ಬುಧವಾರ, ಜನವರಿ 27, 2021
28 °C

ಪೋಕ್ಸೊ ತಿದ್ದುಪಡಿ ಮಸೂದೆಗೆ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ : ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಹೆಚ್ಚಿನ ಶಿಕ್ಷೆ ವಿಧಿಸಲು ಅವಕಾಶ ಮಾಡಿಕೊಡುವ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಮಸೂದೆ–2019’ಕ್ಕೆ ರಾಜ್ಯಸಭೆಯು ಬುಧವಾರ ಅನುಮೋದನೆ ನೀಡಿತು. ಈಗ ಮಸೂದೆಯನ್ನು ಅನುಮೋದನೆಗಾಗಿ ಲೋಕಸಭೆಗೆ ಕಳುಹಿಸಲಾಗುತ್ತದೆ.

ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಮರಣದಂಡನೆ, ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕಠಿಣ ಶಿಕ್ಷೆಗಳು ಮತ್ತು ಮಕ್ಕಳನ್ನು ಲೈಂಗಿಕಚಿತ್ರಗಳಿಗೆ ಬಳಸಿಕೊಂಡ ಪ್ರಕರಣಗಳಲ್ಲಿ ಅಪರಾಧಿಗಳಿಗೆ ದಂಡ ಹಾಗೂ ಸೆರೆವಾಸವನ್ನು ವಿಧಿಸಲು ಈ ಮಸೂದೆಯು ಅವಕಾಶ ಮಾಡಿಕೊಡುತ್ತದೆ.‌

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ಈ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದರು. ‘ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಹೀಗಾಗಿ ಇಂತಹ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸುವ ಅವಶ್ಯಕತೆ ಇದೆ. ಹೀಗಾಗಿ ಈ ತಿದ್ದುಪಡಿ ಮಾಡಲಾಗುತ್ತಿದೆ’ ಎಂದು ಸ್ಮೃತಿ ಇರಾನಿ ಹೇಳಿದರು.

ಮಸೂದೆಯ ಮೇಲೆ ರಾಜ್ಯಸಭೆಯಲ್ಲಿ ಚರ್ಚೆ ನಡೆಯಿತು. ತಮ್ಮ ಮೇಲೆ ಬಾಲ್ಯದಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಟಿಎಂಸಿ ಸಂಸದ ಡೆರೆಕ್‌ ಒಬ್ರಿಯಾನ್ ರಾಜ್ಯಸಭೆಯಲ್ಲಿ ಮಾತನಾಡಿದರು. ಹಿರಿಯರು ಇಂತಹ ವಿಷಯಗಳ ಬಗ್ಗೆ ಮಾತನಾಡಿದಷ್ಟೂ, ಈ ಬಗ್ಗೆ ಮಾತನಾಡಲು ಮಕ್ಕಳಿಗೆ ಧೈರ್ಯ ಬರುತ್ತದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು