ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 10ರ ಮೀಸಲು; ವರ್ಗೀಕರಣ ಅಗತ್ಯ: ಎಚ್. ಕಾಂತರಾಜ ಪ್ರತಿಪಾದನೆ

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್. ಕಾಂತರಾಜ ಪ್ರತಿಪಾದನೆ
Last Updated 14 ಜುಲೈ 2019, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ, ಜಾರಿಗೂ ಮುನ್ನ ಒಳ ವರ್ಗೀಕರಣ ಮಾಡಬೇಕು’ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಎಚ್. ಕಾಂತರಾಜ ಪ್ರತಿಪಾದಿಸಿದರು.

ದೇವರಾಜ ಅರಸು ಸಂಶೋಧನಾ ಸಂಸ್ಥೆ,ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ‘ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10 ಮೀಸಲಾತಿಯಿಂದ ಆಗುವ ಪರಿಣಾಮಗಳು’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

ಸಾಮಾಜಿಕ ಅಸಮಾನತೆಯನ್ನು ಸರಿಪಡಿಸಲು ಮೀಸಲಾತಿಯನ್ನು ಸಂವಿಧಾನದಲ್ಲೇ ನೀಡಲಾಗಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವುದು ಸಂವಿಧಾನ ವಿರೋಧಿ ಕೆಲಸ. ಈ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿದ್ದು, ಆದಷ್ಟು ಬೇಗ ತೀರ್ಪು ನೀಡಿದರೆ ಗೊಂದಲ ಪರಿಹಾರವಾಗಲಿದೆ ಎಂದರು.

‘ಈ ನಡುವೆ ಶೇ 10ರಷ್ಟು ಮೀಸಲಾತಿ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಯತ್ನ ನಡೆಸುತ್ತಿವೆ. ಕೇಂದ್ರದ ಒಬಿಸಿ ಪಟ್ಟಿಯಲ್ಲಿ ರಾಜ್ಯದ 199 ಜಾತಿ ಮತ್ತು ಉಪಜಾತಿಗಳಿವೆ. ರಾಜ್ಯ ಸರ್ಕಾರದ ಒಬಿಸಿ ಪಟ್ಟಿಯಲ್ಲಿ 208 ಜಾತಿ ಮತ್ತು ಉಪಜಾತಿಗಳಿವೆ. ರಾಜ್ಯದ ಒಬಿಸಿ ಪಟ್ಟಿಯಲ್ಲಿ ಸೇರಿದ್ದರೂ, ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಇಲ್ಲದ ಒಂದೇ ಕಾರಣಕ್ಕೆ ಕೆಲವನ್ನು ಶೇ 10ರ ಮೀಸಲಾತಿ ಪಟ್ಟಿಗೆ ಸೇರಿಸಲಾಗುತ್ತಿದೆ. ಇದರಿಂದ ಹಿಂದುಳಿದ ಜಾತಿಗಳಿಗೆ ಅನ್ಯಾಯವಾಗಲಿದೆ’ ಎಂದರು.

‘ಸಮಾನಾಂತರ ಜಾತಿಗಳ ನಡುವೆ ಮೀಸಲಾತಿಗೆ ಸ್ಪರ್ಧೆ ಇರಬೇಕೇ ಹೊರತು, ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಗಳ ಜತೆ ಕೆಳಜಾತಿಗಳು ಪೈಪೋಟಿ ನಡೆಸಲು ಸಾಧ್ಯವೇ’ ಎಂದು ಪ್ರಶ್ನಿಸಿದರು.

‘ಶೇ 10ರಷ್ಟು ಮೀಸಲಾತಿ ಜಾರಿ ಮಾಡುವ ಮುನ್ನ ಅದರೊಳಗೆ ಎಷ್ಟು ಜಾತಿಗಳು ಸೇರುತ್ತವೆ,ಅವರ ಜನಸಂಖ್ಯೆ ಎಷ್ಟಿದೆ ಎಂಬುದರ ನಿಖರ ಅಂಕಿ–ಅಂಶವನ್ನು ಕೇಂದ್ರ ಸರ್ಕಾರ ಪಡೆದುಕೊಳ್ಳಬೇಕು. ಆ ನಂತರ ಪ್ರವರ್ಗ ರಚಿಸಿ ಒಳಮೀಸಲಾತಿ ವರ್ಗೀಕರಣ ಮಾಡಬೇಕು’ ಎಂದು ಹೇಳಿದರು.

ವಿಧಾನ ಪರಿಷತ್ತಿನ ಸದಸ್ಯ ಎಚ್.ಎಂ. ರೇವಣ್ಣ ಮಾತನಾಡಿ, ‘ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧ. ಸಂವಿಧಾನದಲ್ಲಿ ಇದಕ್ಕೆ ಅವಕಾಶವೇ ಇಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT