ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನೊಂದಿಗೆ ಅಂತರ ಕಾಯ್ದುಕೊಳ್ಳಲು ಸೂಚನೆ

ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಭೇಟಿ ಮಾಡಿದ ಶಾಸಕ ಮಹೇಶ್‌
Last Updated 16 ಅಕ್ಟೋಬರ್ 2018, 18:51 IST
ಅಕ್ಷರ ಗಾತ್ರ

ನವದೆಹಲಿ: ‘ಕರ್ನಾಟಕದಲ್ಲಿ ಕಾಂಗ್ರೆಸ್ ಮುಖಂಡರ ಜತೆ ಗುರುತಿಸಿಕೊಳ್ಳವುದು ಬೇಡ. ಆ ಪಕ್ಷದ ಬಗ್ಗೆ ಮೃಧು ಧೋರಣೆ ತಾಳುವುದೂ ಬೇಡ. ಯಾವುದೇ ಕಾರಣಕ್ಕೂ ಅವರಿಗೆ ಬೆಂಬಲ ನೀಡದೆ, ಅಂತರ ಕಾಯ್ದುಕೊಳ್ಳಬೇಕು’ ಎಂದು ಬಿಎಸ್‌ಪಿ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಪಕ್ಷದ ಕರ್ನಾಟಕ ಮುಖಂಡರಿಗೆ ಕಿವಿಮಾತು ಹೇಳಿದ್ದಾರೆ.

ಇತ್ತೀಚೆಗಷ್ಟೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೊಳ್ಳೇಗಾಲದ ಬಿಎಸ್‌ಪಿ ಶಾಸಕ ಎನ್.ಮಹೇಶ್‌ ಸೇರಿದಂತೆ 20ಕ್ಕೂ ಹೆಚ್ಚು ಮುಖಂಡರೊಂದಿಗೆ ಮಂಗಳವಾರ ಇಲ್ಲಿನ ತಮ್ಮ ನಿವಾಸದಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಿ ಚರ್ಚಿಸಿದ ಈಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಉಪ ಚುನಾವಣೆ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಸಂದರ್ಭ ಜೆಡಿಎಸ್‌ಗೆ ನೀಡಿರುವ ಬೆಂಬಲವನ್ನು ಮುಂದುವರಿಸುವಂತೆ ಮಾಯಾವತಿ ಸಲಹೆ ನೀಡಿದ್ದಾರೆ ಎಂದು ಬಿಎಸ್‌ಪಿ ಮೂಲಗಳು ತಿಳಿಸಿವೆ.

ಮಧ್ಯಪ್ರದೇಶ, ಛತ್ತೀಸ್‌ಗಡ ವಿಧಾನಸಭೆ ಚುನಾವಣೆ ಹಾಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳದಿರಲು ನಿರ್ಧರಿಸಲಾಗಿದೆ. ಕರ್ನಾಟಕದಲ್ಲೂ ಆ ಪಕ್ಷಕ್ಕೆ ಬೆಂಬಲ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಮಹೇಶ್ ಅವರು ಪಕ್ಷದಿಂದ ವಿಧಾನಸಭೆಗೆ ಆಯ್ಕೆಯಾಗಿ ನಂತರ ಸಚಿವರಾಗಿದ್ದು, ರಾಜ್ಯದ ಬಿಎಸ್‌ಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದೆ. ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕಲ್ಲದೆ, ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷ ಸಂಘಟನೆಗಾಗಿ ರಾಜೀನಾಮೆ: ‘ಲೋಕಸಭೆ ಚುನಾವಣೆಗಾಗಿ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಕರೆಯಲಾಗಿದ್ದ ಸಭೆಯಲ್ಲಿಭಾಗವಹಿಸಿದ್ದೆವು. ಪಕ್ಷ ಸಂಘಟಿಸಲು ರಾಜ್ಯದಾದ್ಯಂತ ಪ್ರವಾಸ ಮಾಡುವಂತೆ ವರಿಷ್ಠರು ಸೂಚಿಸಿದ್ದಾರೆ’ ಎಂದು ಶಾಸಕ ಮಹೇಶ್‌ ಅವರು ನಂತರ ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT