ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಮಸೂದೆಗೆ ಸಂಪುಟ ಅನುಮೋದನೆ

ಪೌರತ್ವ ತಿದ್ದುಪಡಿ ಮಸೂದೆಗೆ ಈಶಾನ್ಯ ರಾಜ್ಯಗಳ ಜನರಿಂದ ವಿರೋಧ
Last Updated 7 ಜನವರಿ 2019, 13:23 IST
ಅಕ್ಷರ ಗಾತ್ರ

ನವದೆಹಲಿ: ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ‘ಪೌರತ್ವ (ತಿದ್ದುಪಡಿ) ಮಸೂದೆ’ಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ. ಮಂಗಳವಾರ ಈ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಿದ್ದುಪಡಿ ಮಸೂದೆ ಕುರಿತು ಜಂಟಿ ಸಂಸದೀಯ ಸಮಿತಿ ಸೋಮವಾರ ಲೋಕಸಭೆಯಲ್ಲಿ ವರದಿ ಮಂಡಿಸಿದ ಕೆಲವೇ ತಾಸುಗಳಲ್ಲಿ ಈ ಬೆಳವಣಿಗೆಯಾಗಿದೆ. 2016ರಲ್ಲಿ ಮೊದಲಿಗೆ ಸಂಸತ್ತಿನಲ್ಲಿ ಈ ತಿದ್ದುಪಡಿ ಮಸೂದೆ ಮಂಡಿಸಲಾಗಿತ್ತು.

ಅಸ್ಸಾಂ ಹಾಗೂ ಈಶಾನ್ಯ ರಾಜ್ಯಗಳ ಜನರು ಈ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

1985ರ ಅಸ್ಸಾಂ ಒಪ್ಪಂದದ ಅನುಸಾರ, 1971ರ ಮಾರ್ಚ್ 24ರ ಬಳಿಕ ವಲಸೆ ಬಂದ ಯಾವುದೇ ಧರ್ಮದವರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುತ್ತದೆ. ಆದರೆ ಈಗ ತಿದ್ದುಪಡಿ ಮಾಡಲಾಗಿರುವ ಮಸೂದೆ ಜಾರಿಗೆ ಬಂದರೆ, ಅಸ್ಸಾಂ ಒಪ್ಪಂದ ಅರ್ಥ ಕಳೆದುಕೊಳ್ಳಲಿದೆ ಎನ್ನುವುದು ಈಶಾನ್ಯ ರಾಜ್ಯಗಳ ಜನರ ವಾದ. ಮೇಘಾಲಯ ಹಾಗೂ ಮಿಜೋರಾಂ ಸರ್ಕಾರಗಳು ಸಹ ಈ ತಿದ್ದುಪಡಿ ಮಸೂದೆ ವಿರೋಧಿಸಿ ನಿರ್ಣಯ ಅಂಗೀಕರಿಸಿವೆ.

ತಿದ್ದುಪಡಿ ಏನು?

ಪ್ರಸ್ತುತ ಪೌರತ್ವ ಕಾಯ್ದೆ 1955ರ ಅನುಸಾರ, ಅಫ್ಗಾನಿಸ್ಥಾನ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದು, ಸಿಖ್‌, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತ ಧರ್ಮೀಯ ವಲಸಿಗರು ಭಾರತದಲ್ಲಿ 12 ಅಥವಾ ಅದಕ್ಕಿಂತ ಹೆಚ್ಚು ವರ್ಷ ವಾಸವಿದ್ದಲ್ಲಿ ಮಾತ್ರ ಭಾರತೀಯ ಪೌರತ್ವ ಪಡೆಯಲು ಅರ್ಹರಾಗಿದ್ದಾರೆ.

ಆದರೆ ಈ ಕಾಯ್ದೆಗೆ ತಿದ್ದುಪಡಿ ಮಾಡಿ ರೂಪಿಸಲಾಗಿರುವ ಮಸೂದೆ ಅಡಿಯಲ್ಲಿ, ಇವರೆಲ್ಲಾ ಭಾರತದಲ್ಲಿ 6 ವರ್ಷ ವಾಸವಿದ್ದರೆ ಅವರು ಇಲ್ಲಿನ ಪೌರತ್ವ ಪಡೆಯಲು ಅರ್ಹರಾಗುತ್ತಾರೆ. ಯಾವುದೇ ಸೂಕ್ತ ದಾಖಲೆಗಳು ಇಲ್ಲದಿದ್ದರೂ ಅವರು ಪೌರತ್ವಕ್ಕೆ ಅರ್ಜಿ ಸಲ್ಲಿಸಬಹುದು.

‘ವಿಭಜನೆಯ ತಪ್ಪಿಗೆ ಪರಿಹಾರ’

ಪೌರತ್ವ (ತಿದ್ದುಪಡಿ) ಮಸೂದೆ ಅಂಗೀಕಾರಗೊಳಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಶುಕ್ರವಾರ ಅಸ್ಸಾಂನ ಸಿಲ್ಚಾರ್‌ನಲ್ಲಿ ಪುನರುಚ್ಚರಿಸಿದ್ದರು.

‘ಭಾರತ ವಿಭಜನೆಯಾಗುವ ಸಂದರ್ಭ ಆಗಿರುವ ತಪ್ಪಿಗೆ ಪೌರತ್ವ (ತಿದ್ದುಪಡಿ) ಮಸೂದೆ ಮೂಲಕ ಪರಿಹಾರ ದೊರಕಿಸಲಾಗುತ್ತದೆ. ವಿಭಜನೆಯಿಂದ ಸಂತ್ರಸ್ತರಾದ ಎಲ್ಲರಿಗೂ ಭಾರತ ನ್ಯಾಯ ದೊರಕಿಸುತ್ತದೆ. ಶೀಘ್ರ ಈ ಮಸೂದೆ ಸಂಸತ್ತಿನಲ್ಲಿ ಅಂಗೀಕಾರಗೊಳ್ಳುವ ಭರವಸೆ ಇದೆ’ ಎಂದು ಅವರು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT