ ಮೂಲಕ ಹಾದು ಹೋಗುವ ಹೆದ್ದಾರಿಗಳಲ್ಲಿ ಮೇಲ್ಸೇತುವೆ, ಕೆಳಸೇತುವೆ ನಿರ್ಮಿಸಿ ಸಮಸ್ಯೆ ಪರಿಹರಿಸಲಾಗಿದೆ ಎಂದು ಅವರು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರ ನಿಷೇಧವನ್ನು ಮುಂದುವರಿಸುವಂತೆ ಸುಪ್ರೀಂ ಕೋರ್ಟ್‌ ಕಳೆದ ಆಗಸ್ಟ್‌ 7ರಂದು ಆದೇಶ ನೀಡಿದೆ.

ಈ ಪ್ರದೇಶದಲ್ಲಿರುವ ವನ್ಯಜೀವಿಗಳಿಗೆ ವಾಹನ ಸಂಚಾರದಿಂದ ಎದುರಾಗುವ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ಶಾಶ್ವತ ಪರ್ಯಾಯ ಮಾರ್ಗ ಅನುಸರಿಸುವಂತೆ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು