ಸೋಮವಾರ, ಜುಲೈ 13, 2020
29 °C
ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣ

ಯೋಗೀಶಗೌಡ ಕೊಲೆ ಪ್ರಕರಣ: ಎಎಸ್‌ಪಿ ಬಾಲದಂಡಿ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಗೌಡರ್‌ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು, ಹಾವೇರಿ ಜಿಲ್ಲಾ ಹೆಚ್ಚುವರಿ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಪ್ರಶ್ನಿಸುತ್ತಿದ್ದಾರೆ.

ನಗರದ ಸಿಬಿಐ ಕಚೇರಿಯಲ್ಲಿ ಮಂಗಳವಾರ ಬೆಳಿಗ್ಗೆಯಿಂದ ವಿಚಾರಣೆ ನಡೆಯುತ್ತಿದೆ. ಪ್ರಕರಣ ಸಂಬಂಧ ಎಂಟು ಮಂದಿ ಆರೋಪಿಗಳ ವಿರುದ್ಧ ಇತ್ತೀಗಷ್ಟೇ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಸಿಬಿಐ, ತನಿಖೆಯಲ್ಲಿ ಮತ್ತಷ್ಟು ಆರೋಪಿಗಳು ಭಾಗಿಯಾಗಿರುವುದಾಗಿ ನ್ಯಾಯಾಲಯಕ್ಕೆ ಹೇಳಿತ್ತು. ಅದರಂತೆ ಇದೀಗ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದೆ.

ಹತ್ಯೆ ನಡೆದ ಅವಧಿಯಲ್ಲಿ ಬಾಲದಂಡಿ ಅವರು ಹುಬ್ಬಳ್ಳಿ- ಧಾರವಾಡ ಮಹಾನಗರದ ಡಿಸಿಪಿ (ಅಪರಾಧ) ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಾರಣಕ್ಕೆ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಬರುವಂತೆ ಬಾಲದಂಡಿಗೆ ನೋಟಿಸ್ ನೀಡಿದ್ದರು.

ಯೋಗೀಶಗೌಡ ಕೊಲೆಯ ಹಿಂದೆ ರಾಜಕೀಯ ಕಾರಣವಿರಬಹುದೇ ಎಂದೂ ಸಿಬಿಐ ಪರಿಶೀಲನೆ ನಡೆಸುತ್ತಿದೆ. ಕಾಂಗ್ರೆಸ್‌ ಪ್ರಭಾವಿ ರಾಜಕಾರಣಿಯೊಬ್ಬರ ಕೈವಾಡವಿದೆಯೇ ಎಂದೂ ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ಈ ರಾಜಕಾರಣಿಯ ಆಪ್ತ ಸಹಾಯಕರು, ಸ್ನೇಹಿತರೂ ಸೇರಿದಂತೆ ಅನೇಕರ ವಿಚಾರಣೆ ನಡೆದಿದೆ. ಇನ್ನೂ ಹಲವರನ್ನು ಸಿಬಿಐ ಅಧಿಕಾರಿಗಳು ಪ್ರಶ್ನಿಸುವ ಸಾಧ್ಯತೆಯಿದೆ ಎಂದು ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಧಾರವಾಡದ ಸಪ್ತಾಪುರಬಾವಿಯ ಬಳಿ 2016ರಲ್ಲಿ ಯೋಗೀಶಗೌಡರ ಕೊಲೆ ಆಗಿತ್ತು. ಆ ವೇಳೆ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದ ಪೊಲೀಸ್‌ ಅಧಿಕಾರಿಗಳ ವಿಚಾರಣೆಯೂ ನಡೆಯುವ ಸಂಭವವಿದೆ.

ಉಪನಗರ ಪೊಲೀಸರು ಆರು ಮಂದಿ ವಿರುದ್ಧ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು. ಆದರೆ, ರಾಜ್ಯ ಸರ್ಕಾರದ ಆದೇಶದಂತೆ ತನಿಖೆ ನಡೆಸುತ್ತಿರುವ ಸಿಬಿಐ ಇವರನ್ನು ಬಿಡುಗಡೆ ಮಾಡಿ ಬೇರೆ ಎಂಟು ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ಏಳು ಮಂದಿ ಬಂಧನದಲ್ಲಿದ್ದು, ಒಬ್ಬರು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ.

ಬಾಲದಂಡಿ ವಿಚಾರಣೆ ಕುರಿತು ಮಾಹಿತಿ ನೀಡಲು ಸಿಬಿಐ ಕೇಂದ್ರ ಕಚೇರಿ ಮೂಲಗಳು ನಿರಾಕರಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು