ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: 12 ಸ್ಥಾನಕ್ಕೆ ಜೆಡಿಎಸ್‌ ‍ಪಟ್ಟು

ಜನವರಿ 15ರೊಳಗೆ ಸ್ಥಾನ ಹಂಚಿಕೆ ಅಂತಿಮ: ಎಚ್‌.ಡಿ.ದೇವೇಗೌಡ
Last Updated 29 ಡಿಸೆಂಬರ್ 2018, 20:03 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ಕಾಂಗ್ರೆಸ್‌ ಬಿಟ್ಟುಕೊಡಬೇಕು ಎಂದು ಜೆಡಿಎಸ್‌ ಬೇಡಿಕೆ ಮುಂದಿಟ್ಟಿದೆ.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ‘ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ ಜತೆಗೆ ಮೈತ್ರಿ ಮುಂದುವರಿಯಲಿದೆ. ಇದರಲ್ಲಿ ಅನುಮಾನ ಬೇಡ. 12 ಸ್ಥಾನಗಳನ್ನು ಬಿಟ್ಟುಕೊಡುವಂತೆ ಕೇಳಿದ್ದೇವೆ’ ಎಂದರು.

‘ಸಂಸತ್‌ ಅಧಿವೇಶನ ಜನವರಿ 8ಕ್ಕೆ ಮುಗಿಯಲಿದೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಸದ್ಯ ಬಿಡುವಿಲ್ಲ. ಹೀಗಾಗಿ, 8ರ ನಂತರ ಅವರ ಜತೆಗೆ ಸಮಾಲೋಚನೆ ನಡೆಸುತ್ತೇವೆ. 15ರೊಳಗೆ ಸ್ಥಾನಗಳ ಹಂಚಿಕೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಸೌಹಾರ್ದವಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

‘ಕಳೆದ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿ ಸೋತಿದ್ದು 50 ಸಾವಿರ ಮತಗಳ ಅಂತರದಿಂದ. ಸ್ವಲ್ಪ ಶ್ರಮ ವಹಿಸಿ ಪ್ರಚಾರ ಮಾಡಿದರೆ ನಾವು ಲಕ್ಷ ಮತಗಳ ಅಂತರದಿಂದ ಗೆಲ್ಲಲು ಸಾಧ್ಯವಿದೆ’ ಎಂದು ಅವರು ವಿಶ್ಲೇಷಿಸಿದರು.

ಪ್ರಜ್ವಲ್‌ ಹಾಸನದಿಂದ ಕಣಕ್ಕೆ: ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ಅವರು ಹಾಸನ ಕ್ಷೇತ್ರದಿಂದ ಕಣಕ್ಕೆ ಇಳಿಯಲಿದ್ದಾರೆ ಎಂದು ಅವರು ಪ್ರಕಟಿಸಿದರು.

‘ಕಳೆದ ಚುನಾವಣೆಯಲ್ಲಿ ಆ ಕ್ಷೇತ್ರದಲ್ಲಿ ನಾನು ಗೆಲುವು ಸಾಧಿಸಿದ್ದೆ. ಈ ಸಲ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಅದಕ್ಕೆ ಇನ್ನೂ ಸಮಯಾವಕಾಶ ಇದೆಯಲ್ಲ’ ಎಂದು ಅವರು ಹೇಳಿದರು.

ಒಂದೇ ಕಂತಿನಲ್ಲಿ ನಿಗಮ ಮಂಡಳಿಗಳಿಗೆ ನೇಮಕ: ‘31 ನಿಗಮ ಮಂಡಳಿಗಳಿಗೆ ಶಾಸಕರನ್ನು ನೇಮಕ ಮಾಡಬೇಕು ಎಂದು ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿತ್ತು. ಕಾಂಗ್ರೆಸ್‌ 21 ನಿಗಮಗಳಿಗೆ ಶಾಸಕರನ್ನು ನೇಮಿಸಿದೆ. ಜೆಡಿಎಸ್‌ ‍ಪಾಲಿನ 10 ನಿಗಮಗಳಿಗೆ ಶಾಸಕರ ನೇಮಕ ಮಾಡಬೇಕಿದೆ. ಜನವರಿ 3ರಂದು ಶಾಸಕರು, ಮಾಜಿ ಶಾಸಕರು, ಜಿಲ್ಲಾ ಘಟಕದ ಅಧ್ಯಕ್ಷರ ಸಭೆ ಕರೆಯಲಾಗಿದ್ದು, ಅಂದು ತೀರ್ಮಾನ ತೆಗೆದುಕೊಳ್ಳುತ್ತೇವೆ. ಒಂದೇ ಕಂತಿನಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡುತ್ತೇವೆ’ ಎಂದು ಅವರು ಹೇಳಿದರು.

‘ನಿಗಮ ಮಂಡಳಿಗಳ ನೇಮಕದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಭಿನ್ನಾಭಿಪ್ರಾಯಗಳಿಲ್ಲ. ಅದೆಲ್ಲ ಊಹಾಪೋಹ. ನಿಗಮಗಳಲ್ಲಿ ಅಧ್ಯಕ್ಷ ಸ್ಥಾನದ ಜತೆಗೆ ಉಪಾಧ್ಯಕ್ಷ ಹಾಗೂ ನಿರ್ದೇಶಕ ಸ್ಥಾನಗಳಿವೆ. ಒಂದು ನಿಗಮದ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ಗೆ ಹೋದರೆ, ಉಪಾಧ್ಯಕ್ಷ ಸ್ಥಾನ ಜೆಡಿಎಸ್‌ಗೆ ಸಿಗುತ್ತದೆ’ ಎಂದು ಅವರು ತಿಳಿಸಿದರು.

‘ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರ ನೇಮಕದ ವಿಚಾರದಲ್ಲಿ ಸ್ವಲ್ಪ ಗೊಂದಲ ಉಂಟಾಗಿದೆ ಅಷ್ಟೇ. ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡಬೇಕು ಎಂದು ಕೋರ್ಟ್ ತಿಳಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಆ ಮಂಡಳಿಗೆ ಶಾಸಕರನ್ನು ನೇಮಕ ಮಾಡಿರಲಿಲ್ಲ. ಈ ವಿಚಾರದಲ್ಲಿ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್‌ ಭಾವೋದ್ವೇಗಕ್ಕೆ ಒಳಗಾಗಬಾರದು’ ಎಂದು ಅವರು ಕಿವಿಮಾತು ಹೇಳಿದರು.

ಐವರು ಕಾರ್ಯಾಧ್ಯಕ್ಷರ ನೇಮಕ

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ್‌ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಅವರು ಪಕ್ಷದ ಸಂಘಟನೆ ಕಾರ್ಯದಲ್ಲಿ ತೊಡಗಿದ್ದಾರೆ. ಐವರು ಕಾರ್ಯಾಧ್ಯಕ್ಷರ ನೇಮಕ ಮಾಡಬೇಕು ಎಂದು ಕೋರಿದ್ದಾರೆ. ಜ.3ರ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ದೇವೇಗೌಡ ತಿಳಿಸಿದರು.

‘ನಮ್ಮ ಪಕ್ಷದ ಸಂಘಟನೆ ಮಾಡಬೇಕಿದೆ. ಅದಕ್ಕಾಗಿ ಅಲ್ಪಸಂಖ್ಯಾತ ಸಮಾವೇಶ, ವಿವಿಧ ಸಂಘಟನೆಗಳ ಸಮಾವೇಶಗಳನ್ನು ನಡೆಸುತ್ತೇವೆ. ಇದು ಪಕ್ಷದ ಆಂತರಿಕ ವಿಚಾರ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT