ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಹಣಾಹಣಿ: ಚುರುಕಾಗದ ನಾಮಪತ್ರ ಸಲ್ಲಿಕೆ

ಈವರೆಗೆ 72 ಅಭ್ಯರ್ಥಿಗಳಿಂದ ಉಮೇದುವಾರಿಕೆ
Last Updated 22 ಮಾರ್ಚ್ 2019, 20:27 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಲೋಕಸಭಾ ಕ್ಷೇತ್ರಗಳಿಗೆ ಈವರೆಗೆ ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ಸೇರಿ ಒಟ್ಟು 72 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಮಂಡ್ಯದಿಂದ ಸುಮಲತಾ ಅಂಬರೀಷ್‌ (ಪಕ್ಷೇತರ), ಬೆಂಗಳೂರು ಕೇಂದ್ರದಿಂದ ಪಿ.ಸಿ. ಮೋಹನ್‌ (ಬಿಜೆಪಿ) ಮತ್ತು ಪ್ರಕಾಶ್‌ ರಾಜ್‌ (ಪಕ್ಷೇತರ), ಹಾಸನದಿಂದ ಪ್ರಜ್ವಲ್‌ ರೇವಣ್ಣ (ಜೆಡಿಎಸ್‌), ಉಡುಪಿ– ಚಿಕ್ಕಮಗಳೂರಿನಿಂದ ಶೋಭ ಕರಂದ್ಲಾಜೆ (ಬಿಜೆಪಿ), ತುಮಕೂರಿನಿಂದ ಜಿ.ಎಸ್‌. ಬಸವರಾಜು (ಬಿಜೆಪಿ) ಪ್ರಮುಖರು.

ಇದೇ 19ರಂದು ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಇದೇ 26 ಕೊನೆಯ ದಿನ. ಆದರೆ, ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಜೆಡಿಎಸ್‌– ಕಾಂಗ್ರೆಸ್‌ ಮೈತ್ರಿಕೂಟ ಮತ್ತು ಬಿಜೆಪಿ ಹೆಣಗಾಡುತ್ತಿರುವ ಪರಿಣಾಮ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇನ್ನೂ ಬಿರುಸುಗೊಂಡಿಲ್ಲ. ನಾಲ್ಕು ದಿನಗಳಿಂದಲೂ ನಾಮಪತ್ರ ಸಲ್ಲಿಕೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗಿಂತ ಪಕ್ಷೇತರ ಅಭ್ಯರ್ಥಿಗಳು ಮುಂದಿದ್ದಾರೆ. ಜೊತೆಗೆ ‘ಉತ್ತಮ ಪ್ರಜಾಕೀಯ ಪಕ್ಷ’ ದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸೋಮವಾರ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.

ಬಿಜೆಪಿ ಈಗಾಗಲೇ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಉಳಿದ ಎಂಟು ಕ್ಷೇತ್ರಗಳ ಪೈಕಿ ಮಂಡ್ಯದಲ್ಲಿ ಸುಮಲತಾ ಅಂಬರೀಷ್‌ ಅವರಿಗೆ ಬೆಂಬಲ ನೀಡುವ ಸಾಧ್ಯತೆ ಇದೆ. ಆದರೆ, ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಕಸರತ್ತು ನಡೆಸುತ್ತಿದೆ. ‘ಕೈ’ ಪಕ್ಷದಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ವರಿಷ್ಠರಿಗೆ ಆಯ್ಕೆಯೂ ಜಟಿಲವಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಧವಳಗಿರಿ ನಿವಾಸದಲ್ಲಿ ಶುಕ್ರವಾರ ಇಡೀ ದಿನ ರಾಜಕೀಯ ಚಟುವಟಿಕೆ ಬಿರುಸಾಗಿ ನಡೆಯಿತು. ಪಕ್ಷದ ಮುಖಂಡರು, ಮಠಾಧೀಶರು, ಕಾರ್ಯಕರ್ತರು ಸೇರಿದಂತೆ ಅನೇಕರು ಬಂದು ಹೋದರು.

ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿ ಡಿ.ಎಸ್. ವೀರಯ್ಯ ಕೂಡಾ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರಿ ನಿಶಾ ಅವರನ್ನು ಕಣಕ್ಕಿಳಿಸಲು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಬಯಸಿದ್ದು, ಈ ಬಗ್ಗೆ ಪಕ್ಷದ ನಾಯಕರ ಜೊತೆ ಅವರು ಚರ್ಚೆ ನಡೆಸಿದರು. ಅಲ್ಲದೆ, ನಾಮಪತ್ರ ಸಲ್ಲಿಕೆ, ಚುನಾವಣಾ ಕಾರ್ಯತಂತ್ರ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆಯೂ ಚರ್ಚಿಸಿದರು. ಕಾಂಗ್ರೆಸ್‌ ತ್ಯಜಿಸಿ ಬಿಜೆಪಿ ಸೇರಿದ ಮಾಜಿ ಸಚಿವ ಡಾ. ಮಾಲಕರೆಡ್ಡಿ ಕೂಡ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT