ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಸುಪ್ರೀಂ ಕೋರ್ಟ್, ಮುಖ್ಯನ್ಯಾಯಾಧೀಶರ ಕಚೇರಿ ಒಳಪಡುತ್ತದೆ ಎಂದು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಬುಧವಾರ ತೀರ್ಪು ನೀಡಿದ್ದು, ಈ ಸಂಬಂಧ 2010ರಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಅವರ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಡಿ.ವೈ ಚಂದ್ರಚೂಡ್, ದೀಪಕ್ ಗುಪ್ತಾ, ಸಂಜೀವ್ ಖನ್ನಾ ಅವರಿದ್ದ ಸಾಂವಿಧಾನಿಕ ಪೀಠ ಏಕಾಭಿಪ್ರಾಯ ವ್ಯಕ್ತಪಡಿಸಿದ್ದು, ಸುಪ್ರೀಂಕೋರ್ಟ್ ಕೂಡ ಸಾರ್ವಜನಿಕ ಸಂಸ್ಥೆಯಾಗಿದ್ದು, ಇದೂ ಕೂಡ ಮಾಹಿತಿ ಹಕ್ಕು ಕಾಯ್ದೆ ವ್ಯಾಪ್ತಿಗೆ ಒಳಪಡುತ್ತದೆ ಎಂದು ಅಭಿಪ್ರಾಯಪಟ್ಟಿದೆ.
ನ್ಯಾಯಾಂಗದ ಸ್ವಾತಂತ್ರ್ಯ ಹಾಗೂ ಹೊಣೆಗಾರಿಕೆ ಕೈಯಿಂದ ಕೈಗೆ ಬದಲಾಗುತ್ತಾ ಹೋಗುತ್ತದೆ ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ತಮ್ಮ ತೀರ್ಪಿನಲ್ಲಿ ಮಾಹಿತಿ ಹಕ್ಕು ಕಾಯ್ದೆಯನ್ನು ನ್ಯಾಯಾಧೀಶರ ವಿರುದ್ಧ ಬಳಸುವ ಅಸ್ತ್ರವನ್ನಾಗಿ ಮಾಡಿಕೊಳ್ಳಬಾರದು. ಮಾಹಿತಿ ಹಕ್ಕು ಕಾಯ್ದೆಯ ಸೆಕ್ಷನ್ 8(1)(j)ನಲ್ಲಿ ನ್ಯಾಯಾಧೀಶರ ಖಾಸಗಿಹಕ್ಕುಗಳ ವಿನಾಯಿತಿ ಬಗ್ಗೆಯೂ ವಿವರಣೆ ನೀಡಲಾಗಿದೆ ಎಂದು ಹೇಳಿದ್ದಾರೆ.
ನ್ಯಾಯಮೂರ್ತಿ ಚಂದ್ರಚೂಡ ಅವರು ಪ್ರತ್ಯೇಕವಾಗಿ ಬರೆದ ತೀರ್ಪಿನಲ್ಲಿ, ನ್ಯಾಯಾಂಗದ ಸ್ವಾತಂತ್ರ್ಯ ಎಂದರೆ ಅದರ ಅರ್ಥ ಕಾನೂನಿನ ಚೌಕಟ್ಟಿನಿಂದ ನ್ಯಾಯಾಧೀಶರನ್ನುಹೊರಗಿಡುವುದಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ ಐವರು ನ್ಯಾಯಾಧೀಶರಪ್ರತ್ಯೇಕ ತೀರ್ಪುಗಳನ್ನು ಪಡೆದು ನಂತರ ಒಟ್ಟಾರೆ ಅಭಿಪ್ರಾಯದಂತೆ ತೀರ್ಪು ಪ್ರಕಟಿಸಲಾಗಿದೆ.
ಇದನ್ನೂ ಓದಿ:ಮಾಹಿತಿ ಹಕ್ಕು ಕಾಯ್ದೆ ದುರ್ಬಲಗೊಳಿಸುವುದು ಬೇಡ
2010ರಲ್ಲಿ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿ ಹಾಗೂ ಸುಪ್ರೀಂ ಕೋರ್ಟ್‌ನ ಕೇಂದ್ರ ಮಾಹಿತಿ ಹಕ್ಕು ಅಧಿಕಾರಿ ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಪೀಠ, ದೆಹಲಿ ಹೈಕೋರ್ಟ್ ನೀಡಿದ್ದ ಸುಪ್ರೀಂ ಕೋರ್ಟ್ ಹಾಗೂ ಮುಖ್ಯ ನ್ಯಾಯಾಧೀಶರ ಕಚೇರಿ 'ಸಾರ್ವಜನಿಕ ಪ್ರಾಧಿಕಾರಿಗಳು' ಎಂಬ ವಾದವನ್ನು ಎತ್ತಿಹಿಡಿದಿದೆ.
ಮಾಹಿತಿ ಹಕ್ಕು ಹೋರಾಟಗಾರ ಎಸ್.ಸಿ.ಅಗರವಾಲ್ ಈ ಪ್ರಕರಣದಲ್ಲಿ ಪ್ರತಿವಾದಿಯಾಗಿದ್ದು, ಇವರ ಪರ ವಕೀಲ ಪ್ರಶಾಂತ್ ಭೂಷಣ್ ಸುಪ್ರೀಂ ಕೋರ್ಟ್ ಹಾಗೂ ಅವರ ಕಚೇರಿ ಕೂಡ ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಒಳಪಡಬೇಕು ಎಂದು ವಾದ ಮಂಡಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.