ಸೋಮವಾರ, ಆಗಸ್ಟ್ 2, 2021
28 °C

ಆರೋಗ್ಯ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಆರೋಗ್ಯ ಇಲಾಖೆಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರು, ತಾಂತ್ರಿಕ ಸಿಬ್ಬಂದಿ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ತಕ್ಷಣ ಬಗೆಹರಿಸಲು ಕ್ರಮಕೈಗೊಳ್ಳುತ್ತೇನೆ‘ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

ಜಿಲ್ಲಾ ಪಂಚಾಯಿತಿ ಸಂಭಾಂಗಣದಲ್ಲಿ ಬುಧವಾರ ನಡೆದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಲು ತಕ್ಷಣ ಕ್ರಮಕೈಗೊಳ್ಳುವೆ. ಎರಡ್ಮೂರು ದಿನಗಲ್ಲಿ ಜಿಲ್ಲಾ ಕೇಂದ್ರದಲ್ಲಿ ಕೊವೀಡ್ ಪರೀಕ್ಷಾ ಪ್ರಯೋಗಾಲಯ ತೆರೆಯಲಾಗುತ್ತದೆ. ಅಧಿಕಾರಿಗಳು ಒಗಟ್ಟಿನಿಂದ ಈ ವಿಪತ್ತನ್ನು ಎದುರಿಸಲು ಶ್ರಮಿಸಬೇಕು’ ಎಂದು ತಿಳಿಸಿದರು.

‘ಸದ್ಯದಲ್ಲೇ ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ವೆಂಟಿಲೇಟರ್‌ಗಳು ಬರಲಿವೆ. ಅದರಲ್ಲಿ ಈ ಜಿಲ್ಲೆಗೂ ಕೆಲವು ಪೂರೈಕೆ ಮಾಡಲಾಗುತ್ತದೆ. ಕೊರೊನಾ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರದ ಜತೆಗೆ ಸಾರ್ವಜನಿಕರು ಸಹಕಾರ ನೀಡಬೇಕು’ ಎಂದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ‘ಜಿಲ್ಲೆಯಲ್ಲಿ ಕೊರೊನಾ ಸೋಂಕು ತಡೆಗೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸುಮಾರು 10 ಸಾವಿರ ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಮೊದಲ ಹಂತದಲ್ಲಿ 31 ಕ್ವಾರಂಟೈನ್ ಕೇಂದ್ರಗಳಲ್ಲಿ 5,164 ಹಾಸಿಗೆಗಳನ್ನು ಸಿದ್ಧಪಡಿಸಲಾಗಿದೆ. 36 ಸಭಾಂಗಣ ಮತ್ತು 10 ಯಾತ್ರಿ ನಿವಾಸಗಳಲ್ಲಿ 4,594 ಹಾಸಿಗೆಗಳು ಮತ್ತು 50 ಹಾಸಿಗೆ ಸಾಮರ್ಥ್ಯದ ಒಂದು ಖಾಸಗಿ ಆಸ್ಪತ್ರೆಯನ್ನು ಕ್ವಾರಂಟೈನ್‌ಗೆ ಬಳಸಿಕೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು,  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಜಿಲ್ಲಾ ಆರೋಗ್ಯ  ಅಧಿಕಾರಿ ಡಾ.ಬಿ.ಎಂ.ಯೋಗೇಶ್ ಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರಮೇಶ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು