ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆ ಗುಣಾತ್ಮಕ ಶಿಕ್ಷಣ ಕ್ರಿಯಾಯೋಜನೆಗೆ ₹1,365 ಕೋಟಿ : ಗೋವಿಂದ ಕಾರಜೋಳ

Last Updated 26 ಜೂನ್ 2020, 13:46 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ಗುಣಾತ್ಮಕ ಶಿಕ್ಷಣ, ಉತ್ತಮ ನಿರ್ವಹಣೆ, ಕಟ್ಟಡಗಳ ನಿರ್ಮಾಣ ಸೇರಿದಂತೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪೂರಕ ಇತರ ಕಾರ್ಯಚಟುವಟಿಕೆಗಳಿಗೆ ಪ್ರಸಕ್ತ ಸಾಲಿನಲ್ಲಿ ₹ 1,365 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 74 ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆವಹಿಸಿದ್ದ ಅವರು, ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳ ಅನುಭವ ಸಾರವನ್ನು ಒಳಗೊಂಡ ``ಸಮರ್ಥರ ಸಾಧನೆ’’, ಭೋದನಾ ಸಾಮಗ್ರಿ, ನೈಜ ಫಲಿತಾಂಶಗಳನ್ನು ಒಳಗೊಂಡ ``ಸಾಧನ ದರ್ಪಣ’’ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಕಥನ `` ನಮ್ಮ ಪ್ರಯಾಣದ ಹೆಜ್ಜೆಗಳು’’ ಪುಸ್ತಕಗಳನ್ನು ಬಿಡುಗಡೆಗೊಳಿಸಿದರು.

ನಂತರ ಮಾತನಾಡಿದ ಅವರು, ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ, ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಣ ತಜ್ಞರಾದ ಡಾ. ಗುರುರಾಜ ಕರಜಗಿ ಇವರನ್ನು ಶೈಕ್ಷಣಿಕ ಸಲಹೆಗಾರರನ್ನಾಗಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಬೆಳ್ಳಿಶೆಟ್ಟಿ ಅವರನ್ನು ಸಮಾಲೋಚಕರನ್ನಾಗಿ ನೇಮಿಸಲಾಗುವುದು ಎಂದರು.

'ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಮಳೂರು, ಬಾಗಲಕೋಟೆ ಜಿಲ್ಲೆಯ ಮುಧೋಳ್ ತಾಲೂಕಿನ ಬೆಳಗಲಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂದಾಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಮಾಚಿಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಕ್ರೀಡಾ ವಸತಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು' ಎಂದು ಹೇಳಿದರು.

ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪಠ್ಯಪುಸ್ತಕಗಳನ್ನು ಒದಗಿಸಲು ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಯಿತು. 12 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದ್ದು, ಸಿಬಿಎಸ್‍ಸಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗಂಗಾರಾಂ ಬಡೇರಿಯಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಸಲಹೆಗಾರರ ಇ. ವೆಂಕಟಯ್ಯ, ವಸತಿ ಸಂಘಗಳ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ.ಶ್ರೀನಿವಾಸ, ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮುಖ್ಯಸ್ಥರಾದ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT