ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಾರ್ಥನಾ ಸ್ಥಳದಲ್ಲೇ ಪ್ರತಿಭಟನೆ

ಈದ್ಗಾ ಮೈದಾನಕ್ಕೆ ಬಂದು ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ
Last Updated 20 ಡಿಸೆಂಬರ್ 2019, 20:18 IST
ಅಕ್ಷರ ಗಾತ್ರ

ಮಂಡ್ಯ: ನಗರದ ಈದ್ಗಾ ಮೈದಾನದಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸಿದ ನಂತರ ಸಾವಿರಾರು ಮುಸ್ಲಿಮರು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಿದರು.

ನಿಷೇಧಾಜ್ಞೆ ನಡುವೆಯೂ ಮುಸ್ಲಿಮರು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸುತ್ತಾರೆ ಎಂಬ ಸುದ್ದಿ ಹರಡಿದ್ದ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಸುತ್ತಲೂ ಪೊಲೀಸ್‌ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು. ಮೆರವಣಿಗೆಗೆ ಪೊಲೀಸರು ಅನುಮತಿ ನೀಡದ ಕಾರಣ ಮುಸ್ಲಿಮರು ಈದ್ಗಾ ಮೈದಾನದಲ್ಲೇ ಪ್ರತಿಭಟನೆ ನಡೆಸಿದರು.

‘ಸಿಎಎ ತಿರಸ್ಕರಿಸಿ’ ಎಂಬ ಫಲಕ ಹಾಕಿ ಅದರ ಮುಂದೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವರು ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಮುಸ್ಲಿಮರಿಗೆ ಮಾರಕವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು. ಭಾರತದ ಪರ ಜೈಕಾರ ಕೂಗಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.

ಸ್ಥಳಕ್ಕೆ ಬಂದ ಜಿಲ್ಲಾಧಿಕಾರಿ: ಪ್ರತಿಭಟನಾ ಸುದ್ದಿ ತಿಳಿದ ಜಿಲ್ಲಾಧಿಕಾರಿ ಡಾ.ಎಂ.ವೆಂಕಟೇಶ್‌ ಖುದ್ದಾಗಿ ಈದ್ಗಾ ಮೈದಾನಕ್ಕೆ ಬಂದರು. ಮುಸ್ಲಿಂ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ‘ಮನವಿಯನ್ನು ರಾಷ್ಟ್ರಪತಿ ಕಚೇರಿಗೆ ಕಳುಹಿಸಲಾಗುವುದು. ಶಾಂತಿ ಕಾಪಾಡಿಕೊಂಡು ಪ್ರತಿಭಟನೆ ನಡೆಸಬೇಕು’ ಎಂದು ಡಾ.ಎಂ.ವಿ.ವೆಂಕಟೇಶ್‌ ಹೇಳಿದರು.

ಪ್ರತಿಭಟನೆ ವೇಳೆ ಸಿಐಟಿಯು, ಸಿಪಿಐ (ಎಂ), ದಸಂಸ ಮುಖಂಡರು ಹಾಜರಿದ್ದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರಶುರಾಮ್‌ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT