ಶುಕ್ರವಾರ, ಆಗಸ್ಟ್ 7, 2020
28 °C
ಬೇಡಿಕೆಗಳು ಈಡೇರುವವರೆಗೂ ಸೇವೆಗೆ ಗೈರುಹಾಜರಾಗಲು ನಿರ್ಧಾರ

ಆಶಾ ಕಾರ್ಯಕರ್ತೆಯರಿಂದ ಮುಷ್ಕರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಾದ್ಯಂತ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸಿದ್ದಾರೆ. 

₹ 6 ಸಾವಿರ ಇರುವ ಗೌರವಧನವನ್ನು ₹ 12 ಸಾವಿರಕ್ಕೆ ಏರಿಕೆ ಮಾಡಬೇಕೆಂದು ಒತ್ತಾಯಿಸಿರುವ ಅವರು, ಸೇವೆ ಸ್ಥಗಿತ ಮಾಡುವ ಜತೆಗೆ ತಮ್ಮ ಬೇಡಿಕೆಗಳ ಬಗ್ಗೆ ಆಯಾ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತೊಮ್ಮೆ ಮನವಿ ಪತ್ರ ಸಲ್ಲಿಸಿದರು.

ಕನಕಪುರ ಹಾಗೂ ರಾಮನಗರ ಭಾಗದ ಆಶಾ ಕಾರ್ಯಕರ್ತೆಯರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನೂ ಭೇಟಿ ಮಾಡಿ, ತಮ್ಮ ಹೋರಾಟಕ್ಕೆ ಸಹಕಾರ ನೀಡುವಂತೆ ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ‘ಈ ಹೋರಾಟದಲ್ಲಿ ನಿಮ್ಮ ಬೆನ್ನಿಗೆ ನಿಲ್ಲುತ್ತೇನೆ’ ಎಂದು ಭರವಸೆ ನೀಡಿದರು. 

ಕೋವಿಡ್‌ ಸೋಂಕಿತರು ಹಾಗೂ ಸೋಂಕು ಶಂಕಿತರ ಪತ್ತೆ, ಕ್ವಾರಂಟೈನ್‌ಗೆ ಒಳಪಡಿಸುವಿಕೆ, ಕಂಟೈನ್‌ಮೆಂಟ್ ವಲಯಗಳಲ್ಲಿ ಸಮೀಕ್ಷೆ ಸೇರಿದಂತೆ ವಿವಿಧ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಸೇವೆಗೆ ಗೈರಾಗಿದ್ದಾರೆ. 

‘ಗೌರವಧನ ಹೆಚ್ಚಳ, ಸುರಕ್ಷಾ ಸಾಧನಗಳನ್ನು ಒದಗಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು. ಅಲ್ಲಿಯವರೆಗೂ ನಾವು ಸೇವೆಗೆ ಹಾಜರಾಗುವುದಿಲ್ಲ. ನಮ್ಮ ಸೇವೆಯ ಮಹತ್ವ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಅರಿವಿಗೆ ಬರಲಿದೆ. ಅಪಾಯ ಇರುವುದು ತಿಳಿದಿದ್ದರೂ ನಾವು ಹಿಂಜರಿಯದೆ ಕಾರ್ಯನಿರ್ವಹಿಸಿದ್ದೇವೆ. ಮನೆ ಮನೆಗೆ ಭೇಟಿ ನೀಡಿ, ಮಾಹಿತಿ ಕಲೆ ಹಾಕಿದ್ದೇವೆ. ಕಳೆದ ನಾಲ್ಕು ತಿಂಗಳಲ್ಲಿ ಹಲವು ಕಾರ್ಯಕರ್ತೆಯರು ಹಲ್ಲೆಗೆ ಒಳಗಾಗಿದ್ದಾರೆ. ಇಷ್ಟಾಗಿಯೂ ಪರಿಸ್ಥಿತಿ ಅರಿತು, ಕಾರ್ಯನಿರ್ವಹಿಸಿದ್ದೇವೆ. ಇನ್ನು ಮುಂದೆ ನಾವು ಮನೆಯಲ್ಲಿಯೇ ಇರುತ್ತೇವೆ’ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು