ಭಾನುವಾರ, ಜೂಲೈ 12, 2020
29 °C
ಸಿ.ಎಂ ಅಧ್ಯಕ್ಷತೆಯಲ್ಲಿ ಸಭೆ * ತಕ್ಷಣ 2,200 ಹಾಸಿಗೆ ಮೀಸಲಿಡಲು ಒಪ್ಪಿಗೆ

ಕೋವಿಡ್‌ | ಖಾಸಗಿ ವೈದ್ಯ ಕಾಲೇಜುಗಳಲ್ಲೂ ಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಪೀಡಿತರ ಚಿಕಿತ್ಸೆಗಾಗಿ ತಕ್ಷಣವೇ 2,200 ಹಾಸಿಗೆಗಳನ್ನು ಬಿಟ್ಟುಕೊಡಲು ನಗರದ ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳು ಒಪ್ಪಿಕೊಂಡಿವೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಸರ್ಕಾರದ ಜತೆ ಕೈಜೋಡಿಸಲು ಸಿದ್ಧವಿರುವುದಾಗಿ ಹೇಳಿದರು. ಇನ್ನು ಒಂದು ವಾರದೊಳಗೆ ಕೋವಿಡ್‌ ರೋಗಿಗಳ ಚಿಕಿತ್ಸೆಗಾಗಿ ಹಾಸಿಗೆಗಳ ಸಂಖ್ಯೆಯನ್ನು 4,500 ಹೆಚ್ಚಿಸುವ ಭರವಸೆಯನ್ನೂ ನೀಡಿದರು.

ಬೆಂಗಳೂರಿನಲ್ಲಿ ಈಗಾಗಲೇ ಎರಡು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2,200 ಹಾಸಿಗೆಗಳನ್ನು ಕೋವಿಡ್‌ ಚಿಕಿತ್ಸೆಗೆ ನಿಗದಿ ಮಾಡಲಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿದರೆ 4,500 ಹಾಸಿಗೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಪಡೆಯಬೇಕಾಗುತ್ತದೆ ಎಂದು ಯಡಿಯೂರಪ್ಪ ಸುದ್ದಿಗಾರರಿಗೆ ತಿಳಿಸಿದರು.

ಕಳೆದ ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ, ಇತರ ಎಲ್ಲ ಕಾಲೇಜುಗಳೂ ಪ್ರಯೋಗಾಲಯಗಳು ವ್ಯವಸ್ಥೆ ಮಾಡಿವೆ ಎಂದರು.

‘ಗಂಭೀರ ಇದ್ದರಷ್ಟೇ‌ ಚಿಕಿತ್ಸೆ’
‘ಇನ್ನು ಮುಂದೆ ಕೋವಿಡ್‌ ಚಿಕಿತ್ಸಾ ವಿಧಿ– ವಿಧಾನಗಳಲ್ಲೂ ಕೆಲವು ಬದಲಾವಣೆ ಮಾಡಲಾಗುವುದು. ಕೊರೊನಾ ಸೋಂಕು ತಗುಲಿದವರ ಪೈಕಿ ರೋಗ ಲಕ್ಷಣಗಳು ಇದ್ದವರು, 60 ಕ್ಕೂ ಹೆಚ್ಚು ವಯಸ್ಸಿನವರು, ಮಧುಮೇಹ, ರಕ್ತದ ಒತ್ತಡ, ಮೂತ್ರಪಿಂಡ ಮತ್ತು ಶ್ವಾಸಕೋಶ ಸಮಸ್ಯೆಯಂತಹ ಗಂಭೀರ ಕಾಯಿಲೆ ಇದ್ದವರನ್ನು ಮಾತ್ರ ಕೋವಿಡ್‌ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು. ‘ರೋಗ ಲಕ್ಷಣ ಇಲ್ಲದ ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಇಟ್ಟು ನಿಗಾವಹಿಸಲಾಗುವುದು. ಈ ಎಲ್ಲಾ ಮಾಹಿತಿ ಇರುವ ಚಿಕಿತ್ಸಾ ವಿಧಾನದ ಮಾರ್ಗಸೂಚಿಯನ್ನು ಬುಧವಾರ ಬಿಡುಗಡೆ ಮಾಡಲಾಗುವುದು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು