ಶನಿವಾರ, ಫೆಬ್ರವರಿ 22, 2020
19 °C
ಸಹಾಯಕಿಯರ ಹೋರಾಟ

ವೇತನ ಹೆಚ್ಚಳಕ್ಕಾಗಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ರಾಜ್ಯದ ಹಲವು ಜಿಲ್ಲೆಗಳಿಂದ ‘ಬೆಂಗಳೂರು ಚಲೊ’ ಮೂಲಕ ಗುರುವಾರ ಬೆಳಿಗ್ಗೆ ನಗರಕ್ಕೆ ಬಂದ ಪ್ರತಿಭಟನಾಕಾರರು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ಮೆರವಣಿಗೆ ನಡೆಸಿದರು.

ಮೆರವಣಿಗೆ ಬಳಿಕ ಉದ್ಯಾನದಲ್ಲಿ ಬಹಿರಂಗ ಸಭೆ ನಡೆಸಿದರು. ‘ಕೇಂದ್ರ ಸರ್ಕಾರದ ಮುಂಬರುವ ಬಜೆಟ್‌ನಲ್ಲಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಬೇಕು’ ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ‘ಉದ್ಯಾನದಲ್ಲೇ ಅಹೋರಾತ್ರಿ ಧರಣಿ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಪ್ರತಿಭಟನಾ ಸ್ಥಳಕ್ಕೆ ಸಂಜೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಹಾಗೂ ನಿರ್ದೇಶಕ ಕೆ.ಎ. ದಯಾನಂದ, ‘ಕೆಲವೇ ದಿನಗಳಲ್ಲಿ ಸಚಿವರ ಸಮ್ಮುಖದಲ್ಲಿ ಸಭೆ ಕರೆಯಲಾಗುವುದು. ಮುಖಂಡರನ್ನೂ ಆಹ್ವಾನಿಸಲಾಗುವುದು’ ಎಂದರು. ಅದಕ್ಕೆ ಒಪ್ಪಿದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ಪ್ರತಿಭಟನೆ ಕೈಬಿಟ್ಟರು.

‘ರಾಜ್ಯದಲ್ಲಿ 1.30 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಇದ್ದಾರೆ. ಇವರಿಗೆ ಸದ್ಯ ನೀಡುತ್ತಿರುವ ವೇತನ ಯಾವುದಕ್ಕೂ ಸಾಲುತ್ತಿಲ್ಲ. ಸೇವಾ ಜ್ಯೇಷ್ಠತೆ ಆಧಾರದಲ್ಲಿ ವೇತನ ನೀಡಬೇಕು. ಎಲ್‌ಕೆಜಿ ಹಾಗೂ ಯುಕೆಜಿಯನ್ನು ಅಂಗನವಾಡಿಯಲ್ಲಿ ಆರಂಭಿಸಬೇಕು. ₹21 ಸಾವಿರ ಕನಿಷ್ಠ ವೇತನ ಹಾಗೂ ನಿವೃತ್ತಿ ಬಳಿಕ ₹5 ಸಾವಿರ ಪಿಂಚಣಿ ನೀಡಬೇಕು. ಉಚಿತ ವೈದ್ಯಕೀಯ ಸೌಲಭ್ಯ ಹಾಗೂ ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು