ಶಬರಿಮಲೆಗೆ ಪ್ರವೇಶ: ಮೇಲ್ಮನವಿ ಇಲ್ಲ

7
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಸ್ಪಷ್ಟನೆ

ಶಬರಿಮಲೆಗೆ ಪ್ರವೇಶ: ಮೇಲ್ಮನವಿ ಇಲ್ಲ

Published:
Updated:

ತಿರುವನಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ನಿಷೇಧ ರದ್ದುಪಡಿಸಿರುವ ಸುಪ್ರೀಂ ಕೋರ್ಟ್‌ ತೀರ್ಪು ಪ್ರಶ್ನಿಸಿ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಕೇರಳ ಸರ್ಕಾರ ಮತ್ತು ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ) ಸ್ಪಷ್ಟಪಡಿಸಿವೆ.

‘ಇದೊಂದು ಗಂಭೀರವಾದ ವಿಷಯ. ಯಾವುದೇ ರೀತಿ ರಾಜಿ ಮಾಡಿಕೊಳ್ಳದೆ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸುವುದು ಸರ್ಕಾರದ ಜವಾಬ್ದಾರಿ. ಶಬರಿಮಲೆಗೆ ಭೇಟಿ ನೀಡುವ ಮಹಿಳೆಯರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು’ ಎಂದು  ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ನ್ಯಾಯಾಲಯ ಆದೇಶ ನೀಡಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಶಬರಿಮಲೆಗೆ ಭೇಟಿ ನೀಡುವುದಿಲ್ಲ ಎಂದು ಟಿಡಿಬಿ ಅಧ್ಯಕ್ಷ ಎ. ಪದ್ಮಕುಮಾರ್‌ ಅವರ ಹೇಳಿಕೆಗೂ ಪಿಣರಾಯಿ ಆಕ್ಷೇಪ ವ್ಯಕ್ತಪಡಿಸಿದರು.

‘ಎಲ್ಲ ಅಂಶಗಳನ್ನು ಪರಿಗಣಿಸಿಯೇ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ನಾಗರಿಕರು ಕಾನೂನಿಗೆ ಗೌರವ ನೀಡಬೇಕು. ಮಹಿಳೆಯರು ಶಬರಿಮಲೆಗೆ ಹೋಗುವುದನ್ನು ತಡೆಯುವ ಹಕ್ಕು ಯಾರಿಗೂ ಇಲ್ಲ’ ಎಂದು ತಿಳಿಸಿದರು.

ಟಿಡಿಬಿ ಸಭೆ ಬಳಿಕ ಮಾತನಾಡಿದ ಟಿಡಿಬಿ ಅಧ್ಯಕ್ಷ ಎ. ಪದ್ಮಕುಮಾರ್‌, ‘ಪುನರ್‌ಪರಿಶೀಲನಾ ಅರ್ಜಿಯನ್ನು ಮಂಡಳಿ ಸಲ್ಲಿಸುವುದಿಲ್ಲ. ಶಬರಿಮಲೆ, ಪಂಪಾ ಮತ್ತು ನಿಲಕ್ಕಲ್‌ನಲ್ಲಿ ಮಹಿಳೆಯರಿಗೆ ಸೌಲಭ್ಯಗಳನ್ನು ಕಲ್ಪಿಸಲು ಸಭೆಯಲ್ಲಿ ಚರ್ಚಿಸಲಾಯಿತು’ ಎಂದು ತಿಳಿಸಿದರು.

ಕಾಂಗ್ರೆಸ್‌ ಮತ್ತು ಬಿಜೆಪಿ ಮಾತ್ರ ದೇವಾಲಯದಲ್ಲಿ ಯಥಾಸ್ಥಿತಿ ಕಾಪಾಡಿಕೊಳ್ಳಲು ಸುಪ್ರೀಂ ಕೋರ್ಟ್‌ನಲ್ಲಿ ಪುನರ್‌ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿವೆ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !