4
ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ಕಾವೇರಿ ‘ಸ್ಕೀಂ’ ಪ್ರಶ್ನಿಸಿ ‘ಸುಪ್ರೀಂ’ಗೆ ದಾವೆ

Published:
Updated:

ಬೆಂಗಳೂರು: ಸಂಸತ್‌ನಲ್ಲಿ ಚರ್ಚಿಸದೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸಿದ ಕೇಂದ್ರ ಸರ್ಕಾರದ ‘ಸ್ಕೀಂ’ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೂಲ ದಾವೆ ಹೂಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಪ್ರಾಧಿಕಾರ ಮತ್ತು ಸಮಿತಿ ರಚನೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕಾದ ನಿಲುವಿನ ಕುರಿತು ಚರ್ಚಿಸಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಈ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ.

ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ‘ಕಾವೇರಿ ವಿಚಾರದಲ್ಲಿ ಪಕ್ಷ ಭೇದ ಮರೆತು ಸಂಸತ್ತಿನ ಒಳಗೆ ಮತ್ತು ಹೊರಗೆ ಹೋರಾಟ ಮಾಡಲು ಎಲ್ಲ ಸಂಸದರು ಸಹಮತ ವ್ಯಕ್ತಪಡಿಸಿದ್ದಾರೆ’ ಎಂದರು.

‘ರಾಜ್ಯದ ಅಭಿಪ್ರಾಯ ಪಡೆಯದೆ ಮತ್ತು ಹಿತಾಸಕ್ತಿಗಳನ್ನು ಕಡೆಗಣಿಸಿ ತರಾತುರಿಯಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ಈ ತೀರ್ಮಾನ ವಿರುದ್ಧ ಎಲ್ಲದೂ ಧ್ವನಿ ಎತ್ತಿದ್ದಾರೆ. ಸಚಿವರು, ಸಂಸದರು ಈ ವಿಷಯವನ್ನು ಬೇರೆ ಬೇರೆ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ’ ಎಂದು ಅವರು ವಿವರಿಸಿದರು.

‘ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಇದೇ 2ರಂದು ನಡೆಯಲಿದೆ. ಈ ಸಭೆಯಲ್ಲಿ ರಾಜ್ಯದ ಪ್ರತಿನಿಧಿಗಳಾಗಿ ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್‌ ಮತ್ತು ಕಾವೇರಿ ನೀರಾವರಿ ನಿಗಮದ ಆಡಳಿತ ವ್ಯವಸ್ಥಾಪಕ ಪ್ರಸನ್ನ ಭಾಗವಹಿಸಿ, ರಾಜ್ಯದ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅನುಮತಿ ನೀಡಲಾಗಿದೆ’ ಎಂದರು.

‘ಪ್ರಾಧಿಕಾರ ರಚಿಸುವ ಮೊದಲು ಈ ವಿಷಯದ ಕುರಿತು ಸಂಸತ್‌ನಲ್ಲಿ ಚರ್ಚಿಸಬೇಕು ಎಂದು ಅಂತರರಾಜ್ಯ ಜಲ ವಿವಾದ ಕಾಯ್ದೆಯಲ್ಲಿದೆ. ಕಾನೂನು ಹೋರಾಟಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರು ಎಲ್ಲ ಆಯಾಮಗಳಲ್ಲಿ ಸಮಾಲೋಚಿಸಿದ ಬಳಿಕ, ಯಾವ ರೀತಿ ಮತ್ತು ಎಷ್ಟು ದಾವೆ ದಾಖಲಿಸಬೇಕು ಎಂಬ ಬಗ್ಗೆ ತೀರ್ಮಾನಿಸಲಿದ್ದಾರೆ’ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿವಕುಮಾರ್‌, ‘ಸಂಸತ್ತಿನಲ್ಲಿ ಮಂಡಿಸಬೇಕಾದ ವಿಚಾರಗಳಿಗೆ ಪೂರಕವಾದ ಮಾಹಿತಿಗಳನ್ನು ಸಂಸದರಿಗೆ ಒದಗಿಸಲಾಗುವುದು’ ಎಂದರು.

ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ವಿಧಾನ ಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ. ಸದಾನಂದ ಗೌಡ, ಸಂಸದ ವೀರಪ್ಪ ಮೊಯಿಲಿ, ಕಾವೇರಿ ವಿವಾದದಲ್ಲಿ ರಾಜ್ಯದಪರ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸುವ ವಕೀಲರ ತಂಡದ ಸದಸ್ಯ ಮೋಹನ ಕಾತರಕಿ, ಅಡ್ವೊಕೇಟ್‌ ಜನರಲ್‌ ಉದಯ ಹೊಳ್ಳ ಸಭೆಯಲ್ಲಿದ್ದರು.

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !