ಗುಂಪುದಾಳಿ ತಡೆಗೆ ವಿಫಲ: ರಾಜ್ಯಗಳ ವಿರುದ್ಧ ‘ಸುಪ್ರೀಂ’ ಗರಂ

7
ದೊಂಬಿ ಹತ್ಯೆ ತಡೆಯಲು ವಿಫಲ: ರಾಜ್ಯ ಸರ್ಕಾರಗಳ ವಿರುದ್ಧ ಅಸಮಾಧಾನ

ಗುಂಪುದಾಳಿ ತಡೆಗೆ ವಿಫಲ: ರಾಜ್ಯಗಳ ವಿರುದ್ಧ ‘ಸುಪ್ರೀಂ’ ಗರಂ

Published:
Updated:

ನವದೆಹಲಿ: ದೇಶದಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಗುಂಪುದಾಳಿ ಮತ್ತು ದೊಂಬಿ ಹತ್ಯೆಗಳ ತಡೆಗೆ ಕ್ರಮ ಕೈಗೊಳ್ಳದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

ಗುಂಪುದಾಳಿ ಮತ್ತು ದೊಂಬಿ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೊನೆಯ ಅವಕಾಶ ನೀಡುವುದಾಗಿ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠವು ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.

ಈ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ವಾರದ ಒಳಗಾಗಿ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಪೀಠ ತಾಕೀತು ಮಾಡಿದೆ. ಇಲ್ಲದಿದ್ದರೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಗೃಹ ಕಾರ್ಯದರ್ಶಿಗಳು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಇನ್ನೂ ವರದಿ ಸಲ್ಲಿಸದ 18 ರಾಜ್ಯಗಳು: ಗೋರಕ್ಷಣೆ ಹೆಸರಿನಲ್ಲಿ ಹೆಚ್ಚಿರುವ ಗುಂಪುದಾಳಿ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮತ್ತು ಸೂಕ್ತ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಜುಲೈ 17ರಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

29 ರಾಜ್ಯಗಳ ಪೈಕಿ ಇಲ್ಲಿಯವರೆಗೆ 11 ರಾಜ್ಯಗಳು ಮತ್ತು ಏಳು ಕೇಂದ್ರಾಡಳಿತ ಪ್ರದೇಶಗಳು ಮಾತ್ರ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸಿವೆ.

ಗುಂಪುದಾಳಿ ತಡೆಗೆ ಸೂಕ್ತ ಕಾನೂನು ರೂಪಿಸಲು ಸಚಿವರ ಉನ್ನತಾಧಿಕಾರ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪ್ರತಿನಿಧಿ ಅಟಾರ್ನಿ ಜನರಲ್‌ ಕೆ.ಕೆ. ವೇಣುಗೋಪಾಲ್‌ ಅವರು ನ್ಯಾಯಾಲಯಕ್ಕೆ ತಿಳಿಸಿದರು.

ಸುಪ್ರೀಂ ಕೋರ್ಟ್ ಆದೇಶ ಪಾಲಿಸದ ರಾಜಸ್ಥಾನ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್‌ ಮುಖ್ಯಸ್ಥರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಕೋರಿ ಕಾಂಗ್ರೆಸ್‌ ಮುಖಂಡ ತೆಹ್ಸೀನ್‌ ಪೂನಾವಾಲಾ ಅರ್ಜಿ ಸಲ್ಲಿಸಿದ್ದರು.

ಹೈನುಗಾರಿಕೆ ನಡೆಸುತ್ತಿದ್ದ ರಾಜಸ್ಥಾನದ ರೈತ ರಕ್ಬರ್‌ ಖಾನ್ ಎಂಬುವರನ್ನು ಗೋರಕ್ಷಕರ ಗುಂಪೊಂದು ಜುಲೈ 20ರಂದು ಅಲ್ವರ್‌ದಲ್ಲಿ ಹತ್ಯೆ ಮಾಡಿತ್ತು. ಆ ಪ್ರಕರಣವನ್ನು ಪೂನಾವಾಲಾ ಅವರು ಅರ್ಜಿಯಲ್ಲಿ ಪ್ರಸ್ತಾಪಿಸಿದ್ದಾರೆ.

ಈ ಕುರಿತು ವಾರದ ಒಳಗಾಗಿ ವರದಿ ಸಲ್ಲಿಸುವಂತೆ ಪೀಠ, ರಾಜಸ್ಥಾನ ಸರ್ಕಾರಕ್ಕೂ ಸೂಚಿಸಿದೆ.

ಎಸ್‌ಸಿ/ಎಸ್‌ಟಿ ಕಾಯ್ದೆ ತಿದ್ದುಪಡಿ: ತಡೆಗೆ ಸುಪ್ರೀಂ ಕೋರ್ಟ್‌ ನಕಾರ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಗೆ (ಎಸ್‌ಸಿ/ಎಸ್‌ಟಿ ಕಾಯ್ದೆ) ಇತ್ತೀಚೆಗೆ ತಂದಿರುವ ತಿದ್ದುಪಡಿಗಳಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ವಿರುದ್ಧ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯನ್ನು ತಕ್ಷಣವೇ ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಈ ತೀರ್ಪನ್ನು ರದ್ದು ಮಾಡುವುದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಸುಪ್ರೀಂ ಕೋರ್ಟ್‌ ತೀರ್ಪಿನ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆದ ಬಳಿಕ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. 

‘ತಿದ್ದುಪಡಿಯು ಈಗ ಕಾಯ್ದೆಯ ಭಾಗವಾಗಿದೆ. ಈ ಹಂತದಲ್ಲಿ ತಡೆ ನೀಡುವುದು ಸಾಧ್ಯವಿಲ್ಲ’ ಎಂದು ಕೋರ್ಟ್‌ ಹೇಳಿದೆ. 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !