ಉತ್ತರ ಪ್ರದೇಶ :ಎಸ್‌ಪಿ ಬಿಎಸ್‌ಪಿ ಮಹಾಮೈತ್ರಿ ಇಂದು ಘೋಷಣೆ

7

ಉತ್ತರ ಪ್ರದೇಶ :ಎಸ್‌ಪಿ ಬಿಎಸ್‌ಪಿ ಮಹಾಮೈತ್ರಿ ಇಂದು ಘೋಷಣೆ

Published:
Updated:

ಲಖನೌ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ನಡುವಣ ಬಹುನಿರೀಕ್ಷಿತ ಮಹಾಮೈತ್ರಿ ಶನಿವಾರ ಅಧಿಕೃತವಾಗಿ ಘೋಷಣೆಯಾಗುವ ಸಾಧ್ಯತೆ ಇದೆ. 

ಎಸ್‌ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮತ್ತು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ಮಾಧ್ಯಮಗೋಷ್ಠಿ ನಡೆಸಲಿದ್ದು ಅಲ್ಲಿ ಮೈತ್ರಿಯ ವಿವರಗಳನ್ನು ಪ್ರಕಟಿಸಲಿದ್ದಾರೆ ಎಂದು ತಿಳಿದು ಬಂದಿದೆ. 

ಎರಡೂ ಪಕ್ಷಗಳ ನಡುವಣ ಸೀಟು ಹಂಚಿಕೆ ಬಗ್ಗೆ ಅಂತಿಮ ನಿರ್ಧಾರ ಇನ್ನೂ ಆಗಿಲ್ಲ. ಜನವರಿ 15ರಂದು ಮಾಯಾವತಿ ಅವರು ಹುಟ್ಟಿದ ದಿನ. ಹಾಗಾಗಿ ಅಂದೇ ಮೈತ್ರಿಯ ಅಧಿಕೃತ ಘೋಷಣೆ ಆಗಬಹುದು ಎಂದು ಹೇಳಲಾಗಿತ್ತು. ಆದರೆ, ಮೇಲ್ಜಾತಿಯ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ದಿಢೀರ್‌ ತೆಗೆದುಕೊಂಡ ಕಾರಣ ಮೈತ್ರಿಯನ್ನು ಬೇಗನೆ ಘೋಷಿಸುವ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ಹೇಳಿವೆ. 

ಬದ್ಧ ಪ್ರತಿಸ್ಪರ್ಧಿಗಳಾದ ಎಸ್‌ಪಿ ಮತ್ತು ಬಿಎಸ್‌ಪಿ ನಡುವಣ ಮೈತ್ರಿಯು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಸ್ಪರ್ಧೆ ಒಡ್ಡಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಲೋಕಸಭೆಯ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಎಸ್‌ಪಿ–ಬಿಎಸ್‌ಪಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದವು. ಈ ಮೂರೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಸೋಲಾಗಿತ್ತು. 

2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟವು ಇಲ್ಲಿನ 80 ಕ್ಷೇತ್ರಗಳ ಪೈಕಿ 73ರಲ್ಲಿ ಗೆಲುವು ಸಾಧಿಸಿತ್ತು. ಎಸ್‌ಪಿ ಐದು ಕ್ಷೇತ್ರಗಳಲ್ಲಿ ಗೆದ್ದರೆ ಬಿಎಸ್‌ಪಿಗೆ ಒಂದೂ ಕ್ಷೇತ್ರದಲ್ಲಿ ಗೆಲ್ಲಲು ಸಾಧ್ಯವಾಗಿರಲಿಲ್ಲ. ಕಾಂಗ್ರೆಸ್‌ ಪಕ್ಷವು ಅಮೇಠಿ ಮತ್ತು ರಾಯಬರೇಲಿಯಲ್ಲಿ ಗೆಲ್ಲುವಲ್ಲಿ ಮಾತ್ರ ಯಶಸ್ವಿಯಾಗಿತ್ತು.   

ಆರ್‌ಎಲ್‌ಡಿ ಅತೃಪ್ತಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಎರಡು ಕ್ಷೇತ್ರಗಳನ್ನು ಬಿಟ್ಟುಕೊಡುವ ಅಖಿಲೇಶ್‌–ಮಾಯಾವತಿ ನಿರ್ಧಾರ ಆರ್‌ಎಲ್‌ಡಿಯ ಅತೃಪ್ತಿಗೆ ಕಾರಣವಾಗಿದೆ. ರಾಜ್ಯದ ಪಶ್ಚಿಮ ಭಾಗದಲ್ಲಿರುವ ಜಾಟ್‌ ಸಮುದಾಯದ ಮೇಲೆ ಪಕ್ಷವು ಪ್ರಭಾವ ಹೊಂದಿದೆ. ಹಾಗಾಗಿ ಐದು ಕ್ಷೇತ್ರಗಳನ್ನು ಬಿಟ್ಟುಕೊಡಬೇಕು ಎಂದು ಆರ್‌ಎಲ್‌ಡಿ ಬೇಡಿಕೆ ಇರಿಸಿತ್ತು. 

ಎಸ್‌ಪಿ ಮತ್ತು ಬಿಎಸ್‌ಪಿ ನಡೆಸಲಿರುವ ಜಂಟಿ ಮಾಧ್ಯಮಗೋಷ್ಠಿಗೂ ಆರ್‌ಎಲ್‌ಡಿ ಅಧ್ಯಕ್ಷ ಅಜಿತ್‌ ಸಿಂಗ್‌ ಅವರನ್ನು ಆಹ್ವಾನಿಸಿಲ್ಲ. ಈ ಬಗ್ಗೆ ಅಜಿತ್‌ ಅವರು ಆಕ್ರೋಶವನ್ನೂ ವ್ಯಕ್ತಪಡಿಸಿದ್ದಾರೆ. ಈ ಮಾಧ್ಯಮಗೋಷ್ಠಿಯ ಬಗ್ಗೆ ತಮಗೆ ಗೊತ್ತೇ ಇಲ್ಲ ಎಂದು ಅವರು ಹೇಳಿದ್ದಾರೆ. ಸೀಟು ಹಂಚಿಕೆ ಅಂತಿಮಗೊಂಡಿಲ್ಲ ಎಂದೂ ಅವರು ಹೇಳಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !