ಭಾನುವಾರ, ಸೆಪ್ಟೆಂಬರ್ 15, 2019
30 °C

ಉತ್ತರಾಖಂಡದಲ್ಲಿ ಮೇಘಸ್ಫೋಟ, ಪ್ರವಾಹ: ಮನೆಗಳಿಗೆ ಹಾನಿ, ಹಲವರು ನಾಪತ್ತೆ

Published:
Updated:

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದ ಮೇಘಸ್ಫೋಟ, ಪ್ರವಾಹದಿಂದ ಅನೇಕ ಮನೆಗಳಿಗೆ ಹಾನಿಯಾಗಿದ್ದು ಹಲವು ಜನ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ.

‘ಮಾಕುಡಿ ಮತ್ತು ದಿಗೊಲಿ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು ಕೆಲವು ಮನೆಗಳಿಗೆ ಹಾನಿಯಾಗಿದೆ. ಜನರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಇಂಡೊ–ಟಿಬೆಟನ್ ಬಾರ್ಡರ್ ಪೊಲೀಸ್ (ಐಟಿಬಿಪಿ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ’ ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಚೌಹಾಣ್ ತಿಳಿಸಿದ್ದಾರೆ.

ದಿಗೊಲಿಯಲ್ಲಿ ಭಾರಿ ಪ್ರವಾಹ ಉಂಟಾಗಿದ್ದು 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ. ಅನೇಕ ಮರಗಳು ಧರೆಗುರುಳಿವೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಭಾರಿ ಮಳೆಯಿಂದಾಗಿ ಉತ್ತರಕಾಶಿಯ ಟೌನ್ಸ್‌ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕುಸಿತವೂ ಸಂಭವಿಸಿದೆ.

Post Comments (+)